ಬೆಂಗಳೂರು: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಅವುಗಳನ್ನು ಮುಂದುವರಿಸಲು ಹೆಣಗಾಡುತ್ತಿರುವ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರವು (Karnataka Government) ಹಲವು ರೀತಿಯಲ್ಲಿ ಸಂಪನ್ಮೂಲ ಕ್ರೋಡೀಕರಣ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ (Guarantee Schemes) ಹಣ ಹೊಂದಿಸಲು ಕೆಲವು ದಿನಗಳ ಹಿಂದಷ್ಟೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದ್ದ ರಾಜ್ಯ ಸರ್ಕಾರವೀಗ, ದಲಿತರಿಗಾಗಿ ಮೀಸಲಿಟ್ಟಿದ್ದ 14,282 ಕೋಟಿ ರೂಪಾಯಿಯನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದೆ.
ಹೌದು, 2024-25ನೇ ಹಣಕಾಸು ವರ್ಷಕ್ಕಾಗಿ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಪಂಗಡದ ಉಪ ಯೋಜನೆಗೆ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಮೀಸಲಿಟ್ಟಿದ್ದ 39,171 ಕೋಟಿ ರೂಪಾಯಿ ಅನುದಾನದಲ್ಲಿ 14,282 ಕೋಟಿ ರೂಪಾಯಿಯನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದೆ. ಪರಿಶಿಷ್ಟ ಜಾತಿ, ಬುಡಕಟ್ಟು ಸಮುದಾಯದವರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಉಚಿತ ಯೋಜನೆಗಳಿಗೆ ರಾಜ್ಯ ಸರ್ಕಾರ ವರ್ಗಾಯಿಸಿರುವುದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.
ನಿರುದ್ಯೋಗ ಯುವಕ-ಯುವತಿಯರಿಗೆ ಹಣಕಾಸು ನೆರವು ಒದಗಿಸುವ ಯುವ ನಿಧಿ ಯೋಜನೆಗೆ ಎಸ್‌ಸಿಎಸ್‌ಪಿ-ಟಿಎಸ್‌ಪಿಯ ಸುಮಾರು 75 ಕೋಟಿ ರೂಪಾಯಿಗಳನ್ನು ಬಳಸಿಕೊಂಡಿದೆ. ಇನ್ನು, ಅನ್ನಭಾಗ್ಯ ಯೋಜನೆಗೆ 104 ಕೋಟಿ ರೂಪಾಯಿಯನ್ನು ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನದಿಂದಲೇ ಬಳಸಿಕೊಂಡಿದೆ.
ಹೀಗೆ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನದ 14,282 ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡಿದೆ. ಮೂಲಗಳ ಪ್ರಕಾರ, ಎಸ್‌ಸಿ, ಎಸ್‌ಟಿ ಸಮುದಾಯದ ವರ್ಗಗಳ ಗ್ಯಾರಂಟಿ ಫಲಾನುಭವಿಗಳಿಗೆ ಮಾತ್ರ ಹಣ ಮೀಸಲಿರಿಸಲಾಗಿದೆ ಎಂದು ತಿಳಿದುಬಂದಿದೆ.
ಕೆಲ ದಿನಗಳ ಹಿಂದಷ್ಟೇ ರಾಜ್ಯದಲ್ಲಿ ಒಂದು ಲೀಟರ್ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ 3 ಸಾವಿರ ಕೋಟಿ ರೂ. ಹೆಚ್ಚುವರಿ ಆದಾಯ ಬರಲಿದೆ ಎಂದು ತಿಳಿದುಬಂದಿದೆ. ಇದಾದ ಕೆಲವೇ ದಿನಗಳಲ್ಲಿ ನಂದಿನಿ ಹಾಲಿನ ಬೆಲೆಯನ್ನೂ 2 ರೂಪಾಯಿ ಏರಿಕೆ ಮಾಡಿದ್ದು, ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರು ಕೂಡ ರಾಜ್ಯ ಸರ್ಕಾರದ ತೀರ್ಮಾನವನ್ನು ಖಂಡಿಸಿದ ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ: CM Siddaramaiah: ಸಿದ್ದರಾಮಯ್ಯ ಈಗ ಕನ್ನಡ ಮೇಷ್ಟ್ರು; ಶಾಲೆಗೆ ಭೇಟಿ ನೀಡಿ ವ್ಯಾಕರಣ ಪಾಠ ಮಾಡಿದ ಸಿಎಂ!