ನವ ದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ (ಜುಲೈ 21) ಇಡಿ (ಜಾರಿ ನಿರ್ದೇಶನಾಲಯ) ವಿಚಾರಣೆಗೆ ಹಾಜರಾಗಲಿದ್ದಾರೆ. ಪಕ್ಷದ ಅಧಿನಾಯಕಿ ವಿರುದ್ಧ ಇಡಿ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಅದರಲ್ಲೂ ದೆಹಲಿಯಲ್ಲಿ ಇಡಿ ಕಚೇರಿ ಮುಂಬಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.
ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಈಗಾಗಲೇ ರಾಹುಲ್ ಗಾಂಧಿಯನ್ನು 54 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿರುವ ಜಾರಿ ನಿರ್ದೇಶನಾಲಯವು ಇದೀಗ ಸೋನಿಯಾ ಗಾಂಧಿಯ ವಿಚಾರಣೆ ನಡೆಸಲಿದೆ. ಇದನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಮುಖಂಡರು, ಕೇಂದ್ರ ಸರ್ಕಾರ ತನ್ನ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ದೂರಿದ್ದಾರೆ. ಕಾಂಗ್ರೆಸ್ ಮುಖಂಡರ ವಿರುದ್ಧ ಇಡಿ ಮೂಲಕ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿದ್ದು, ಈ ವಿಚಾರವಾಗಿ ಪ್ರತಿಭಟನೆ ನಡೆಸುವಂತೆ ಎಲ್ಲ ರಾಜ್ಯದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ:
ವಿಪಕ್ಷ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಬುಧವಾರ (ಜುಲೈ 20) ಸಭೆ ನಡೆಸಿ ಪ್ರತಿಭಟನೆಯ ಕುರಿತು ಚರ್ಚೆ ನಡೆಸಲಾಯಿತು. ಈ ವೇಳೆ ಉಪಸ್ಥಿತರಿದ್ದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಕೇಂದ್ರ ಸರ್ಕಾರ ಕಾಂಗ್ರಸ್ ವಿರುದ್ಧ ದಬ್ಬಾಳಿಕೆ ನಡೆಸುತ್ತಿದೆ. ಹೀಗಾಗಿ ಪ್ರತಿ ಕಾರ್ಯಕರ್ತ ಇದರ ವಿರುದ್ಧ ಧ್ವನಿ ಎತ್ತಬೇಕು ಎಂದು ಕರೆ ನೀಡಿದ್ದಾರೆ. ʼಕಾಂಗ್ರೆಸ್‌ನ ಪ್ರತಿ ಕಾರ್ಯಕರ್ತ ಒಗ್ಗಟ್ಟಾಗಿ ಸೋನಿಯಾ ಗಾಂಧಿ ಅವರ ಬೆಂಬಲಕ್ಕೆ ನಿಲ್ಲುತ್ತೇವೆʼ ಎಂದು ಗೆಹ್ಲೋಟ್ ತಿಳಿಸಿದರು.
ಸಭೆಯ ನಿರ್ಣಯದಂತೆ ಗುರುವಾರ ಕಾಂಗ್ರೆಸ್ ಕಾರ್ಯಕರ್ತರು ದೆಹಲಿ ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಕೇಂದ್ರ ಕಚೇರಿಯ ಬಳಿ ಮೊದಲು ಸೇರಲಿದ್ದಾರೆ. ಆ ಬಳಿಕ ಪ್ರತಿಭಟನೆಯ ಬಗ್ಗೆ ಕಾಂಗ್ರಸ್ ಮುಖಂಡ ಅಶೋಕ್ ಗೆಹ್ಲೋಟ್ ಹಾಗೂ ಪಕ್ಷದ ಮಾಧ್ಯಮ ಮುಖ್ಯಸ್ಥ ಪವನ್ ಖೇರ್ ವಿವರಿಸಲಿದ್ದಾರೆ ಎನ್ನಲಾಗಿದೆ. ನಂತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ತಿಳಿಸಲಾಗಿದೆ.
ಕರ್ನಾಟಕದಲ್ಲೂ ಪ್ರತಿಭಟನೆಗೆ ಕರೆ:
ಸೋನಿಯಾ ಗಾಂಧಿ ಅವರಿಗೆ ಇಡಿ ವಿಚಾರಣೆ ಹಿನ್ನೆಲೆಯಲ್ಲಿ ಗುರುವಾರ ಕರ್ನಾಟಕದಲ್ಲಿಯೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಿಂದ ಆರಂಭಗೊಂಡು ರಾಜಭವನದವರೆಗೂ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಈ ಬೃಹತ್ ಮೆರವಣಿಗೆಯಲ್ಲಿ ಐದು ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಈ ಪ್ರತಿಭಟನೆಯಲ್ಲಿ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ಶಾಸಕರು, ಎಂಎಲ್‌ಸಿಗಳು ಸೇರಿದಂತೆ ಅನೇಕ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ: ವಿಸ್ತಾರ Explainer | ಕಾಂಗ್ರೆಸ್ ಕೊರಳಿಗೆ ಮತ್ತೆ ಸುತ್ತಿಕೊಂಡಿದೆ ನ್ಯಾಷನಲ್ ಹೆರಾಲ್ಡ್ ಉರುಳು!
ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ?
2012ರಲ್ಲಿ ಭಾರತೀಯ ಜನತಾ ಪಾರ್ಟಿಯ ಮುಖಂಡ ಹಾಗೂ ವಕೀಲ ಸುಬ್ರಮಣಿಯನ್ ಸ್ವಾಮಿ ಕಾಂಗ್ರೆಸ್ ಮುಖಂಡರ ವಿರುದ್ಧ ದೂರು ದಾಖಲಿಸಿದ್ದರು. ನ್ಯಾಷನಲ್ ಹೆರಾಲ್ಡ್ ಎಂಬ ಪತ್ರಿಕೆಯನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಪ್ರಕಟಣೆ ಮಾಡುತ್ತಿತ್ತು. ಆದರೆ, ಅದನ್ನು ಕಾಂಗ್ರಸ್ಗೆ ಸೇರಿರುವ ಯಂಗ್ ಇಂಡಿಯಾ ಲಿಮಿಟೆಡ್ ಎಂಬ ಸಂಸ್ಥೆ ದುರುದ್ದೇಶಪೂರಿತ ರೀತಿಯಲ್ಲಿ ಸ್ವಾಧೀನಪಡಿಸಿಕೊಂಡಿದೆ ಎಂದು ಅವರು ಆರೋಪಿಸಿದ್ದರು. ಇದರಿಂದ ಸುಮಾರು 2,000 ಕೋಟಿ. ರೂ ಅಷ್ಟು ಹಗರಣವಾಗಿದೆ ಎಂದು ಸುಬ್ರಮಣಿಯನ್ ಸ್ವಾಮಿ ದೂರಿದ್ದರು.
ಈ ವಿಚಾರವಾಗಿ 2014ರಿಂದ ಆರಂಭಗೊಂಡು ತೀವ್ರ ಜಾರಿ ನಿರ್ದೇಶನಾಲಯವು ತನಿಖೆ ನಡೆಸಿದೆ.
ಇದನೂ ಓದಿ: ನ್ಯಾಷನಲ್ ಹೆರಾಲ್ಡ್: ಜೂ.23ರಂದು ಹಾಜರಾಗಲು ಸೋನಿಯಾ ಗಾಂಧಿಗೆ ED ಸಮನ್ಸ್