ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ (Smart City) ಯೋಜನೆಯಡಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳ (Development works) ಬಗ್ಗೆ ಸಾರ್ವಜನಿಕರಲ್ಲಿ (Public) ತೀವ್ರ ತರಹದ ಆಕ್ಷೇಪಣೆ ಇದ್ದು, ಸದರಿ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲಿಸಿ, ಗುಣಮಟ್ಟ ಸರಿಯಾಗಿದ್ದಲ್ಲಿ ಮಾತ್ರ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಸೂಚಿಸಿದರು.
ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಸ್ಮಾರ್ಟ್ ಸಿಟಿ ಯೋಜನೆ, ಮೆಗ್ಗಾನ್ ಆಸ್ಪತ್ರೆ, ಪ್ರವಾಸೋದ್ಯಮ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿದ್ಯುತ್ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೈಗೊಂಡಿರುವ ಕಾಮಗಾರಿಗಳ ಗುಣಮಟ್ಟ ಕಳಪೆಯಾಗಿರುವ ಹಾಗೂ ಅಪೂರ್ಣವಾಗಿರುವ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡದಂತೆ ಸೂಚಿಸಿದ ಅವರು, ಮಹಾನಗರಪಾಲಿಕೆ ಆವರಣದಲ್ಲಿ ಅನುಮತಿ ಇಲ್ಲದೆ ಕೈಗೊಳ್ಳಲಾಗಿರುವ ಕಾಮಗಾರಿ ಹಾಗೂ ನಗರದ ವಿವಿಧ ಬಡಾವಣೆಗಳಲ್ಲಿ ಅವೈಜ್ಞಾನಿಕವಾಗಿ ಬ್ಲಾಕ್‌ಗಳನ್ನು ಅಳವಡಿಸಿರುವ ಕಾಮಗಾರಿಗಳು, ಇನ್ನೂ ಕೆಲವು ಸ್ಥಳಗಳಲ್ಲಿ ಅವಶ್ಯಕತೆಗಿಂತ ಹೆಚ್ಚಿನ ಹಣ ವಿನಿಯೋಗ ಮಾಡಿರುವುದು ಕಂಡು ಬಂದಿದೆ.
ಅವೈಜ್ಞಾನಿಕವಾಗಿ ಮಾಡಲಾಗಿರುವ ಪುಟ್ಪಾತ್ ಕಾಮಗಾರಿಯಿಂದಾಗಿ ಮಳೆನೀರು ನಿಂತು ಜನಸಾಮಾನ್ಯರಿಗೆ, ಪಾದಚಾರಿಗಳಿಗೆ, ವಾಹನ ಚಾಲಕರಿಗೆ ತೀವ್ರ ತರಹದ ಅಡಚಣೆ ಉಂಟಾಗುತ್ತಿದೆ. ಸ್ಟೇಡಿಯಂ ಸುತ್ತಲೂ ನಿರ್ಮಾಣಗೊಂಡಿರುವ ವಾಕಿಂಗ್‌ಪಾತ್ ಕಾಮಗಾರಿ ಅವೈಜ್ಞಾನಿಕವಾಗಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ದೂರುಗಳಿವೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ: Uttara Kannada News: ಹೊನ್ನಾವರದ ಟೊಂಕಾ ಕಾಸರಕೋಡು ಬೀಚ್‌ನಲ್ಲಿ 2 ತಿಮಿಂಗಿಲಗಳ ಕಳೇಬರ ಪತ್ತೆ
ಇಂತಹ ಅನೇಕ ಯೋಜನೆಗಳ ಅನುಷ್ಠಾನದಿಂದಾಗಿ ಯೋಜನೆಯ ಆರಂಭದಿಂದ ಮುಕ್ತಾಯ ಹಂತದವರೆಗೂ ಜನ ಕಿರಿಕಿರಿ ಅನುಭವಿಸುತ್ತಿರುವುದು ಬೇಸರದ ಸಂಗತಿಯಾಗಿದೆ. ಸದರಿ ವಿಷಯವನ್ನು ತಾವು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಯ ನಂತರ ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೊಂಡ ಎಲ್ಲಾ ಕಾಮಗಾರಿಗಳ ಕುರಿತು ವಿವರವಾದ ಮಾಹಿತಿಯನ್ನು ಕೂಡಲೇ ಸಲ್ಲಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ಹಾಗೂ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ಮಾಯಣ್ಣಗೌಡ ಅವರಿಗೆ ಸಚಿವರು ಸೂಚಿಸಿದರು.
ಶಿವಮೊಗ್ಗ ನಗರದ ಗೋಪಾಳ ಬಡಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪ ಅವರ ಹೆಸರಿನಲ್ಲಿ ನಿರ್ಮಿಸಲಾಗಿದ್ದ ಬಸ್ ತಂಗುತಾಣದ ಹೆಸರನ್ನು ತೆರವುಗೊಳಿಸಿ, ಸ್ಮಾರ್ಟ್ ಸಿಟಿ ಎಂದು ನಾಮಫಲಕ ಅಳವಡಿಸಿ ರಾಜ್ಯದ ಹಿರಿಯ ನಾಯಕರಿಗೆ ಅಗೌರವ ತೋರಿಸಿದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಈ ಸಂಬಂಧ ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಯಣ್ಣ ಗೌಡ ಅವರಿಗೆ ಸೂಚಿಸಿದರು.
ಇದನ್ನೂ ಓದಿ: Job News : ಅರಣ್ಯ ಇಲಾಖೆಯಲ್ಲಿ 310 ವೀಕ್ಷಕ ಹುದ್ದೆ ಭರ್ತಿ; ಅರ್ಜಿ ಸಲ್ಲಿಕೆ ಹೇಗೆ, ಕೊನೇ ದಿನಾಂಕ ಎಂದು?
ನಗರದ ಹೊರವಲಯದಲ್ಲಿರುವ ಮುದ್ದಣ್ಣನಕೆರೆಯ ಮಣ್ಣನ್ನು ಅಕ್ರಮವಾಗಿ ಸಾಗಾಣಿಕೆ ಮಾಡಿದ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿದ ಅವರು ಆಡಳಿತ ವ್ಯವಸ್ಥೆಯಲ್ಲಿ ತಲೆತೂರಿಸುವ ವ್ಯಕ್ತಿಗಳು ಹಾಗೂ ಅದರಲ್ಲಿ ಶಾಮಿಲಾಗಿರುವ ವ್ಯಕ್ತಿಗಳ ವರ್ತನೆಯನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದು ಸಚಿವರು ತಿಳಿಸಿದರು.
ರಾಜ್ಯದಲ್ಲಿ ಬರ ಘೋಷಣೆಯಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ಸಮೀಕ್ಷೆ ನಡೆಸಿ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಬೆಳೆ ಪರಿಹಾರ ಸಮೀಕ್ಷೆಯಲ್ಲಿ ಮಾನವೀಯ ಆಧಾರದ ಮೇಲೆ ರೈತರಿಗೆ ಅನುಕೂಲವಾಗುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಪ್ರಸಕ್ತ ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಸಕಾಲಿಕ, ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ರೈತರಿಗೆ ಅನುಕೂಲವಾಗುವಂತೆ ವಿದ್ಯುತ್ ಇಲಾಖೆಯ ಅಭಿಯಂತರು ನಿರಂತರವಾಗಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಸಚಿವರು ಮೆಸ್ಕಾಂ ಅಧೀಕ್ಷಕರಿಗೆ ಸೂಚಿಸಿದರು.
ಇದನ್ನೂ ಓದಿ: Weather report : ರಾಜ್ಯದ 6 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ!
ವಿಶೇಷವಾಗಿ ಸೊರಬ ತಾಲೂಕಿನ ಮೂಡಿ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಏತ ನೀರಾವರಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ತುಂಬಿಸಲು ಸಹಕಾರ ನೀಡುವಂತೆ ಸೂಚಿಸಿದ ಅವರು, ಮೂಡಿ ಗ್ರಾಮದಲ್ಲಿ ವಿದ್ಯುತ್ ಉಪ ಕೇಂದ್ರವನ್ನು ಸ್ಥಾಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದವರು ತಿಳಿಸಿದರು.
ಜಿಲ್ಲೆಯಲ್ಲಿ ಕೋಟಿಪುರ, ಗುಡವಿ, ಬಳ್ಳಿಗಾವಿ ಸೇರಿದಂತೆ ಅನೇಕ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಪುಲ ಅವಕಾಶಗಳಿದ್ದು, ಈ ಸಂಬಂಧ ವಿಸ್ತೃತ ವರದಿ ಸಿದ್ಧಪಡಿಸಿ ಸಲ್ಲಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಧರ್ಮಪ್ಪ ಅವರಿಗೆ ಸೂಚಿಸಿದರು. ಪ್ರವಾಸೋದ್ಯಮ ಕ್ಷೇತ್ರಗಳ ಅಭಿವೃದ್ಧಿಯಿಂದಾಗಿ ಜನಸಾಮಾನ್ಯರಲ್ಲಿ ಆರ್ಥಿಕ ವಹಿವಾಟು ಹೆಚ್ಚಲಿದೆ. ಮಾತ್ರವಲ್ಲ ಉದ್ಯೋಗಾವಕಾಶಗಳು ಹೆಚ್ಚಲಿವೆ ಎಂದು ಸಚಿವ ಮಧು ಎಸ್ ಬಂಗಾರಪ್ಪ ಹೇಳಿದರು.
ಜಿಲ್ಲೆಯಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸಲು ಅಗತ್ಯವಾಗಿರುವ ಭೂಮಿಯನ್ನು ಸೂಕ್ತ ಸ್ಥಳದಲ್ಲಿ ಒದಗಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಲೋಖಂಡೆ ಅವರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಮಾತನಾಡಿ, ಕೆಲವು ಕಾಮಗಾರಿಗಳ ಅನುಷ್ಠಾನದಲ್ಲಿ ಅಧಿಕಾರಿಗಳ ನಡುವೆ ಪರಸ್ಪರ ಸಮನ್ವಯತೆ ಇಲ್ಲದೆ ನ್ಯೂನ್ಯತೆಗಳಾಗಿವೆ ಎಂದು ತಿಳಿಸಿದರು.
ಆರಂಭದಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲಿರುವ ಸ್ವಚ್ಚತಾ ಹಿ ಸೇವಾ ಎಂಬ ವಿಶೇಷ ಜನಾಂದೋಲನದ ಪೋಸ್ಟರ್‌ನ್ನು ಸಚಿವರು ಬಿಡುಗಡೆಗೊಳಿಸಿದರು.
ಈ ವೇಳೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.