ಬೆಂಗಳೂರು: ಜನರು ತಮ್ಮ ಆಸ್ತಿಗಳ ಖಾತೆ ವಿಚಾರ, ಪಿಂಚಣಿ ಸೇರಿದಂತೆ ಸರ್ಕಾರದ ಸವಲತ್ತುಗಳ ಸಮಸ್ಯೆ ಹೊತ್ತು ತರುತ್ತಾರೆ. ಅಧಿಕಾರಿಗಳು ಲಂಚ ಕೇಳಿ ಹಿಂಸೆ ಕೊಟ್ಟಾಗ ಜನ ನಮ್ಮತ್ತ ಬರುತ್ತಾರೆ. ಇಂತಹ ದೂರುಗಳು ಹೆಚ್ಚುತ್ತಿವೆ. ಇವುಗಳನ್ನು ತಪ್ಪಿಸಬೇಕು. ಯಾರೇ ಲಂಚ ಕೇಳಿದರೂ ನಿರ್ದಾಕ್ಷಿಣ್ಯವಾಗಿ ದೂರು ನೀಡಿ, ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಾರ್ವಜನಿಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಸೂಚಿಸಿದರು.
ಯಲಹಂಕದಲ್ಲಿ ಶುಕ್ರವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರೇ ಆಗಲಿ ನನ್ನ ಹೆಸರು, ಕೃಷ್ಣ ಭೈರೇಗೌಡ, ವಿಶ್ವನಾಥ್, ಪೊಲೀಸ್ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಸೇರಿದಂತೆ ಯಾರ ಹೆಸರಲ್ಲಿ ಹಣ ಕೇಳಿದರೂ ನಮ್ಮ ಗಮನಕ್ಕೆ ತನ್ನಿ, ನಾವು ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
“ಜನರೇ ನಮ್ಮ ಪಾಲಿನ ದೇವರು. ಜನರ ಸಮಸ್ಯೆ ಸರ್ಕಾರದ ಸಮಸ್ಯೆ, ಜನರ ಪರಿಹಾರವೇ ರಾಜ್ಯದ ಪರಿಹಾರ. ಜನರ ಸೇವೆಗೆ ನಾವು ಸದಾ ಬದ್ಧ. ಇಲ್ಲಿಗೆ ನಾನೊಬ್ಬನೇ ಬಂದಿಲ್ಲ. ಪೊಲೀಸ್ ಸೇರಿದಂತೆ ಸುಮಾರು 300 ಅಧಿಕಾರಿಗಳು ನಿಮ್ಮ ಸೇವೆಗೆ ಬಂದಿದ್ದೇವೆ. ನೀವು ನಮಗೆ ಅಧಿಕಾರ ನೀಡಿದ್ದೀರಿ. ನಿಮ್ಮ ಋಣ ತೀರಿಸಲು ಇಲ್ಲಿಗೆ ಬಂದಿದ್ದೇನೆ. ಋಣ ತೀರಿಸುವ ವಿಚಾರದಲ್ಲಿ ಭೀಷ್ಮ ಧರ್ಮರಾಯನಿಗೆ ಒಂದು ಮಾತು ಹೇಳುತ್ತಾನೆ. ತಂದೆ ತಾಯಿ, ದೇವರು, ಗುರುಗಳು ಹಾಗೂ ಸಮಾಜ ಈ ನಾಲ್ಕು ಋಣವನ್ನು ನಾವು ತೀರಿಸಬೇಕಂತೆ. ಇವರ ಋಣವನ್ನು ಧರ್ಮದಿಂದ ತೀರಿಸಬೇಕು ಎಂದು ತಿಳಿಸಿದರು.
ನಮ್ಮ ಸ್ನೇಹಿತರು ಅನ್ನಭಾಗ್ಯ ಅಕ್ಕಿಯನ್ನು ಮಂತ್ರಾಕ್ಷತೆ ಮಾಡಿ ಹಂಚುತ್ತಿದ್ದಾರೆ. ನಮ್ಮ ಸರ್ಕಾರ ಜನರ ಸಂಕಷ್ಟಗಳಿಗೆ ಪರಿಹಾರ ನೀಡಲು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ. ಈ ಹಿಂದೆ ಅನೇಕರು ಬೆಂಗಳೂರಿನ ಮಂತ್ರಿಯಾಗಿ ಅವರ ಶೈಲಿಯಲ್ಲಿ ಕೆಲಸ ಮಾಡಿದ್ದಾರೆ. ನಾನು 35 ವರ್ಷಗಳ ಹಿಂದೆ ಶಾಸಕನಾದಾಗ ಪ್ರತಿ ವರ್ಷ ಪ್ರತಿ ಹಳ್ಳಿಗೆ ಅಧಿಕಾರಿಗಳನ್ನು ಕರೆದುಕೊಂಡು ಹೋಗಿ ಅವರ ಕಷ್ಟ ಆಲಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿದ್ದೆ. ಅದರಿಂದ ನಮ್ಮ ಮೇಲಿನ ಒತ್ತಡ ಕಡಿಮೆ ಆಗುತ್ತದೆ ಎಂದು ಹೇಳಿದರು.
ಪ್ರತಿನಿತ್ಯ ಜನ ನಮ್ಮ ಮನೆ ಬಾಗಿಲಿಗೆ ತಮ್ಮ ಸಮಸ್ಯೆ ಹೊತ್ತುಕೊಂಡು ಬರುತ್ತಿದ್ದಾರೆ. ಇದನ್ನು ತಪ್ಪಿಸಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮುಖ್ಯಮಂತ್ರಿಗಳು ಜನಸ್ಪಂದನ ಕಾರ್ಯಕ್ರಮ ಮಾಡಿ, ಎಲ್ಲಾ ಸಚಿವರಿಗೂ ಸೂಚನೆ ನೀಡಿದ್ದಾರೆ. ನಾನೂ ನನ್ನ ಕ್ಷೇತ್ರ ಹಾಗೂ ಆನೇಕಲ್‌ನಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡಿದ್ದೇನೆ. ಜನ ತಮ್ಮ ಆಸ್ತಿಗಳ ಖಾತೆ ವಿಚಾರ, ಪಿಂಚಣಿ ಸೇರಿದಂತೆ ಸರ್ಕಾರದ ಸವಲತ್ತುಗಳ ಸಮಸ್ಯೆ ಹೊತ್ತು ತರುತ್ತಾರೆ. ಅಧಿಕಾರಿಗಳು ಗೌರವ ನೀಡದಿದ್ದಾಗ ಜನ ರಾಜಕಾರಣಿಗಳ ಬಳಿ ಬರುತ್ತಾರೆ. ಅಧಿಕಾರಿಗಳು ಲಂಚ ಕೇಳಿ ಹಿಂಸೆ ಕೊಟ್ಟಾಗ ಜನ ನಮ್ಮತ್ತ ಬರುತ್ತಾರೆ. ಇಂತಹ ದೂರುಗಳು ಹೆಚ್ಚುತ್ತಿವೆ. ಇವುಗಳನ್ನು ತಪ್ಪಿಸಬೇಕು ಎಂದು ಸೂಚನೆ ನೀಡಿದರು.
ನಮ್ಮ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುತ್ತಿವೆ. ಅನ್ನಭಾಗ್ಯ ಯೋಜನೆಯಲ್ಲಿ 5 ಕೆ.ಜಿ ಅಕ್ಕಿ, 5 ಕೆ.ಜಿ ಅಕ್ಕಿಯ ಹಣ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಅಕ್ಕಿ ಪೂರೈಸದಿದ್ದರೆ ನಾವೇ ಟೆಂಡರ್ ಕರೆದು ಅಕ್ಕಿ ಖರೀದಿ ಮಾಡಿ ಅದನ್ನು ವಿತರಣೆ ಮಾಡುತ್ತೇವೆ. ಗೃಹಜ್ಯೋತಿ ಯೋಜನೆಯಲ್ಲಿ 200 ಯೂನಿಟ್‌ವರೆಗೂ ವಿದ್ಯುತ್ ಉಚಿತ ಸಿಗುತ್ತಿದೆ. ಶೂನ್ಯ ಬಿಲ್ ಬರುತ್ತಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಕೆಲವು ತಾಂತ್ರಿಕ ಸಮಸ್ಯೆಯಿಂದ 5 ಲಕ್ಷ ಮಹಿಳೆಯರಿಗೆ ಹಣ ಸಿಕ್ಕಿಲ್ಲ. ಕೆಲವರು ಪತ್ನಿ ಹೆಸರಲ್ಲಿ ಅರ್ಜಿ ಹಾಕಿ ಪತಿಯ ದೂರವಾಣಿ ಹಾಗೂ ಬ್ಯಾಂಕ್ ಖಾತೆ ನೀಡಿದ್ದಾರೆ. ಮತ್ತೆ ಕೆಲವು ಕಡೆ ನೋಂದಣಿ ಮಾಡುವವರು ಜನರ ಬಳಿ ದೂರವಾಣಿ ಸಂಖ್ಯೆ ಇಲ್ಲ ಎಂದರೆ ತಮ್ಮ ಸಂಖ್ಯೆ ನೀಡಿದ್ದಾರೆ. ಇದರಿಂದಾಗಿ ಹಲವರಿಗೆ ಹಣ ತಲುಪಿಲ್ಲ ಎಂದು ತಿಳಿಸಿದರು.
ಕೆ.ಆರ್. ಪುರದ ಕಾರ್ಯಕ್ರಮದಲ್ಲಿ ನಾನೇ ಇಂತಹ ಹತ್ತು ಪ್ರಕರಣಗಳನ್ನು ನೋಡಿದ್ದೇನೆ. ಇದನ್ನು ಬಗೆಹರಿಸಿ ಅವರಿಗೆ ಹಣ ನೀಡಲಾಗುವುದು. ಈ ವರ್ಷ ಗ್ಯಾರಂಟಿ ಯೋಜನೆಗೆ 36 ಸಾವಿರ ಕೋಟಿ ರೂ. ವೆಚ್ಚವಾಗಿದೆ. ಮುಂದೆ ಇದು 59 ಸಾವಿರ ಕೋಟಿಗೆ ತಲುಪಲಿದೆ. ಈ ಮಧ್ಯೆ ವಿಶ್ವನಾಥ್ ಅವರು ಅನುದಾನದ ವಿಚಾರ ಪ್ರಸ್ತಾಪ ಮಾಡಿದರು. ಮುಂದಿನ ದಿನಗಳಲ್ಲಿ ಇದನ್ನು ಬಗೆಹರಿಸಲಾಗುವುದು. ಬೆಂಗಳೂರಿನಲ್ಲಿ ಸ್ವಯಂ ತೆರಿಗೆ ವ್ಯವಸ್ಥೆಯಲ್ಲಿ ಆಸ್ತಿಗೆ ಸರಿಯಾದ ಲೆಕ್ಕದಲ್ಲಿ ತೆರಿಗೆ ಪಾವತಿ ಮಾಡುತ್ತಿಲ್ಲ. ಹೀಗಾಗಿ ನಾವು ಸಮೀಕ್ಷೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ತೆರಿಗೆ ಪಾವತಿ ಮಾಡದಿದ್ದರೆ ರಸ್ತೆ ಮಾಡುವುದು, ನೀರು ನೀಡುವುದು ಹೇಗೆ? ಬೆಂಗಳೂರಿನಲ್ಲಿ 1.40 ಕೋಟಿ ಜನ ವಾಸ ಮಾಡುತ್ತಿದ್ದಾರೆ. ಇವರಿಗೆ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಬೇಕು. ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ಹೆಬ್ಬಾಳ ಹಾಗೂ ಯಲಹಂಕ ನಂತರ ಕುಡಿಯುವ ನೀರು ಪೂರೈಸಬಾರದು ಎಂದು ಸಹಿ ಹಾಕಿಸಿದ್ದರು. ಮೊನ್ನೆಯಷ್ಟೇ ಕುಡಿಯುವ ಉದ್ದೇಶಕ್ಕೆ 6 ಟಿಎಂಸಿ ನೀರನ್ನು ಪೂರೈಸಲು ನಿರ್ದೇಶನ ನೀಡಲಾಗಿದೆ. ಇನ್ನು ಒಂದೂವರೆ ಟಿಎಂಸಿ ನೀರು ಬಾಕಿ ಇದೆ. ಎತ್ತಿನಹೊಳೆ ನೀರು ಪೂರೈಕೆ, ಅಂತರ್ಜಲ ನೀರಿನ ಸದ್ಬಳಕೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇನ್ನು ಬೆಂಗಳೂರಿನಲ್ಲಿ ಕಸದ ಹಾವಳಿ ಹೆಚ್ಚಾಗಿದೆ. ಎಲ್ಲೆಂದರಲ್ಲಿ ಕಸ ತಂದು ಸುರಿಯುತ್ತಾರೆ. ಕಟ್ಟಡ ತ್ಯಾಜ್ಯವನ್ನು ರಸ್ತೆ ಬದಿ ಸುರಿದು ಹೋಗುತ್ತಾರೆ. ಇದನ್ನು ತಡೆಗಟ್ಟಿ ಬೆಂಗಳೂರಿನ ಸ್ವಚ್ಛತೆ ಕಾಪಾಡಲು ಕ್ಯಾಮೆರಾ ಅಳವಡಿಸುತ್ತಿದ್ದೇವೆ. ಈ ರೀತಿ ಕಸ ಸುರಿಯುವವರ ವಿರುದ್ಧ ಕೇಸ್ ದಾಖಲಿಸಲಾಗುವುದು. ಬೆಂಗಳೂರು ಯೋಜಿತ ನಗರವಲ್ಲ. ಹಿಂದೆ ಕೆಂಪೇಗೌಡರು ನಾಲ್ಕು ಸ್ತಂಭಗಳನ್ನು ಅಳವಡಿಸಿ ನರರ ನಿರ್ಮಾಣ ಮಾಡಿದ್ದರು. ಆದರೆ ಈಗ ಅದು ಐದಾರು ಪಟ್ಟು ವಿಸ್ತೀರ್ಣವಾಗಿದೆ. ಇಲ್ಲಿರುವ ಹವಾಮಾನ, ಶಿಕ್ಷಣ, ಆರೋಗ್ಯ ಸೌಲಭ್ಯದಿಂದ ಬೆಂಗಳೂರಿಗೆ ಬಂದವರು ವಾಪಸ್ ಹೋಗುವುದಿಲ್ಲ. ಹೀಗಾಗಿ ಬೆಂಗಳೂರಿನ ನಿರ್ವಹಣೆ ಬಹಳ ಮುಖ್ಯ ಎಂದರು.
ಇದನ್ನೂ ಓದಿ | CM Siddaramaiah : ಇಂದಿರಾ ಕ್ಯಾಂಟೀನ್, ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ: ಸಿಎಂ ಘೋಷಣೆ
ಇಂದು ಇಲ್ಲಿ ಅಹವಾಲು ತರುವ ಜನರಿಗೆ ಕಾನೂನು ಚೌಕಟ್ಟಿನಲ್ಲಿ ಪರಿಹಾರ ನೀಡಬಹುದೋ ನೀಡುತ್ತೇವೆ. ಒಂದು ವೇಳೆ ಪರಿಹಾರ ನೀಡಲು ಆಗದಿದ್ದರೆ, ಯಾವ ಕಾರಣಕ್ಕೆ ಪರಿಹಾರ ನೀಡಲು ಆಗುವುದಿಲ್ಲ ಎಂಬ ಕಾರಣವನ್ನು ತಿಳಿಸುತ್ತೇವೆ. ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧದ ಮೇಲೆ ಜನರ ಸೇವೆಯೇ ಜನಾರ್ದನನ ಸೇವೆ ಎಂದು ಹೇಳುತ್ತಾರೆ. ನಾವು ನಿಮ್ಮನ್ನು ದೇವರಂತೆ ಕಂಡು ನಿಮ್ಮ ಸೇವೆ ಮಾಡುತ್ತೇವೆ. ಅದಕ್ಕಾಗಿ ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಐದು ಬೆರಳು ಸೇರಿ ಕೈ ಮುಷ್ಟಿ ಆಯಿತು. ಐದು ಗ್ಯಾರಂಟಿ ಯೋಜನೆಯಿಂದ ಜನರ ಕೈ ಗಟ್ಟಿಯಾಯಿತು. ನಿಮ್ಮ ಕೈ ಬಲಪಡಿಸಲು ನಾವು ಈ ಯೋಜನೆ ಕೊಟ್ಟು ಸೇವೆ ಮಾಡುತ್ತಿದ್ದೇವೆ.
ಇಲ್ಲಿನ ಶಾಸಕರು ಪರಾಜಿತ ಅಭ್ಯರ್ಥಿಗಳು ಕೆಲವು ಮನವಿ ಸಲ್ಲಿಸಿದ್ದಾರೆ. ಅವರ ಅರ್ಜಿಗಳನ್ನು ನಮ್ಮ ಅಧಿಕಾರಿಗಳಿಗೆ ನೀಡಿದ್ದೇವೆ ಎಂದು ತಿಳಿಸಿದರು.