ಶಿವಮೊಗ್ಗ: ಆಧುನಿಕತೆ-ಯಾಂತ್ರಿಕತೆಯ ಹಿನ್ನಲೆಯಲ್ಲಿ ಶಿಕ್ಷಕರು (Teachers) ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದು, ಅವರು ಮಕ್ಕಳಿಗೆ (Children) ಸ್ವಾಭಿಮಾನದ ನೆಲೆಗಳನ್ನು ತಿಳಿಸಿ ಕೊಡಬೇಕಾಗಿದೆ ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಧ್ಯಾಪಕ ಡಾ. ಮೋಹನ್ ಚಂದ್ರಗುತ್ತಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಉಪನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
ಪ್ರಸ್ತುತ ಆಲೋಚನಾ ಕ್ರಮಗಳಲ್ಲಿ ವ್ಯತ್ಯಾಸವಿದೆ. ಆಧುನಿಕತೆ ವೇಗದಲ್ಲಿ, ಯಾಂತ್ರಿಕತೆಯ ಭರಾಟೆಯಲ್ಲಿ ವಿವೇಕ, ಪರಂಪರೆ ಮರೆ ಮಾಚುತ್ತಿರುವ ಇಂದಿನ ಕಾಲಘಟ್ಟದಲ್ಲಿ ಶಿಕ್ಷಕರಿಗೆ ಪಾಠ ಮಾಡಲು ನೂರಾರು ಸವಾಲುಗಳಿವೆ. ಇಂತಹ ಸಂಕಷ್ಟ ಸ್ಥಿತಿಯನ್ನು ಎದುರಿಸಲು ಆತ್ಮಸ್ಥೈರ್ಯ ಮತ್ತು ವಿವೇಕವನ್ನು ಶಿಕ್ಷಕರು ಸ್ಪಷ್ಟಪಡಿಸಿಕೊಳ್ಳಬೇಕಿದೆ. ಮಕ್ಕಳಿಗೆ ಸ್ವಾಭಿಮಾನವನ್ನು ಕಲಿಸಬೇಕಿದೆ ಎಂದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಶಿಕ್ಷಕರ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಅವರ ಸ್ವಾಭಿಮಾನದ ಬದುಕಿನ ಬಗ್ಗೆ ಸರ್ಕಾರ ಗಮನ ಹರಿಸುತ್ತಿದೆ. ಶಿವಮೊಗ್ಗ ಜಿಲ್ಲೆ ಅಭಿವೃದ್ದಿಯ ಪಥದಲ್ಲಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯ ಜನತೆ, ವಿದ್ಯಾರ್ಥಿಗಳ ಸ್ಪರ್ಧೆಗೆ ಅಗತ್ಯವಾದ ಎಲ್ಲ ರೀತಿಯ ಸೌಲಭ್ಯಗಳನ್ನು ರಾಜ್ಯ-ಕೇಂದ್ರ ಸರ್ಕಾರದಿಂದ ಆಗುತ್ತಾ ಇವೆ ಎಂದರು.
ಇದನ್ನೂ ಓದಿ: Krishna Janmastami: ಕೃಷ್ಣ ಜನ್ಮಾಷ್ಟಮಿ ಸೆಲೆಬ್ರೇಷನ್‌ಗೆ 5 ಬಗೆಯ ಆಕರ್ಷಕ ಅಲಂಕಾರ
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಮಕ್ಕಳಿಗೆ ಮೊದಲು ಜೀವನದ ಶಿಕ್ಷಣ ಕಲಿಸಬೇಕಿದೆ. ಅದಕ್ಕೆ ಗುಣಮಟ್ಟದ ಶಿಕ್ಷಣ ಅತ್ಯಗತ್ಯವಾಗಿದ್ದು ಪಠ್ಯಪುಸ್ತಕದ ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದರು.
ಸರ್ಕಾರಿ ಕಿರಿಯ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಜಿಲ್ಲಾ ಪ್ರಶಸ್ತಿ ಪಡೆದ 38 ಶಿಕ್ಷಕರುಗಳಿಗೆ ಪ್ರಶಸ್ತಿ ನೀಡಿ ಹಾಗೂ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ 80 ಶಿಕ್ಷಕರುಗಳನ್ನು ಸನ್ಮಾನಿಸಲಾಯಿತು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಶಿಕ್ಷಕರ ದಿನಾಚರಣೆ ಹಿನ್ನೆಲೆ ಕಳುಹಿಸಿದ್ದ ಸಂದೇಶವನ್ನು ವಿಷಯ ಪರಿವೀಕ್ಷಕ ಸತೀಶ್ ವಾಚಿಸಿದರು.
ಇದನ್ನೂ ಓದಿ: Money Guide: ಪಿಪಿಎಫ್, ಎನ್‌ಎಸ್‌ಸಿ, ಎಸ್‌ಸಿಎಸ್‌ಎಸ್ ಖಾತೆ ಸ್ಥಗಿತವಾಗದಂತೆ ನೋಡಿಕೊಳ್ಳಿ
ವಿಧಾನಸಭಾ ಸದಸ್ಯ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಾಲಿಕೆ ಮಹಾಪೌರ ಶಿವಕುಮಾರ್, ಉಪ ಮಹಾಪೌರ ಲಕ್ಷ್ಮೀ ಶಂಕರ ನಾಯ್ಕ, ಸದಸ್ಯ ಹೆಚ್.ಸಿ.ಯೋಗೇಶ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ವಿವಿಧ ಶಿಕ್ಷಕರ ಸಂಘಗಳ ಪದಾಧಿಕಾರಿಗಳು ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.