ಹೊಸನಗರ: ಕುಡಿಯುವ ನೀರು (Drinking Water) ಒದಗಿಸುವುದು ಸರ್ಕಾರದ ಪ್ರಥಮ ಗುರಿ. ಎಂತಹ ಸಂದರ್ಭದಲ್ಲಿಯೂ ಅದರಲ್ಲಿ ವಿಫಲರಾಗಬಾರದು. ಸಮಸ್ಯಾತ್ಮಕ ಪ್ರದೇಶಗಳಿಗೆ ನೀರು ಒದಗಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಪೂರ್ವ ತಯಾರಿ ಕೈಗೊಳ್ಳಿ. ಗ್ರಾಮೀಣ ಪ್ರದೇಶದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬರ ನಿರ್ವಹಣೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆ ಕೊರತೆಯಿಂದ ತಲೆದೋರಿರುವ ಬರ ಪರಿಸ್ಥಿತಿಯನ್ನು ನಿರ್ವಹಿಸಲು ವಿವಿಧ ಇಲಾಖೆಗಳ ಸಮನ್ವಯತೆ ಅಗತ್ಯ. ಈ ದಿಸೆಯಲ್ಲಿ ಅಧಿಕಾರಿಗಳು ಕಾರ್ಯೋನ್ಮುಖವಾಗಬೇಕು ಎಂದರು.
ಇದನ್ನೂ ಓದಿ: Ballari News: ಡಿ.2ರಂದು ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್-2023 ಕಾರ್ಯಕ್ರಮ
ತಾಲೂಕಿನಲ್ಲಿ ಶೇ.37 ರಷ್ಟು ಮಳೆ ಕೊರತೆಯಾಗಿದೆ. ಶೇ.10 ರಷ್ಟು ವಾಡಿಕೆಗಿಂತ ಕಡಿಮೆ ಪ್ರದೇಶದಲ್ಲಿ ಈ ಬಾರಿ ಬಿತ್ತನೆ ಕಾರ್ಯ ನಡೆದಿತ್ತು. ನೀರಿನ ಕೊರತೆಯಿಂದಾಗಿ 5763 ಹೆಕ್ಟೇರ್ ಭೂಮಿಯಲ್ಲಿ ಬೆಳೆದ ಕೃಷಿ ಬೆಳೆಗಳಿಗೆ ಹಾನಿಯಾಗಿದೆ. ಒಟ್ಟಾರೆ 5.50 ಕೋಟಿ ರೂ. ಹಾನಿ ಎಂದು ಅಂದಾಜಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಸಭೆಗೆ ಮಾಹಿತಿ ನೀಡಿದರು.
ತೆರೆದ ಬಾವಿ, ಕಾಲುಸಂಕ ಹಾಗೂ ಗೋಕಟ್ಟೆ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ಅವಕಾಶ ಕಲ್ಪಿಸಬೇಕು. ಈಗಾಗಲೇ ಕೊರೆಯಲಾಗಿರುವ ಕೊಳವೆ ಬಾವಿಗಳಿಗೆ ಬಿಲ್ ಹಣ ಗುತ್ತಿಗೆದಾರರಿಗೆ ಸಂದಾಯವಾಗಿಲ್ಲ. ಈ ಕಾರಣಕ್ಕೆ ಹೊಸ ಕೊಳವೆ ಬಾವಿ ಕೊರೆಸಲು ಸಾಧ್ಯವಾಗಿಲ್ಲ. ಇದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಪಿಡಿಓಗಳು ಮನವಿ ಮಾಡಿದರು.
ಇದನ್ನೂ ಓದಿ: Shivamogga News: ಹೆಬ್ಬಿಗೆ ಸರ್ಕಾರಿ ಶಾಲೆಯಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ
ಸಭೆಯಲ್ಲಿ ತಹಸೀಲ್ದಾರ್ ರಶ್ಮಿ, ತಾಪಂ ಇಒ ನರೇಂದ್ರ ಕುಮಾರ್ ಹಾಗೂ ಮತ್ತಿತರರು ಇದ್ದರು.