ಬೆಂಗಳೂರು: ದೀಪಾವಳಿ ಹಬ್ಬ (Deepavali Special Bus) ಸಮೀಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಾರಿಗೆ ನಿಗಮವು ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಿದೆ. ಅಕ್ಟೋಬರ್ 24ರಂದು ನರಕ ಚತುರ್ದಶಿ ಹಾಗೂ 26ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ 21 ರಿಂದ 23 ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಗೆ ಬೆಂಗಳೂರಿನಿಂದ 26ರಿಂದ 30ರವರೆಗೆ ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗಿದೆ.
ಎಲ್ಲಿಗೆಲ್ಲ ವಿಶೇಷ ಸಾರಿಗೆ ವ್ಯವಸ್ಥೆ?
- ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ವ್ಯವಸ್ಥೆ ಇದೆ.
- ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಬಸ್ ಸಂಚಾರ ಮಾಡಲಿದೆ.
- ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ತೆರಳಲು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಬಸ್ ವ್ಯವಸ್ಥೆ ಮಾಡಲಾಗಿದೆ.
- ಬೆಂಗಳೂರು ನಗರದ ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಅಗತ್ಯಗಳಿಗನುಗುಣವಾಗಿ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ರಿಯಾಯಿತಿ ಉಂಟು
ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕರ್ನಾಟಕ ಹಾಗೂ ಅಂತಾರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇಕಡ 5ರಷ್ಟು ರಿಯಾಯಿತಿ ಹಾಗೂ ಹೋಗುವ & ಬರುವ ಪ್ರಯಾಣದ ಟಿಕೆಟ್ ಅನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲ ತಾಲೂಕು, ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಪ್ರಯಾಣಿಕರ ಸಂಖ್ಯೆಗಳಿಗನುಗುಣವಾಗಿ ವಿಶೇಷ ಬಸ್‌ಗಳು ರಸ್ತೆಗಿಳಿಯಲಿವೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ | ದೀಪಾವಳಿ ಪ್ರವಾಸ: ಈ ಎಲ್ಲ ಜಾಗಗಳು ಹಣತೆಯ ಹಬ್ಬಕ್ಕೆ ಬೆಸ್ಟ್!