ಬೆಂಗಳೂರು: ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ನಿಂದ ಬೆಳೆ ಸಾಲ (Crop Loan) ಪಡೆದು ಸುಸ್ತಿದಾರರಾಗಿರುವ ರೈತರಿಗೆ ಏಕಕಾಲಿಕ ಸಾಲ ತೀರುವಳಿ (One Time Settlement-OTS) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಬ್ಯಾಂಕಿನ ಮುಖ್ಯಸ್ಥರು, ನಬಾರ್ಡ್ ಹಾಗೂ ಪ್ರವರ್ತಕ ಬ್ಯಾಂಕ್ ಆದ ಕೆನರಾ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳಲು ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಶಾಸಕ ಬಿ.ಆರ್. ಪಾಟೀಲ ಹಾಗೂ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ಮಂಗಳವಾರ ಭೇಟಿಯಾದ ರೈತ ಮುಖಂಡರ ನಿಯೋಗದೊಂದಿಗೆ ಚರ್ಚೆ ನಡೆಸಿ ಮಾತನಾಡಿದ್ದಾರೆ.
ಇದನ್ನೂ ಓದಿ | CT Ravi : ಮರ್ಯಾದೆ ಇರೋರು ಯಾರೂ ಮತ್ತೆ ಯಾವತ್ತೂ ಕಾಂಗ್ರೆಸ್ಗೆ ಹೋಗಲ್ಲ ಎಂದ ಸಿ.ಟಿ ರವಿ
ಬಳ್ಳಾರಿ ಜಿಲ್ಲೆಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ನಿಂದ ಬೆಳೆ ಸಾಲ ಪಡೆದ ರೈತರು, ಅತಿವೃಷ್ಟಿ, ಅನಾವೃಷ್ಟಿ, ಬೆಲೆ ಕುಸಿತದಂತಹ ಸಮಸ್ಯೆಗಳಿಂದಾಗಿ ಸಕಾಲದಲ್ಲಿ ಸಾಲ ತೀರಿಸಲಾಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬ್ಯಾಂಕ್ ಸಿಬ್ಬಂದಿ ಸಾಲ ಮರುಪಾವತಿಗೆ ನೋಟಿಸ್ ಕಳುಹಿಸಿ, ಅದರ ವೆಚ್ಚವನ್ನೂ ರೈತರ ಮೇಲೆಯೇ ಹಾಕುತ್ತಿದ್ದಾರೆ. ಇಂತಹ ಕ್ರಮಗಳಿಂದಾಗಿ 30,000 ರೂ. ಮೊತ್ತದ ಸಾಲಕ್ಕೆ 2.8 ಲಕ್ಷ ರೂ. ಪಾವತಿಸುವಂತೆ, 3 ಲಕ್ಷ ರೂ. ಸಾಲಕ್ಕೆ 3೦ ಲಕ್ಷ ರೂ. ಪಾವತಿಸುವಂತೆ ಕಿರುಕುಳ ನೀಡಲಾಗುತ್ತಿದೆ. ಇದನ್ನು ವಿರೋಧಿಸಿ 8 ತಿಂಗಳಿನಿಂದ ರೈತ ಹೋರಾಟಗಾರರು ಧರಣಿ ನಡೆಸುತ್ತಿದ್ದಾರೆ. ರೈತರು ಒ.ಟಿ.ಎಸ್. ಅಡಿ ಶೇ. 50 ರಷ್ಟು ಅಸಲು ಪಾವತಿಸಲು ಸಿದ್ಧರಿದ್ದಾರೆ. ರೈತರ ಸಮಸ್ಯೆ ಬಗೆಹರಿಸಿ, ಅನುಕೂಲ ಮಾಡಿಕೊಡುವಂತೆ ರೈತ ಮುಖಂಡರು ಸಿಎಂಗೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಬ್ಯಾಂಕ್ ಅಧಿಕಾರಿಗಳು, ಬ್ಯಾಂಕ್ ಆಡಳಿತ ಮಂಡಳಿ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಬ್ಯಾಂಕ್ನಲ್ಲಿ 6500 ಕೋಟಿ ರೂ. ಸುಸ್ತಿ ಸಾಲವಿದ್ದು, ಅದರಲ್ಲಿ 5000 ಕೋಟಿ ರೂ. ಬೆಳೆ ಸಾಲವಾಗಿದೆ ಎಂದರು. ಈ ವೇಳೆ ಬ್ಯಾಂಕ್ ಅಧ್ಯಕ್ಷರು ಗೈರು ಹಾಜರಾದ ಹಿನ್ನೆಲೆಯಲ್ಲಿ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು.
ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತರ ಕುರಿತು ಮಾನವೀಯತೆಯಿಂದ ವರ್ತಿಸುವಂತೆ ಅಧಿಕಾರಿಗಳಿಗೆ ಸಲಹೆ ಮಾಡಿದರಲ್ಲದೆ, ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಂಬಂಧಿಸಿದ ಬ್ಯಾಂಕ್ಗಳ ಸಭೆ ನಡೆಸಿ ಪರಿಹಾರ ಸೂತ್ರ ಕಂಡುಕೊಂಡ ನಂತರ, ಮತ್ತೊಮ್ಮೆ ರೈತ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು.
ಇದನ್ನೂ ಓದಿ | kaveri water : ಕಾವೇರಿ ಕಣಿವೆ ರೈತರು ಹೊಸ ಬೆಳೆ ಬೆಳೀಬೇಡಿ, ಸಮಸ್ಯೆ ಆದ್ರೆ ಕಟ್ಟುನೀರು ಬಂದ್: ಚಲುವರಾಯಸ್ವಾಮಿ
ಕೃಷಿ ತಜ್ಞ ಡಾ. ಪ್ರಕಾಶ್ ಕಮ್ಮರಡಿ, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಜಿ.ಸಿ. ಬಯ್ಯಾರೆಡ್ಡಿ, ಮಾಧವರೆಡ್ಡಿ, ಚಾಗನೂರು ಮಲ್ಲಿಕಾರ್ಜುನ ರೆಡ್ಡಿ, ಝಾನ್ಸಿಲಕ್ಷ್ಮಿ, ಟಿ.ಯಶವಂತ್, ಅಲಿಬಾಬ ಸೇರಿ ಹಲವು ರೈತ ಮುಖಂಡರು ಇದ್ದರು.