ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ವೊಂದು (Shivamogga Accident) ಪಲ್ಟಿಯಾಗಿದೆ. ಪರಿಣಾಮ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಶಿವಮೊಗ್ಗದ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ (Road Accident) ಘಟನೆ ನಡೆದಿದೆ.
ಖಾಸಗಿ ಬಸ್ ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿತ್ತು. ಮುಂಬಾಳು ತಿರುವಿನಲ್ಲಿ ಬರುವಾಗ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದೆ. ನೋಡನೋಡುತ್ತಿದ್ದಂತೆ ಬಸ್ ಪಲ್ಟಿ ಹೊಡೆದಿದೆ. ಈ ವೇಳೆ ಬಸ್‌ನಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯಗೊಂಡರು.
ಧಾರಾಕಾರವಾಗಿ ಸುರಿದ ಮಳೆಯಿಂದ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರು ಸಾಗರ, ಆನಂದಪುರ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೂ ರಸ್ತೆಗೆ ಅಡ್ಡಲಾಗಿ ಬಸ್ ಬಿದ್ದ ಪರಿಣಾಮ ಸ್ವಲ್ಪ ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹೀಗಾಗಿ ಪೊಲೀಸರು ಬಸ್ ತೆರವು ಕಾರ್ಯಚಾರಣೆಯಲ್ಲಿ ತೊಡಗಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಚಿಕ್ಕೋಡಿಯಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಸಾವು
ಬೆಳಗಾವಿ ಜಿಲ್ಲೆ ರಾಯಬಾದ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಪಾಲಬಾವಿ ಗ್ರಾಮದ ಮಹಾಲಿಂಗ ನಿಂಗನೂರ (47) ಮತ್ತು ಈರಪ್ಪಾ ಉಗಾರೆ (32) ಮೃತ ದುರ್ದೈವಿಗಳು.
ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ವೇಗವಾಗಿ ಬಂದ ಕಾರು ವಿದ್ಯುತ್ ಕಂಬ ಡಿಕ್ಕಿ ಹೊಡೆದಿದೆ. ಬಳಿಕ ಕಂಬದ ಸಮೇತ ರಸ್ತೆ ಬದಿಯ ಜಮೀನಿಗೆ ನುಗ್ಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಹಿಂಬದಿ ಕುಳಿತಿದ್ದ ಇಬ್ಬರು ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಕೂಡಲೇ ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದವರನ್ನು ರಕ್ಷಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡು ಇಬ್ಬರು ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ