Site icon Vistara News

Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರಿಡಲು ಶಿಫಾರಸು: ಸಿಎಂ ಬಸವರಾಜ ಬೊಮ್ಮಾಯಿ

recommendation-will-be-sent-to-name-shivamogga-airport-after-bs-yediyurappa

#image_title

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿಯವರಿಂದ ಇದೇ ತಿಂಗಳು ಉದ್ಘಾಟನೆ ಆಗಲಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shivamogga Airport) ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಎನ್‍ಇಎಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿ ಸಿಎಂ ಮಾತನಾಡಿದರು.

2006ರ ಹಿಂದಿನ ಶಿವಮೊಗ್ಗ ಹಾಗೂ ಇಂದಿನ ಶಿವಮೊಗ್ಗದಲ್ಲಿ ಅಜಗಜಾಂತರ ವ್ಯತ್ಯಾಸವಿದ್ದು, ಜಿಲ್ಲೆಯಲ್ಲಿ ಸರ್ವತೋಮುಖ ಅಭಿವೃದ್ದಿಯನ್ನು ನಾವು ಕಾಣುತ್ತಿದ್ದೇವೆ. ಇಂದು ಸುಮಾರು 1,000 ಕೋಟಿ ರೂ.ಗೂ ಅಧಿಕ ವೆಚ್ಚದ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ವಸತಿ ಯೋಜನೆಗಳಡಿ ಮನೆಗಳನ್ನು ನೀಡುವುದು, ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ, ಶಿಕ್ಷಣ, ರಸ್ತೆ, ನೀರು, ನಗರಾಭಿವೃದ್ದಿ, ತಂತ್ರಜ್ಞಾನ ಹೀಗೆ ಹತ್ತು ಹಲವು ಪುಣ್ಯದ ಕೆಲಸಗಳು ಜನೋಪಯೋಗಿ ನಾಯಕರಿಂದ ಇಂದು ಸಾಧ್ಯವಾಗಿದೆ. ಕೇವಲ 18 ತಿಂಗಳ ಅವಧಿಯಲ್ಲಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ವಿಮಾನ ನಿಲ್ದಾಣದಿಂದಾಗಿ ಈ ಭಾಗದಲ್ಲಿ ಶೈಕ್ಷಣಿಕ, ಔದ್ಯೋಗಿಕ, ಆರ್ಥಿಕ, ಪ್ರವಾಸೋದ್ಯಮ ಸೇರಿದಂತೆ ಎಲ್ಲ ವಲಯದಲ್ಲಿ ಜಿಲ್ಲೆಯು ಅಭಿವೃದ್ದಿ ಹೊಂದಲಿದೆ ಎಂದರು.

ವಿಮಾನ ನಿಲ್ದಾಣಕ್ಕೆ ಈಗಾಗಲೇ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನಿಡಲು ಸಚಿವ ಸಂಪುಟ ನಿರ್ಧರಿಸಿದ್ದು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27 ರಂದು ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಇದನ್ನೂ ಓದಿ: Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉದ್ಯೋಗಿಗಳು ಬೇಕಿದ್ದಾರೆ; ಆದರೆ, ಅರ್ಜಿ ಹಾಕಬೇಡಿ!

ಶರಾವತಿ ನಿರಾಶ್ರಿತರಿಗೆ ಶಾಶ್ವತ ಪರಿಹಾರ
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿಗೆ ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲಾಗಿದ್ದು ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರದ ಅನುಮತಿ ಪಡೆದ ಬಳಿಕ ನಿರ್ವಸಿತರಿಗೆ ಶಾಶ್ವತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆಗೆ ಕೇಂದ್ರ ಸರ್ಕಾರ ರೂ.500 ಕೋಟಿ ಮಂಜೂರು ಮಾಡಿದೆ ಅದರ ಶಂಕುಸ್ಥಾಪನೆ, ಮಿಲೆಟ್ ಉತ್ಸವವನ್ನು ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದಾರೆ. ಇದರಿಂದ ಜಿಲ್ಲೆಯ ಶೈಕ್ಷಣಿಕ, ಔದ್ಯೋಗಿಕ, ಪ್ರವಾಸೋದ್ಯ, ಕ್ಷೇತ್ರದಲ್ಲಿ ಅಮೂಲಾಗ್ರ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ, ಗೃಹ ಸಚಿವ ಆರಗ ಜ್ಞಾನೇಂದ್ರ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಬಿ.ಎಸ್.ಯಡಿಯೂರಪ್ಪ, ಶಾಸಕರಾದ ಕೆ.ಬಿ.ಅಶೋಕ ನಾಯ್ಕ್, ಆಯನೂರು ಮಂಜುನಾಥ, ಭಾರತಿ ಶೆಟ್ಟಿ, ಡಿ.ಎಸ್. ಅರುಣ್, ಮಹಾನಗರಪಾಲಿಕೆ ಮಹಾಪೌರರಾದ ಶಿವಕುಮಾರ್, ಜಿಲ್ಲಾಧಿಕಾರಿ ಎಸ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Exit mobile version