Site icon Vistara News

ಮಳೆಹಾನಿ ಸಮಸ್ಯೆ ನಿವಾರಣೆಗೆ ಶೀಘ್ರ ಸಭೆ : ಬಿ.ವೈ.ರಾಘವೇಂದ್ರ

ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದೆರೆಡು ದಿನಗಳಿಂದ ಮಳೆಹಾನಿ ಸಮಸ್ಯೆ ನಿರಂತರವಾಗಿ ಹೆಚ್ಚುತ್ತಲೇ ಇದೆ. ಮಳೆಯಿಂದಾಗಿ ಶಿವಮೊಗ್ಗ ನಗರ ಮತ್ತ ಗ್ರಾಮೀಣ ಪ್ರದೇಶಗಳಲ್ಲಿನ ನಿವಾಸಿಗಳಿಗೆ ತೀವ್ರತರಹದ ಹಾನಿಯುಂಟಾಗಿದ್ದು, ಹಲವು ವರ್ಷಗಳಿಂದ ಕಂಡುಬರುತ್ತಿರುವ ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶೀಘ್ರದಲ್ಲಿ ಸಂಬಂಧಿಸಿದ ಇಲಾಖಾಧಿಕಾರಿಗಳ ಸಭೆ ಕರೆದು ಸಮಾಲೋಚನೆ ನಡೆಸಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳು, ಮಹಾನಗರಪಾಲಿಕೆ ಆಯುಕ್ತರು, ಸ್ಮಾರ್ಟ್‍ಸಿಟಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಪಾಲಿಕೆಯ ಸದಸ್ಯರೊಂದಿಗೆ ನಗರದ ವಿವಿಧ ಬಡಾವಣೆಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ | ಶಿವಮೊಗ್ಗ,ಬೆಂಗಳೂರು,ಮೈಸೂರನ್ನು ತೊಯ್ದ ಭಾರೀ ಮಳೆ

ಪ್ರಸಕ್ತ ಮಾಹೆಯಲ್ಲಿ ಕಳೆದ ಹಲವು ದಶಕಗಳ ಹಿಂದಿನ ಸರಾಸರಿ ಮಳೆಯನ್ನು ಗಮನಿಸಿದಾಗ ವಾಡಿಕೆ ಮಳೆಗಿಂತ 4 ಪಟ್ಟು ಹೆಚ್ಚಿನ ಮಳೆ ಒಂದೆರೆಡು ದಿನದಲ್ಲಿ ಆಗಿರುವುದು ಈ ಎಲ್ಲಾ ಸಮಸ್ಯೆಗಳಿಗೆ ಕಾರಣವಾಗಿದೆ. ಈ ಸಮಸ್ಯೆಗಳನ್ನು ಕೂಲಂಕುಶವಾಗಿ ಪರಿಶೀಲಿಸಿ, ಅಗತ್ಯವಿರುವ ಎಲ್ಲಾ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗುವುದು ಎಂದು ಬಿ.ವೈ.ರಾಘವೇಂದ್ರ ತಿಳಿಸಿದರು.

ಮನೆಗಳ ಕುಸಿತದ ಕುರಿತು ಮಾತನಾಡಿದ ಬಿ.ವೈ.ರಾಘವೇಂದ್ರ , ನಗರದ ತಗ್ಗು ಪ್ರದೇಶಗಳಲ್ಲಿನ 8-10 ವಾರ್ಡುಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿದು, ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗಿದೆ. ಮನೆಗಳಲ್ಲಿನ ದಿನಸಿ, ಮತ್ತಿತರ ಸಾಮಗ್ರಿಗಳು ಹಾನಿಗೊಳಗಾಗಿವೆ. ಈಗಾಗಲೇ 7 ಮನೆಗಳು ಕುಸಿದಿರುವ ಮಾಹಿತಿ ಇದೆ.

ಮತ್ತೆ ಕೆಲವು ಮನೆಗಳು ಕುಸಿಯುವ ಹಂತದಲ್ಲಿವೆ. ಇವುಗಳ ಸಮಗ್ರ ಮಾಹಿತಿ ಪಡೆದು, ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ನಿನ್ನೆ ಮಾಜಿ ಸಚಿವ ಹಾಗೂ ಶಾಸಕ ಕೆ ಎಸ್ಈಶ್ವರಪ್ಪನವರೂ ಕೂಡ ಸಂಬಂಧಿಸಿದ ಇಲಾಖಾಧಿಕಾರಿಗಳೊಂದಿಗೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಅಂತೆಯೇ ನಗರ ಪ್ರದೇಶದಲ್ಲಿನ ಸಂತ್ರಸ್ತರಿಗೆ 9 ಆಯ್ದ ಸ್ಥಳಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ತಾತ್ಕಾಲಿಕ ಅವಧಿಗೆ ಊಟೋಪಚಾರ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದವರು ನುಡಿದರು.ಜಿಲ್ಲೆಯ ಕೆಲವು ತಾಲೂಕುಗಳಲ್ಲಿಯೂ ಮಳೆಯಿಂದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿರುವ ಮಾಹಿತಿ ಇದೆ.

ಸುಮಾರು 75,000 ರಿಂದ 80,000 ಹೆಕ್ಟೇರ್ ಪ್ರದೇಶದಲ್ಲಿನ ಮೆಕ್ಕೆಜೋಳ, 1500 ಹೆಕ್ಟೇರ್ ಇತರೆ ಬೆಳೆ, 150 ಹೆಕ್ಟೇರ್ ತೋಟಗಾರಿಕಾ ಬೆಳೆ ಹಾನಿಯಾಗಿರುವ ಬಗ್ಗೆ ಅಂದಾಜು ಮಾಹಿತಿ ಇದ್ದು, ಈ ಸಂಬಂಧ ಪರಿಹಾರಧನ ಬಿಡುಗಡೆಗೊಳಿಸುವಂತೆ ಈಗಾಗಲೇ ಮುಖ್ಯಮಂತ್ರಿಗಳಲ್ಲಿ ನಿವೇದಿಸಿಕೊಳ್ಳಲಾಗಿದೆ ಎಂದವರು ತಿಳಿಸಿದರು.

ಮಳೆಯ ಪ್ರಮಾಣ ಕಡಿಮೆಯಾಗಿ ಸಹಜ ಸ್ಥಿತಿಗೆ ಮರಳುವವರೆಗೆ ಜಿಲ್ಲೆಯಲ್ಲಿನ ಹಿರಿಯ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ರಜೆಯ ಮೇಲೆ ತೆರಳದಂತೆ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ಜನರ ಸಂಕಷ್ಟಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ತಗ್ಗು ಪ್ರದೇಶಗಳಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಸಂಬಂಧಿಸಿದಂತೆಯೂ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಇದನ್ನೂ ಓದಿ| ಭಾರೀ ಮಳೆ-ಬಿರುಗಾಳಿಗೆ ಕೊಪ್ಪಳದಲ್ಲಿ 5,599 ಪ್ರದೇಶದ ಕೃಷಿ ಬೆಳೆ ಹಾನಿ

ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ವೆಂಕಟೇಶನಗರ, ಗಾಂಧಿನಗರ, ಬಾಪೂಜಿ ನಗರ, ಶಾಂತಮ್ಮ ಲೇಔಟ್, ಮಂಡ್ಲಿ ಸೇರಿದಂತೆ ಹಲವು ಪ್ರದೇಶಗಳಿಗೆ ಸಂಸದರು ಭೇಟಿ ನೀಡಿ ಪರಿಶೀಲಿಸಿದರು. ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಮೇಯರ್ ಸುನಿತಾ ಅಣ್ಣಪ್ಪ, ಉಪಮೇಯರ್ ಶಂಕರ ಗನ್ನಿ, ಜಗದೀಶ್, ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ, ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ಚಿದಾನಂದ ವಟಾರೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | 24 ಗಂಟೆಯಲ್ಲಿ ಸರಾಸರಿ 27 ಮಿ.ಮೀ. ಮಳೆ: ರಾಜ್ಯಾದ್ಯಂತ ಅಪಾರ ಹಾನಿ

Exit mobile version