Site icon Vistara News

CRPF Recruitment: ಕೇಂದ್ರ ಸರ್ಕಾರ ಕನ್ನಡಿಗರಿಗೆ ಅನ್ಯಾಯ ಮಾಡಿದೆ: ಕನ್ನಡದಲ್ಲೂ ಪರೀಕ್ಷೆ ನಡೆಸಿ ಎಂದ ಸಿದ್ದರಾಮಯ್ಯ, ಕುಮಾರಸ್ವಾಮಿ

siddaramaiah and kumaraswamy demands to re conduct of crpf recruitment exam

crpf

ಬೆಂಗಳೂರು: ಕೇಂದ್ರೀಯ ಮೀಸಲು ಪಡೆ (ಸಿಆರ್‌ಪಿಎಫ್‌) ನೇಮಕಾತಿಗೆ ನಡೆಸಲಾದ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸದಿರುವ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಚ್‌.ಡಿ. ಕುಮಾರಸ್ವಾಮಿ, ಕೇಂದ್ರ ಬಿಜೆಪಿ ಸರ್ಕಾರ ಮತ್ತೆ ಕನ್ನಡಿಗರಿಗೆ ಉಂಡೆನಾಮ ಹಾಕಿದೆ. ಭಾನುವಾರ ನಡೆದ ಕೇಂದ್ರೀಯ ಮೀಸಲು ಪಡೆ (ಸಿಆರ್‌ಪಿಎಫ್‌) ನೇಮಕಾತಿಗೆ ನಡೆಸಿದ ಕಂಪ್ಯೂಟರ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶವನ್ನೇ ಕೊಟ್ಟಿಲ್ಲ. ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಷ್ಟೇ ಪರೀಕ್ಷೆಗೆ ಅವಕಾಶ ಕೊಡಲಾಗಿದೆ. ಇದು ಖಂಡನೀಯ.

ಒಟ್ಟು 9212 ಹುದ್ದೆಗಳಿಗೆ ನಡೆದ ಈ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಕರ್ನಾಟಕದ 466 ಹುದ್ದೆಗಳೂ ಸೇರಿವೆ. ದುರಂತ ಎಂದರೆ, ಇಷ್ಟು ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಹಿಂದಿ, ಇಂಗ್ಲಿಷ್ ನಲ್ಲಿ ಪರೀಕ್ಷೆ ಬರೆದಿದ್ದಾರೆ, ಬರೆಯುವ ಅನಿವಾರ್ಯ ಸೃಷ್ಟಿಸಲಾಗಿದೆ. ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯುವುದು ನಿರಾಕರಿಸುವುದು ಎಂದರೆ ಸಂವಿಧಾನಕ್ಕೆ ಎಸಗಿದ ಅಪಚಾರ.

ಕೇಂದ್ರ ಸರ್ಕಾರ ತನ್ನ ಸುಪರ್ದಿಯಲ್ಲಿ ನಡೆಸುವ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷ್‌ನಲ್ಲೇ ನಡೆಸುತ್ತಿದೆ. ಕೇವಲ ಹಿಂದಿ ಕೇಂದ್ರಿತ ನೇಮಕಾತಿ ಪ್ರಕ್ರಿಯೆ ಇತರೆ ಭಾಷಿಕರನ್ನು ಉದ್ಯೋಗ ವಂಚಿತರನ್ನಾಗಿಸುವುದು ಮಾತ್ರವಲ್ಲ, ಅನ್ಯ ಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶವಿರುವುದು ಸ್ಪಷ್ಟ ಎಂದು ಅವರು ಹೇಳಿದ್ದಾರೆ.

ಅಷ್ಟೇ ಅಲ್ಲ, ಈ ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳನ್ನು ಹಿಂದಿ ಭಾಷೆಗೆ ಸಂಬಂಧಿಸಿದವು. ಅಲ್ಲಿಗೆ ಸ್ಪಷ್ಟ; ಹಿಂದಿಯೇತರ ಅಭ್ಯರ್ಥಿಗಳು ಈ ನೇಮಕಾತಿಯಲ್ಲಿ ಆಯ್ಕೆ ಆಗಬಾರದು ಹಾಗೂ ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಲಾಗಿದೆ. ಒಕ್ಕೂಟ ವ್ಯವಸ್ಥೆಗೆ ಇದು ಕೇಂದ್ರವೇ ಕೊಟ್ಟ ಮಾರಣಾಂತಿಕ ಪೆಟ್ಟು ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಮುಲಾಜಿಲ್ಲದೆ ಸಿಆರ್‌ಪಿಎಫ್‌ ಮರು ಪರೀಕ್ಷೆ ನಡೆಸಬೇಕು ಹಾಗೂ ಕನ್ನಡ ಸೇರಿ ದೇಶದ ಎಲ್ಲ ಭಾಷೆಗಳಲ್ಲೂ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಇಲ್ಲವಾದರೆ, ಈ ತಾರತಮ್ಯ ಹಾಗೂ ಹಿಂದಿ ಹೇರಿಕೆ ಇನ್ನೊಂದು ದೊಡ್ಡ ಹೋರಾಟಕ್ಕೆ ನಾಂದಿ ಆದೀತು ಎಂದು ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಆಕ್ರೋಶ

ಇದೇ ವಿಷಯದಲ್ಲಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಈ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರಧಾನಿ ಮೋದಿ ಅವರನ್ನು ಆಗ್ರಹಪಡಿಸುತ್ತಿದ್ದೇನೆ.

ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನ ಅಷ್ಟೆ. ಕನ್ನಡ ಭಾಷಾ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರೂ ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಇದು ಅನ್ಯಾಯ.

ರಾಜ್ಯದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಭಾಷಾ ನೀತಿಯಿಂದಾಗಿ ಕೇಂದ್ರದಲ್ಲಿ ಕನ್ನಡಿಗ ಯುವಜನರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತಿದೆ, ಯುವಜನರ ಭವಿಷ್ಯ ಮಂಕಾಗುತ್ತಿದೆ.

ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯ ಭಾಷೆಗಳನ್ನು ಮೂಲೆಗೆ ತಳ್ಳಿ ಹಿಂದಿ ಭಾಷೆಯನ್ನು ನಮ್ಮ ತಲೆ ಮೇಲೆ ಹೇರುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಉದ್ಯಮ, ಉದ್ಯೋಗ, ಶಿಕ್ಷಣ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಹಿಂದಿ ಭಾಷೆಯ ಯಜಮಾನಿಕೆ ಹೆಚ್ಚಾಗುತ್ತಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ.

ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಆರ್‌ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತು ಬಿಜೆಪಿ ಸಂಸದರು ಇದಕ್ಕಾಗಿ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕು ಎಂದಿದ್ದಾರೆ.

ಇದನ್ನೂ ಓದಿ: ಇಂಗ್ಲಿಷ್, ಹಿಂದಿಯಲ್ಲಿ ಮಾತ್ರವೇ ಸಿಆರ್‌ಪಿಎಫ್ ಎಕ್ಸಾಮ್; ಕೇಂದ್ರದ ವಿರುದ್ಧ ಹರಿಹಾಯ್ದ ತ.ನಾಡು ಸಿಎಂ ಸ್ಟಾಲಿನ್

Exit mobile version