Site icon Vistara News

Government Job | ಕ್ರೀಡಾಪಟುಗಳಿಗೆ ನೇರ ನೇಮಕಾತಿಯಲ್ಲಿ ಸರ್ಕಾರಿ ಉದ್ಯೋಗ: ಸಿಎಂ ಬೊಮ್ಮಾಯಿ

Sports Awards

ಬೆಂಗಳೂರು: ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಆಯ್ಕೆ ಸಮಿತಿಯ ಮೂಲಕ ಕ್ರೀಡಾಪಟುಗಳಿಗೆ ನೇರ ನೇಮಕಾತಿಯಲ್ಲಿ ಸರ್ಕಾರಿ ಉದ್ಯೋಗ (Government Job) ನೀಡುವ ಯೋಜನೆಗೆ ಮುಂದಿನ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ, ಪದವೀಧರರಾದ ಒಲಿಂಪಿಕ್ಸ್ ಹಾಗೂ ಪ್ಯಾರಾಲಿಂಪಿಕ್ಸ್ ಪದಕ ವಿಜೇತರಿಗೆ ಗ್ರೂಪ್ ಎ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ರಾಜಭವನದಲ್ಲಿ ಮಂಗಳವಾರ (ಡಿ.೬) ಆಯೋಜಿಸಿದ್ದ ಏಕಲವ್ಯ ಕ್ರೀಡಾ ಪ್ರಶಸ್ತಿ ಹಾಗೂ ಇತರ ಕ್ರೀಡಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು.

ಪದವೀಧರರಾಗಿರುವ ಏಷ್ಯನ್ ಗೇಮ್ಸ್ ಹಾಗೂ ಕಾಮನ್ ವೆಲ್ತ್ ಕ್ರೀಡಾಕೂಟ ಪದಕ ವಿಜೇತರಿಗೆ ಗ್ರೂಪ್ ಬಿ ಉದ್ಯೋಗ, ಇದಕ್ಕಿಂತ ಕಡಿಮೆ ಸ್ತರದ ಕ್ರೀಡಾಕೂಟದ ಪದಕ ವಿಜೇತರಿಗೆ ಗ್ರೂಪ್ ಸಿ ಹಾಗೂ ಗ್ರೂಪ್ ಡಿ ಉದ್ಯೋಗವನ್ನು ನೀಡಲಾಗುವುದು. ಕ್ರೀಡಾಪಟುಗಳಿಗೆ ಸರ್ಕಾರದ ಉದ್ಯೋಗ ನೀಡುವ ನೀತಿ ಕರ್ನಾಟಕದ ಹೊರತು ಬೇರೆ ಯಾವುದೇ ರಾಜ್ಯದಲ್ಲಿಲ್ಲ ಎಂದರು.

ಇದನ್ನೂ ಓದಿ | Sports awards | 29 ಸಾಧಕರು, 3 ಸಂಸ್ಥೆಗಳಿಗೆ ಏಕಲವ್ಯ, ಕ್ರೀಡಾರತ್ನ, ಕ್ರೀಡಾಪೋಷಕ ಪ್ರಶಸ್ತಿ ಘೋಷಣೆ: ಡಿ. 6ರಂದು ಪ್ರದಾನ

ರಾಜ್ಯ ಸರ್ಕಾರದಿಂದ 75 ಕ್ರೀಡಾಪಟುಗಳಿಗೆ ತರಬೇತಿ
ಕಳೆದ ಆಗಸ್ಟ್ 15 ರಂದು 75 ಕ್ರೀಡಾಪಟುಗಳನ್ನು ದತ್ತು ಪಡೆದು, ಮುಂದಿನ ಪ್ಯಾರೀಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ತರಬೇತಿ ನೀಡಲಾಗುತ್ತಿದೆ. 4 ವರ್ಷದ ತರಬೇತಿ, ಉತ್ತಮ ತರಬೇತುದಾರರು, ಅಗತ್ಯ ವ್ಯವಸ್ಥೆ ಒದಗಿಸಲಾಗುತ್ತಿದೆ. ಇದಕ್ಕಾಗಿ 10 ಲಕ್ಷ ರೂಪಾಯಿ ವಿನಿಯೋಗಿಸಲಾಗಿದ್ದು, ಅವಶ್ಯಕತೆಗೆ ಅನುಸಾರ ಇನ್ನೂ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು. ಕಾಮನ್ ವೆಲ್ತ್, ಏಷಿಯನ್ ಗೇಮ್ಸ್, ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳು ಉತ್ತಮ ಸಾಧನೆಗಳನ್ನು ಮಾಡಬೇಕು ಎಂದರು.

ಕ್ರೀಡೆಗಳಿಗೆ ಮಹತ್ವ ನೀಡಲು ಯುವನೀತಿ ಜಾರಿ
ಯುವ ಕ್ರೀಡಾ ಪ್ರತಿಭೆಗಳು ದೇಶದ ಆಸ್ತಿ. ಏಕಾಗ್ರತೆ, ಹಾಗೂ ಪರಿಶ್ರಮದಿಂದ ಸಾಧನೆ ಮಾಡಿದರೆ ಯಶಸ್ಸು ಖಂಡಿತ ಲಭಿಸುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರೀಡೆಗೆ ಮಹತ್ವವನ್ನು ನೀಡಿದೆ. ಕ್ರೀಡೆ ಹವ್ಯಾಸವಾಗಿ ಪ್ರಾರಂಭವಾಗಿ ರಾಷ್ಟ್ರೀಯ ಸಂಕೇತವಾಗಿ ಇತ್ತೀಚೆಗೆ ಪರಿಗಣಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಯುವನೀತಿಯನ್ನು ತರಲಾಗುವುದು. ಯುವ ಜನತೆಯ ಸಬಲೀಕರಣ ಹಾಗೂ ಕ್ರೀಡಾ ಬೆಳವಣಿಗೆ ಪ್ರಮುಖವಾಗಿದ್ದು, ಇವೆರಡಕ್ಕೂ ಸಮಾನ ಮಹತ್ವವನ್ನು ನೀಡುವಂತಹ ನೀತಿಯನ್ನು ರೂಪಿಸಲಾಗುತ್ತಿದೆ. ಗೃಹ ಇಲಾಖೆಯ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ.2 ಮೀಸಲಾತಿಯನ್ನು ನಿಗದಿಪಡಿಸಲಾಗಿದೆ ಎಂದರು.

ಗ್ರಾಮೀಣ ಕ್ರೀಡೆಗೆ ಪ್ರೋತ್ಸಾಹ
ಗ್ರಾಮಗಳಲ್ಲಿ ನಿಜವಾದ ಕ್ರೀಡಾ ಪ್ರತಿಭೆಗಳಿದ್ದು, ಅವರಿಗೆ ಸೂಕ್ತ ತರಬೇತಿ ನೀಡಿದ್ದಲ್ಲಿ ಮಹತ್ತರ ಸಾಧನೆಗಳನ್ನು ಮಾಡಲು ಶಕ್ತರಾಗಿರುತ್ತಾರೆ. ಆದ್ದರಿಂದ ಗ್ರಾಮ, ತಾಲೂಕು, ಜಿಲ್ಲಾ ಪಂಚಾಯಿತಿ ಹಂತಗಳಲ್ಲಿ ಗ್ರಾಮೀಣ ಕ್ರೀಡಾಕೂಟವನ್ನು ಈ ವರ್ಷದಿಂದ ಪ್ರಾರಂಭಿಸಲಾಗಿದ್ದು, ಖೋಖೋ, ಕಬಡ್ಡಿ, ಕುಸ್ತಿ, ವಾಲಿಬಾಲ್, ಕಂಬಳದಂತಹ ಕ್ರೀಡೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ, ಶಾಸಕ ರಿಜ್ವಾನ್ ಅರ್ಷದ್, ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು, ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ | Hampi University | ಡಾ.ಮಂಜುನಾಥ್, ಷಡಕ್ಷರಿ, ಕೃಷ್ಣಪ್ಪಗೆ ನಾಡೋಜ ಗೌರವ; ನುಡಿ ಹಬ್ಬದಂದು ಪದವಿ ಪ್ರದಾನ

Exit mobile version