ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡುವ ವಿಚಾರ ಸಂಬಂಧ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಜಿಲ್ಲೆಯ ಶಾಸಕರ ಒತ್ತಡಕ್ಕೆ ಕೊನೆಗೂ ಸರ್ಕಾರ ಮಣಿದಿದೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾತ್ವಿಕ ಒಪ್ಪಿಗೆ ಸೂಚಿಸಿರುವ ಬೆನ್ನಲ್ಲೇ, ಸಿಎಂ ಹಾಗೂ ಆರೋಗ್ಯ ಸಚಿವರು ಶೀಘ್ರವೇ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಅಧಿಕೃತವಾಗಿ ಆಸ್ಪತ್ರೆಯ ಘೋಷಣೆ ಮಾಡಲಿದ್ದಾರೆ.
ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಶಾಸಕರ ಜತೆ ತಮ್ಮ ಸರ್ಕಾರಿ ನಿವಾಸದಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಈ ಅಧಿವೇಶನ ಮುಗಿದ ತಕ್ಷಣ ಉತ್ತರ ಕನ್ನಡ ಜಿಲ್ಲೆಗೆ ಮುಖ್ಯಮಂತ್ರಿ ಮತ್ತು ತಾವು ಭೇಟಿ ನೀಡಿ ಸ್ಥಳಪರಿಶೀಲನೆ ನಡೆಸುತ್ತೇವೆ. ಬಳಿಕ ಜಿಲ್ಲೆಯಲ್ಲಿಯೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.
ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಾಣ ಮಾಡುವ ಮೂಲಕ ಉತ್ಕೃಷ್ಟ ಆರೋಗ್ಯ ಸೇವೆ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿಗಳ ತಾತ್ವಿಕ ಒಪ್ಪಿಗೆ ಸಹ ಇದೆ. ಸಭೆಯಲ್ಲಿ ಭಾಗಿಯಾದ ಶಾಸಕರು ಕೆಲವು ಸಲಹೆಗಳನ್ನು ನೀಡಿದ್ದಾರೆ. ನಮ್ಮ ಸರ್ಕಾರ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಬದ್ಧವಾಗಿದೆ. ಅಲ್ಲದೆ, ಆಸ್ಪತ್ರೆಯ ಅವಶ್ಯಕತೆ ಇದೆ ಎಂಬುದು ನಮ್ಮ ಅರಿವಿಗೆ ಬಂದಿದೆ ಎಂದು ತಿಳಿಸಿದರು.
ಅಧಿವೇಶನ ಬಳಿಕ ಉ.ಕ. ಜಿಲ್ಲಾ ಪ್ರವಾಸ ಮಾಡುವೆ
ಉತ್ತರ ಕನ್ನಡ ಜಿಲ್ಲೆಯ ಯಾವ ಜಾಗದಲ್ಲಿ ನಿರ್ಮಾಣ ಮಾಡಬೇಕು? ಹೇಗೆ ಮಾಡಬೇಕು? ಎಂಬಿತ್ಯಾದಿ ಅಂಶಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚೆ ಮಾಡಿ ತೀರ್ಮಾನಿಸಲಾಗುವುದು. ನಾನು ಅಧಿವೇಶನ ಮುಗಿದ ಬಳಿಕ ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದರು.
ಸಿಎಂ ತಾತ್ವಿಕ ಒಪ್ಪಿಗೆ ಸಿಕ್ಕಿದೆ
ಈಗಾಗಲೇ ಶಿರಸಿಯಲ್ಲಿ 250 ಬೆಡ್‌ಗಳ ಸುಸುಜ್ಜಿತ ಆಸ್ಪತ್ರೆಯ ಕಾಮಗಾರಿ ಆರಂಭವಾಗಿದೆ. ಕಾರವಾರದಲ್ಲಿ ವೈದ್ಯಕೀಯ ಕಾಲೇಜು ಸೇವೆ ಚಾಲ್ತಿಯಲ್ಲಿದೆ. ಈ ಬಗ್ಗೆ ಸಿಎಂ ಜತೆ ಕೂಡ ಚರ್ಚೆ ನಡೆಸಿದ್ದೇನೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅವರೂ ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.
ಉ.ಕ. ಶಾಸಕರ ಜತೆ ಸಭೆ
ಉತ್ತರ ಕನ್ನಡ ಜಿಲ್ಲೆಯ ಶಾಸಕರ ಜತೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸಂಬಂಧ ಮಂಗಳವಾರ ಸಭೆ ನಡೆಸಿದ ಆರೋಗ್ಯ ಸಚಿವರು, ಈ ಸಂದರ್ಭದಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು ಎನ್ನಲಾಗಿದೆ. ಅಲ್ಲದೆ, ಈ ವೇಳೆ ಉ.ಕ.ಜಿಲ್ಲಾ ಭಾಗದ ಶಾಸಕರಿಂದ ಕೆಲವು ಸಲಹೆಗಳೂ ಕೇಳಿಬಂದಿದ್ದು, ಎಲ್ಲ ಮಾಹಿತಿಯನ್ನಿಟ್ಟುಕೊಂಡು ಸಿಎಂ ಜತೆ ಚರ್ಚೆ ನಡೆಸುವುದಾಗಿ ಸಚಿವ ಸುಧಾಕರ್ ತಿಳಿಸಿದ್ದಾರೆನ್ನಲಾಗಿದೆ. ಈ ವೇಳೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಇನ್ನಿತರರು ಹಾಜರಿದ್ದರು. ಸಭೆಯ ತೀರ್ಮಾನಕ್ಕೆ ಜಿಲ್ಲೆಯ ಶಾಸಕರು ಸಮಾಧಾನಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ | ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಿಗೆ ಸರ್ಕಾರ ಬದ್ಧ: ಸಚಿವ ಡಾ.ಕೆ.ಸುಧಾಕರ್