ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ಶಾಲೆಯಲ್ಲಿ ನಾಲ್ಕನೇ ತರಗತಿವರೆಗೆ ಓದಿದ ನಂತರ ಶ್ರೀ ಸಿದ್ದೇಶ್ವರ ಶ್ರೀಗಳು ಮಲ್ಲಿಕಾರ್ಜುನ ಸ್ವಾಮೀಜಿಯವರ ಶಿಷ್ಯರಾದರು.
ಬೆಳೆಯುವ ಪೈರು ಮೊಳಕೆಯಲ್ಲೇ ಎಂಬಂತೆ ಬಾಲಕ ಸಿದ್ಧೇಶ್ವರನ ಚುರುಕುತನ ಮಲ್ಲಿಕಾರ್ಜುನ ಸ್ವಾಮಿಗಳ ಗಮನಕ್ಕೆ ಬರಲು ತಡವಾಗಲಿಲ್ಲ. ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರು ಸಿದ್ಧೇಶ್ವರರನ್ನು ಕರೆದೊಯ್ಯತೊಡಗಿದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಸಿದ್ದೇಶ್ವರ ಶ್ರೀಗಳು ತೇರ್ಗಡೆ ಹೊಂದಿದರು.
ಅಧ್ಯಾತ್ಮದತ್ತ ಸೆಳೆತ
ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಅಧ್ಯಾತ್ಮದ ಬಗ್ಗೆ ಆಳವಾದ ಅಧ್ಯಯನ ನಡೆಸಿದ್ದರು. ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದ ಅವರು ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಪರಿಣತರಾಗಿದ್ದರು. ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದರು. ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರಾಗಿದ್ದರು. ಶ್ರೀ ಸಿದ್ಧೇಶ್ವರ ಶ್ರೀಗಳು ಸಂತರಷ್ಟೇ ಅಲ್ಲ ಜ್ಞಾನೋಪಾಸಕರೂ ಆಗಿದ್ದರು. ಬಹಳ ಅಪರೂಪದ ಸಾಧಕರಾಗಿದ್ದರು.
ಇದನ್ನೂ ಓದಿ | Siddheshwar swamiji | ಕೋಟ್ಯಂತರ ಮಂದಿಗೆ ಜಗತ್ತನ್ನು, ಅದರ ಸೌಂದರ್ಯವನ್ನು ನೋಡುವ ನಿಜವಾದ ದೃಷ್ಟಿ ನೀಡಿದ ಸಂತ