ಬೆಂಗಳೂರು: ಎಸ್‌ಎಸ್‌ಎಲ್‌ಸಿಯ ವಾರ್ಷಿಕ ಪರೀಕ್ಷೆಯು (SSLC Exam 2023) ಮಾರ್ಚ್ 31 ರಿಂದ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಕೆಎಸ್‌ಆರ್‌ಟಿಸಿಯು ನಿಗಮದ ಎಲ್ಲ ಬಸ್‌ಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದೆ.
ಪರೀಕ್ಷೆಯ ದಿನದಂದು ಅಂದರೆ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೂ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಪ್ರಯಾಣಿಸಬಹುದಾಗಿದೆ. ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ತೆರಳಲು ಮತ್ತು ವಾಪಸ್ ಮರಳಲು ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.
ಈ ಸಂಬಂಧ ನಿಗಮದ ಎಲ್ಲ ಚಾಲಕ/ನಿರ್ವಾಹಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ಸನ್ನು ಹತ್ತುವವರಿದ್ದಲ್ಲಿ ಹಾಗೂ ಬಸ್ ಹೋಗುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳು ಬಸ್ಸನ್ನು ಹತ್ತಲು/ ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕೆಎಸ್‌ಆರ್‌ಟಿಸಿಯು ಸಿಬ್ಬಂದಿಗೆ ಸೂಚಿಸಿದೆ.
ಈ ಬಗ್ಗೆ ಎಲ್ಲ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ಡಿಪೋ ಮ್ಯಾನೇಜರ್‌ಗಳಿಗೆ ಸೂಚಿಸಲಾಗಿದೆ.
ಇದನ್ನೂ ಓದಿ : SSLC Exam 2023 | ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ; ಗಣಿತ, ಸಮಾಜ ಶಾಸ್ತ್ರ ಪರೀಕ್ಷಾ ದಿನ ಬದಲು