ನವದೆಹಲಿ: ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Sindhuri Vs Roopa) ನಡುವಿನ ವಿವಾದ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್(Supreme Court), ಒಬ್ಬರು ಮತ್ತೊಬ್ಬರ ವಿರುದ್ಧ ಆರೋಪಗಳ ಮಾಡುವುದನ್ನು ಮುಂದುವರಿಸುವುದರ ಬದಲಾಗಿ ಸಂಧಾನ ಸಾಧ್ಯತೆಯತ್ತ ಗಮನಹರಿಸುವಂತೆ ಸಲಹೆ ನೀಡಿದೆ. ಸಿಂಧೂರಿ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮಾನಹಾನಿ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್(Karnataka High court) ನಿರಾಕರಿಸಿರುವುದನ್ನು ಪ್ರಶ್ನಿಸಿ ರೂಪಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕ್ ಮತ್ತು ಪಂಕಜ್ ಮಿತ್ತಲ್ ಅವರ ನೇತೃತ್ವದ ವಿಭಾಗೀಯ ಪೀಠ, ಇಬ್ಬರೂ ಅಧಿಕಾರಿಗಳು ಸಾರ್ವಜನಿಕ ಸೇವೆಯಲ್ಲಿದ್ದು, ಈ ನಡತೆ ಮುಂದುವರಿಯಬಾರದು. ಇಬ್ಬರೂ ಯುವ ಅಧಿಕಾರಿಗಳಾಗಿದ್ದು, ಈ ಹಣಾಹಣಿ ಮುಂದುವರಿದರೆ ಅವರ ವೃತ್ತಿಗೆ ಹಾನಿಯಾಗುತ್ತದೆ” ಎಂದು ಹೇಳಿದೆ.
ಇಬ್ಬರು ಒಮ್ಮತದ ನಿರ್ಧಾರಕ್ಕೆ ಬಂದು ಆರೋಪಗಳನ್ನು ಹಿಂಪಡೆಯಲು ಒಪ್ಪಿದರೆ ಬಾಕಿ ಇರುವ ಪ್ರಕರಣಗಳು ಸೇರಿ ಇಬ್ಬರ ನಡುವೆ ಬಾಕಿ ಇರುವ ಎಲ್ಲಾ ದಾವೆಗಳು ರದ್ದಾಗಲಿವೆ ಎಂದು ನ್ಯಾಯಾಲಯ ಹೇಳಿದೆ. ಕಳೆದ ಡಿಸೆಂಬರ್ 15ರಂದು ಪ್ರಕರಣಕ್ಕೆ ತಡೆ ನೀಡಿದ್ದ ಸುಪ್ರೀಂಕೋರ್ಟ್ ಮಾಧ್ಯಮಗಳಲ್ಲಿ ಮಾತನಾಡದಂತೆ ಇಬ್ಬರು ಅಧಿಕಾರಿಗಳಿಗೆ ಆದೇಶಿಸಿತ್ತು. ಅಲ್ಲದೇ, ವಿವಾದ ಬಗೆಹರಿಸಿಕೊಳ್ಳಲು ಸಂಧಾನಕ್ಕೆ ಮುಂದಾಗುವಂತೆಯೂ ಸಲಹೆ ನೀಡಿತ್ತು.
ರೂಪಾ ಮೌದ್ಗಿಲ್ ವಿರುದ್ಧ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ
ಅಧಿಕಾರಿಗಳಿಬ್ಬರ ಕಚ್ಚಾಟಕ್ಕೆ ಸಂಬಂಧಿಸಿದಂತೆ ಸರ್ಕಾರವು ಇಲಾಖಾ ತನಿಖೆ ನಡೆಸುತ್ತಿದ್ದರೆ, ಈ ವಿಚಾರದಲ್ಲಿ ಮುಂದುವರಿಯದಂತೆ ಸರ್ಕಾರಕ್ಕೂ ಸೂಚಿಸಲಾಗುವುದು ಎಂದು ಹೇಳಿತು. ಸಿಂಧೂರಿ ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ಅವರು ಸಿಂಧೂರಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ಬಯಸಿಲ್ಲ. ಪರಿಹಾರ ಸಾಧ್ಯತೆಯ ಬಗ್ಗೆ ಸಿಂಧೂರಿ ಜೊತೆ ಚರ್ಚಿಸಲು ಹೆಚ್ಚಿನ ಕಾಲಾವಕಾಶ ಬೇಕು ಎಂದರು. ಇದನ್ನು ಆಲಿಸಿದ ಪೀಠವು ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ. ಡಿ ರೂಪಾ ಪರವಾಗಿ ಹಿರಿಯ ವಕೀಲ ಆದಿತ್ಯ ಸೋಂಧಿ ವಾದಿಸಿದರು.
ಏನಿದು ಪ್ರಕರಣ?
ಐಪಿಎಸ್ ಅಧಿಕಾರಿಯಾಗಿರುವ ರೂಪಾ ಅವರು 2023ರ ಫೆಬ್ರವರಿ 18 ಮತ್ತು 19ರಂದು ತಮ್ಮ ಫೇಸ್‌ಬುಕ್ ಅಕೌಂಟ್‌ನಲ್ಲಿ ರೋಹಿಣಿ ಸಿಂಧೂರಿ ಅವರ ಬಗ್ಗೆ ಸಾಲು ಸಾಲು ಆರೋಪಗಳನ್ನು ಮಾಡಿದ್ದರು. ರೋಹಿಣಿ ಸಿಂಧೂರಿ ಅವರು ಮನೆ ಹಾಳು ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದ ಡಿ.ಕೆ. ರವಿ ಅವರ ಸಾವನ್ನೂ ತಳುಕು ಹಾಕಿದ ರೂಪಾ ಅವರು ಇತರ ಐಎಎಸ್ ಅಧಿಕಾರಿಗಳಿಗೆ ಅಸಭ್ಯ ಚಿತ್ರಗಳನ್ನು ರಾತ್ತಿ ಹೊತ್ತು ಕಳುಹಿಸುತ್ತಿದ್ದಾರೆ. ಬೇರೆ ಐಎಎಸ್ ಅಧಿಕಾರಿಗಳ ಮನೆ ಒಡೆಯಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.
ಇದು ಭಾರಿ ಸಂಚಲನವನ್ನು ಸೃಷ್ಟಿಸಿತ್ತು. ಇದರ ವಿರುದ್ಧ ರೋಹಿಣಿ ಸಿಂಧೂರಿ ಅವರು ಕೋರ್ಟ್ ಮೆಟ್ಟಿಲು ಹತ್ತಿದ್ದರು. ಈ ನಡುವೆ, ರಾಜ್ಯ ಸರ್ಕಾರ ಇಬ್ಬರೂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಲ್ಲದೆ, ಅವರನ್ನು ಸೇವೆಯಿಂದ ಮುಕ್ತಿಗೊಳಿಸಿ ರಜೆ ಮೇಲೆ ಕಳುಹಿಸಿತ್ತು. ಇದೀಗ ವಾದ-ವಿವಾದಗಳ ಹಂತ ಮುಗಿದು ಇನ್ನು ರೂಪಾ ಮೌದ್ಗಿಲ್ ವಿಚಾರಣೆ ಎದುರಿಸಬೇಕಾಗುವ ಹಂತ ಬಂದಿದೆ. ಕೆಲವು ದಿನಗಳ ಹಿಂದಷ್ಟೇ ಹೈಕೋರ್ಟ್ ಮಾನನಷ್ಟ ಮೊಕದ್ದಮೆ ರದ್ದು ಕೋರಿದ್ದ ರೂಪಾ ಅವರ ಮನವಿಯನ್ನು ತಿರಸ್ಕರಿಸಿತ್ತು.