ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ನೀರು ಪೂರೈಕೆ ಮಾಡುವುದಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಅದರಂತೆ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್, ನೀರಿನ ಸೌಲಭ್ಯ (Free Power, Water) ಒದಗಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ.
ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಶೇಷಾಧಿಕಾರಿ ಮತ್ತು ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ (ಯೋಜನೆ) ಬಿ.ಎಚ್. ಗಿರಿಜಾ ಅವರು ಆದೇಶ ಹೊರಡಿಸಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನಕ್ಕೆ ಒಳಪಡುವ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ರಾಜ್ಯ ಸರ್ಕಾರವು ಗೃಹ ಜ್ಯೋತಿ ಯೋಜನೆಯಡಿ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ಒದಗಿಸುತ್ತಿರುವ ರೀತಿಯಲ್ಲಿಯೇ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೂ ಸಹ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯ ಒದಗಿಸುವುದರಿಂದ ಸರ್ಕಾರಿ ಶಾಲೆಗಳಲ್ಲಿ ಉಳಿಕೆಯಾಗುವ ನಿರ್ವಹಣಾ ಅನುದಾನದಿಂದ ಶಾಲೆಗಳ ಗುಣಮಟ್ಟ ಅಭಿವೃದ್ಧಿಪಡಿಸಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಬಹುದು. ಹಾಗೆಯೇ ಬಾಕಿ ವಿದ್ಯುತ್ ಮತ್ತು ನೀರಿನ ಬಿಲ್ಲುಗಳನ್ನು ಪಾವತಿ ಮಾಡುವುದರಿಂದ ವಿನಾಯಿತಿ ನೀಡುವಂತೆ ಹಾಗೂ ಉಚಿತವಾಗಿ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಮನವಿ ಮಾಡಿದ್ದರು. ಹೀಗಾಗಿ ಸರ್ಕಾರ ಕ್ರಮ ಕೈಗೊಂಡಿದೆ.
ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ಅನುದಾನ ಘೋಷಣೆಯಾದರೆ ಸಾಲದು, ಕಲ್ಯಾಣವೂ ಆಗಬೇಕು
2023-24ನೇ ಆರ್ಥಿಕ ಸಾಲಿನ ಅಂತ್ಯದವರೆಗೆ, ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಬಳಕೆ ಮಾಡಲಾದ, ಮಾಡಲಾಗುವ ವಿದ್ಯುತ್ ಮತ್ತು ನೀರಿನ ಶುಲ್ಕ ಪಾವತಿಗಾಗಿ ಅಗತ್ಯವಿರುವ ಜಿಲ್ಲಾವಾರು ಅನುದಾನದ ವಿವರವಾದ ಪ್ರಸ್ತಾವನೆಯನ್ನು ಶಾಲಾ ಶಿಕ್ಷಣ ಇಲಾಖೆ, ಆಯುಕ್ತರು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಕೂಡಲೇ ಸರ್ಕಾರಕ್ಕೆ ಸಲ್ಲಿಸಬೇಕು.
2024-25ನೇ ಸಾಲಿನಿಂದ ನಿರಂತರವಾಗಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಮತ್ತು ನೀರು ಸರಬರಾಜು ಮಾಡಲು ವಾರ್ಷಿಕವಾಗಿ ಅಗತ್ಯವಿರುವ ಅನುದಾನದ ಪ್ರಸ್ತಾವನೆಯನ್ನು ಇಂಧನ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆಗಳು ನೇರವಾಗಿ ಆರ್ಥಿಕ ಇಲಾಖೆಗೆ ಸಲ್ಲಿಸಿ ಅಗತ್ಯವಿರುವ ಅನುದಾನವನ್ನು ಪಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು.
ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಉಚಿತವಾಗಿ ಒದಗಿಸಲಾಗುವ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಹಾಗೂ ಸಾಧ್ಯವಾದಷ್ಟು ಮಿತವ್ಯಯ ಸಾಧಿಸಲು ಅಗತ್ಯ ಕ್ರಮವಹಿಸಬೇಕು ಎಂದು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಸಿಎಂ ಸಿದ್ದರಾಮಯ್ಯಗೆ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘ ಧನ್ಯವಾದ
ಬೆಂಗಳೂರು: ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್, ನೀರಿನ ಸೌಲಭ್ಯ ಒದಗಿಸಲು ಆದೇಶ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ನಾಗೇಶ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಅವರು ಧನ್ಯವಾದ ತಿಳಿಸಿದ್ದಾರೆ.
ರಾಜ್ಯೋತ್ಸವದ “ಸುವರ್ಣ ಸಂಭ್ರಮ”ದಂದು ಶಿಕ್ಷಣ ಇಲಾಖೆಯ ಪ್ರಧಾನಕಾರ್ಯದರ್ಶಿಗಳು ಮುಖ್ಯಮಂತ್ರಿಗಳಿಗೆ ಒಂದು ಚೀಟಿಯನ್ನು ನೀಡಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ, ಪ್ರೌಢ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರಿನ ಸೌಲಭ್ಯವನ್ನು ನೀಡುವಂತೆ ವಿನಂತಿ ಮಾಡಿಕೊಂಡಿದ್ದರು.
ಇದನ್ನೂ ಓದಿ | COVID Subvariant JN.1: ಕೊರೊನಾ ಲಕ್ಷಣ ಕಂಡು ಬಂದ್ರೆ ಕಡ್ಡಾಯ ಪರೀಕ್ಷೆ ಮಾಡಿಸಿ: ದಿನೇಶ್ ಗುಂಡೂರಾವ್
ಅದರಂತೆ ಶಾಲೆಗಳಿಗೆ ಬರುತ್ತಿದ್ದ ವಿದ್ಯುತ್ ಶುಲ್ಕವನ್ನು ಹಾಗೂ ಕುಡಿಯುವ ನೀರಿನ ಶುಲ್ಕವನ್ನು “ಗೃಹ ಜ್ಯೋತಿ” ಮಾದರಿಯಲ್ಲಿ ಸಂಬಂಧಿಸಿದ ಇಂಧನ ಇಲಾಖೆ, ನಗರಾಭಿವೃದ್ಧಿ ಇಲಾಖೆಗಳು ನೇರವಾಗಿ ಆರ್ಥಿಕ ಇಲಾಖೆಯಿಂದ ಹಣವನ್ನು ಪಡೆಯುವಂತಹ ಐತಿಹಾಸಿಕ ಆದೇಶವನ್ನು ಹೊರಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಶೇಷವಾಗಿ ಶಿಕ್ಷಣ ಇಲಾಖೆಯ ಪ್ರಧಾನಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಆಯುಕ್ತರಾದ ಬಿ.ಬಿ.ಕಾವೇರಿ ಅವರಿಗೆ ರಾಜ್ಯದ ಸಮಸ್ತ ಶಿಕ್ಷಕರ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.