ಬೆಂಗಳೂರು: 2012ರಲ್ಲಿ ಧರ್ಮಸ್ಥಳ ಸಮೀಪದ ಪಾಂಗಾಳ ಎಂಬಲ್ಲಿ ನಡೆದಿದ್ದ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ ಕೊಲೆ (Soujanya Case) ಪ್ರಕರಣದ ಮರು ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ (Karnataka Government) ಆದೇಶ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು (Public interest Litigation) ಹೈಕೋರ್ಟ್ (Karnataka High court) ವಜಾಗೊಳಿಸಿದೆ. ಈ ಸಂದರ್ಭದಲ್ಲಿ ಅದು ಸರ್ಕಾರ, ಮೂಲ ಅರ್ಜಿದಾರರು ಮತ್ತು ಸೌಜನ್ಯ ಕುಟುಂಬ (Soujanya Family) ಸಿಬಿಐ ಕೋರ್ಟ್ (CBI Court) ನೀಡಿರುವ ತೀರ್ಪಿನ ವಿರುದ್ಧ ಮೇಲ್ಮನವಿ (Appeal to CBI Court) ಸಲ್ಲಿಸಲು ಅವಕಾಶವಿದೆ ಎಂದು ಹೇಳಿತು.
ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಆರೋಪಿ ಎಂದು ಬಿಂಬಿತನಾಗಿದ್ದ ಸಂತೋಷ್ ರಾವ್ ಖುಲಾಸೆಗೊಂಡಿರುವ ಹಿನ್ನೆಲೆಯಲ್ಲಿ ನಿಜವಾದ ಆರೋಪಿಯನ್ನು ಪತ್ತೆ ಹಚ್ಚಲು ಪ್ರಕರಣದ ಮರು ತನಿಖೆ ನಡೆಸಬೇಕು. ಕರ್ನಾಟಕ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಅಥವಾ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಹೊಸದಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿ ಪಿಐಎಲ್ ದಾಖಲಾಗಿತ್ತು.
ಪರ್ಯಾಯ ಮಾರ್ಗ ಸೂಚಿಸಿದ ಕೋರ್ಟ್
ಬೆಂಗಳೂರಿನ ಶೇಷಾದ್ರಿಪುರದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ ಜಿ ನವೀನ್ ಕುಮಾರ್ ಮತ್ತು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು. ಅರ್ಜಿದಾರರು ಎತ್ತಿರುವ ಮನವಿ ಕುರಿತು ಕಾನೂನಿನಡಿ ಲಭ್ಯವಿರುವ ಪರ್ಯಾಯ ವಿಧಾನಗಳ ಮೂಲಕ ಪರಿಹಾರ ಪಡೆಯಬಹುದು ಎಂದು ಅಭಿಪ್ರಾಯಪಟ್ಟು ನ್ಯಾಯಾಲಯವು ಅರ್ಜಿ ವಜಾಗೊಳಿಸಿತು.
ಅರ್ಜಿದಾರರ ಮನವಿ ಏನಾಗಿತ್ತು?
ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು ಮರು ತನಿಖೆಯ ಅಗತ್ಯತೆಯನ್ನು ಪ್ರತಿಪಾದಿಸಿದ್ದರು.
- 2012ರಲ್ಲಿ ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಘಟನೆ ನಡೆದಿದೆ. ಪ್ರಕರಣದ ಆರೋಪಿ ವಿರುದ್ಧ ಸೂಕ್ತ ಸಾಕ್ಷ್ಯಧಾರಗಳು ಇಲ್ಲ ಎಂಬ ಕಾರಣಕ್ಕೆ ಆತನನ್ನು ವಿಚಾರಣಾಧೀನ ನ್ಯಾಯಾಲಯ ಖುಲಾಸೆಗೊಳಿಸಿದೆ.
- ಆದರೆ, ಘಟನೆ ನಡೆದಿರುವುದು ನಿಜ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಅಂದರೆ ನಿಜವಾದ ದೋಷಿ ಪ್ರಕರಣದಿಂದ ತಪ್ಪಿಸಿಕೊಂಡಿದ್ದಾರೆ.
- ಪ್ರಕರಣ ನಡೆದ ನಂತರ ತನಿಖಾಧಿಕಾರಿ ಮತ್ತು ವೈದ್ಯರಿಂದ ಕೆಲವೊಂದು ಲೋಪಗಳು ನಡೆದಿವೆ. ಇದರಿಂದ ಮರು ತನಿಖೆ ನಡೆಸಬೇಕು ಎಂಬ ಅಭಿಪ್ರಾಯ ಸಾರ್ವಜನಿಕರಿಂದ ವ್ಯಕ್ತವಾಗಿದೆ.
- ಹೀಗಾಗಿ, ಸಿಬಿಐ, ಇಲ್ಲವೇ ಸ್ವತಂತ್ರ ತನಿಖಾ ಸಂಸ್ಥೆ ಅಥವಾ ಎಸ್‌ಐಟಿಯಿಂದ ಹೊಸದಾಗಿ/ಮರು ತನಿಖೆ ನಡೆಸುವಂತೆ ಸರ್ಕಾರಕ್ಕೆ ಆದೇಶಿಸಬೇಕು.
ಪೀಠ ಕೊಟ್ಟ ಪರ್ಯಾಯ ಸಲಹೆಗಳೇನು?
- ಪ್ರಕರಣದಲ್ಲಿ ಸರ್ಕಾರ, ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬವು ಆರೋಪಿಯನ್ನು ದೋಷಮುಕ್ತಗೊಳಿಸಿದ ವಿಚಾರಣಾಧೀನ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ. ಮೇಲ್ಮನವಿಯಲ್ಲಿ ತನಿಖಾ ಲೋಪಗಳನ್ನು ಪರಿಗಣಿಸಬಹುದಾಗಿದೆ.
- ಮೇಲ್ಮನವಿ ಸಲ್ಲಿಸಲು ಸಂತ್ರಸ್ತ ಕುಟುಂಬಕ್ಕೆ ನೀವು ಸಹಾಯ ಮಾಡಿ ಎಂದು ಕೋರ್ಟ್ ವಕೀಲ ಅರುಣ್ ಶ್ಯಾಂ ಅವರಿಗೆ ಸಲಹೆ ನೀಡಿತು.
- ಸಭೆ-ಸಮಾರಂಭ, ಧರಣಿ ಹಾಗೂ ಸಾರ್ವಜನಿಕರ ಭಾವನೆಗಳಿಂದ ಕಾನೂನು ಚೌಕಟ್ಟು ಮೀರಲು ಸಾಧ್ಯವಿಲ್ಲ.
- ಅರ್ಜಿದಾರರ ಉದ್ದೇಶ ಒಳ್ಳೆಯದಿದ್ದರೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕಾನೂನಿನ ಮಿತಿ ಅರಿತು ವ್ಯವಹರಿಸಬೇಕಾಗುತ್ತದೆ.
- ಅರ್ಜಿ ಹಿಂಪಡೆದು ನಿಮ್ಮ ಮನವಿಗಳ ಕುರಿತು ಕಾನೂನಿನಡಿ ಲಭ್ಯವಿರುವ ಪರ್ಯಾಯ ವಿಧಾನಗಳ ಮೂಲಕ ಪರಿಹಾರ ಪಡೆದುಕೊಳ್ಳಬಹುದು.
ಏನಿದು ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ?
2012ರ ಅಕ್ಟೋಬರ್ 10ರಂದು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಪಾಂಗಾಳ ಎಂಬಲ್ಲಿ ಸೌಜನ್ಯ ಎಂಬ 17 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ನಡೆದಿತ್ತು. ಉಜಿರೆಯ ಎಸ್‌ಡಿಎಂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಆಕೆ ಕಾಲೇಜು ಮುಗಿಸಿ ಧರ್ಮಸ್ಥಳಕ್ಕೆ ಬಂದು ಬಸ್‌ನಿಂದ ಇಳಿದು ಮನೆಗೆ ಹೋಗುತ್ತಿದ್ದಾಗ ದಾರಿಯಲ್ಲಿ ಆಕೆಯ ಕೊಲೆ ಮತ್ತು ಅತ್ಯಾಚಾರ ನಡೆದಿತ್ತು.
ಪ್ರಕರಣವನ್ನು ಮೊದಲಿಗೆ ಬೆಳ್ತಂಗಡಿ ಠಾಣಾ ಪೊಲೀಸರು ತನಿಖೆ ನಡೆಸಿದ್ದರು. ತನಿಖಾಧಿಕಾರಿಗಳು ಕಾರ್ಕಳ ಮೂಲದ ಸಂತೋಷ್ ರಾವ್ ಎಂಬಾತನನ್ನು ಆರೋಪಿಯಾಗಿ ಗುರುತಿಸಿದ್ದರು. ಮುಂದೆ ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಯಿತು. ಸಿಬಿಐ ವಿಶೇಷ ನ್ಯಾಯಾಲಯವು 2023ರ ಜುಲೈ 16ರಂದು ಆರೋಪಿಯನ್ನು ಖುಲಾಸೆಗೊಳಿಸಿತ್ತು. ಇದರಿಂದ ವಿವಿಧ ಸಂಘಟನೆಗಳು ರಾಜಕೀಯ ಪಕ್ಷಗಳು ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿವೆ. ಹೀಗಾಗಿ, ಮರು ತನಿಖೆಗೆ ಆದೇಶಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು. ಕೋರ್ಟ್ ಈಗ ಮೇಲ್ಮನವಿಗೆ ಸೂಚನೆ ನೀಡಿದೆ.