ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದ ಅಗ್ನಿ ಅವಘಡದಲ್ಲಿ (BBMP Fire Accident) ಗಂಭೀರವಾಗಿ ಗಾಯಗೊಂಡಿದ್ದ ಬಿಬಿಎಂಪಿ ಸೂಪರಿಂಟೆಂಡೆಂಟ್ ಎಂಜಿನಿಯರ್ ಶಿವಕುಮಾರ್ ಅವರು ಚಿಕಿತ್ಸೆ ಫಲಕಾರಿಯಾಗದೆ ನಗರದ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.
ಆಗಸ್ಟ್ 11ರ ಸಂಜೆ ಬಿಬಿಎಂಪಿ ಕಚೇರಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ (BBMP Quality Control lab) ಅಗ್ನಿ ದುರಂತ ಸಂಭವಿಸಿತ್ತು. ಘಟನೆಯಲ್ಲಿ (BBMP Fire accident) ಒಂಬತ್ತು ಮಂದಿ ಅಧಿಕಾರಿಗಳು ಮತ್ತು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದರು. ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯ (Victoria Hospital) ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಬೆಂಕಿ ಅವಘಡದಲ್ಲಿ ಎಂಜಿನಿಯರ್ ಶಿವಕುಮಾರ್‌ಗೆ ದೇಹದ ಶೇ.25 ಭಾಗ ಸುಟ್ಟಗಾಯಗಳಾಗಿದ್ದವು. ಅವರ ಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚುವರಿ ಚಿಕಿತ್ಸೆಗೆ ಅವರನ್ನು ಕಳೆದ 11 ದಿನಗಳ ಹಿಂದೆ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಅವರು ಹೆಚ್ಚಿನ ಗಾಯ ಹಾಗೂ ಶ್ವಾಸಕೋಶದ ಸೋಂಕು ಉಂಟಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಾಲಿಕೆಯಲ್ಲಿ ಕಳೆದ 16 ವರ್ಷಗಳಿಂದ ಎಂಜಿನಿಯರ್ ಶಿವಕುಮಾರ್ ಕಾರ್ಯ ನಿರ್ವಹಿಸುತ್ತಿದ್ದರು.
ನಂಜನಗೂಡು ತಾಲೂಕಿನ ಚಂದ್ರವಾಡಿ ಗ್ರಾಮ ಮೂಲದ ಶಿವಕುಮಾರ್, ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನೆಲೆಸಿದ್ದರು. ಇವರಿಗೆ ಪತ್ನಿ, ಇಬ್ಬರು ಹೆಣ್ಣುಮಕ್ಕಳಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ
ಮೈಸೂರು: ಬಿಬಿಎಂಪಿ ಗುಣಮಟ್ಟದ ಪರೀಕ್ಷಾ ಪ್ರಯೋಗಾಲಯ ಅಗ್ನಿ ದುರಂತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಬಿಎಂಪಿ ಸೂಪರಿಂಟೆಂಡೆಂಟ್ ಎಂಜಿನಿಯರ್ ಶಿವಕುಮಾರ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
“ಸೂಪರಿಂಟೆಂಡೆಂಟ್ ಎಂಜಿನಿಯರ್ ಶಿವಕುಮಾರ್ ಅವರ ಅಗಲಿಕೆ ಸುದ್ದಿ ಕೇಳಿ ಬೇಸರವಾಗಿದೆ. ಕೆಲ ದಿನಗಳ ಹಿಂದಷ್ಟೇ ನಾನು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದೆ. ವೈದ್ಯರು ಉತ್ತಮ ಚಿಕಿತ್ಸೆ ನೀಡಿದರೂ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೆವು. ನಮ್ಮ ಪ್ರಾರ್ಥನೆ ಫಲ ನೀಡಲಿಲ್ಲ ಎಂದು ತಿಳಿಸಿದ್ದಾರೆ.
ಚಿಕ್ಕ ವಯಸ್ಸಿನಲ್ಲಿ ಈ ಅವಘಡದಿಂದ ಪ್ರಾಣ ಕಳೆದುಕೊಂಡಿರುವುದು ಮನಸ್ಸಿಗೆ ನೋವು ಉಂಟು ಮಾಡಿದೆ. ಶಿವಕುಮಾರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು ಹಾಗೂ ಬಂಧು ಮಿತ್ರರಿಗೆ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಡಿ.ಕೆ. ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.