ನವದೆಹಲಿ: ಜಸ್ಟೀಸ್ ಅರವಿಂದ್ ಕುಮಾರ್ ಅವರು ಹಿಂದೆ ಸರಿದ ಹಿನ್ನೆಲೆಯಲ್ಲಿ ಕರ್ನಾಟಕ – ಮಹಾರಾಷ್ಟ್ರ ಗಡಿ (Belagavi Border Dispute) ವಿಚಾರಣೆಯನ್ನು ಸುಪ್ರೀಂ ಕೋರ್ಟ್ (Supreme Court) ಮುಂದಕ್ಕೆ ಹಾಕಿದೆ. ಬುಧವಾರ ಈ ಪ್ರಕರಣದ ವಿಚಾರಣೆ ನಿಗದಿಯಾಗಿತ್ತು. ನ್ಯಾಯಮೂರ್ತಿಗಳಾದ ಎಸ್‌ಕೆ ಕೌಲ್, ಎ ಅಮಾನುಲ್ಲಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ತ್ರಿಸದಸ್ಯ ಪೀಠವು ಈ ಪ್ರಕರಣದ ವಿಚಾರಣೆಯನ್ನು ನಡೆಸಬೇಕಾಗಿತ್ತು.
ಬುಧವಾರ ನಡೆದ ಕಿರು ವಿಚಾರಣೆ ವೇಳೆ, ಹಿರಿಯ ವಕೀಲ ಸಿ ಎಸ್ ವೈದ್ಯನಾಥನ್ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೂ ಇಬ್ಬರು ನ್ಯಾಯಮೂರ್ತಿಗಳು ಹಿಂದೆ ಸರಿದಿದ್ದಾರೆ. ಅವರೂ ಬಾಧಿತ ರಾಜ್ಯಗಳಿಗೆ ಸೇರಿದವರಾಗಿದ್ದರು ಎಂಬ ಮಾಹಿತಿಯನ್ನು ಪೀಠದ ಗಮನಕ್ಕೆ ತಂದರು. ಆಗ, ಜಸ್ಟೀಸ್ ಅರವಿಂದ್ ಕುಮಾರ್ ಅವರೂ ತಾವು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದರು. ಅರವಿಂದ್ ಕುಮಾರ್ ಅವರರೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರು ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದಂತಾಗಿದೆ.
2019ರಲ್ಲಿ ಜಸ್ಟೀಸ್ ಎಂ ಎಂ ಶಾಂತನಗೌಡರ್, ಜಸ್ಟೀಸ್ ಎಸ್ ಅಬ್ದುಲ್ ನಜೀರ್ ಅವರೂ ವಿಚಾರಣೆಯಿಂದ ಹಿಂದೆ ಸರಿದಿದ್ದರು. 2023ರ ಫೆಬ್ರವರಿಯಲ್ಲಿ ಜಸ್ಟೀಸ್ ಬಿ ವಿ ನಾಗರತ್ನ ಅವರು ಇದೇ ನಿರ್ಧಾರ ಕೈಗೊಂಡಿದ್ದರು. ಇವರೆಲ್ಲರೂ ಕರ್ನಾಟಕಕ್ಕೆ ಸೇರಿದ ನ್ಯಾಯಮೂರ್ತಿಗಳಾಗಿದ್ದಾರೆ. ಹಾಗಾಗಿ, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಈಗ ಅವರಿಂದ್ ಕುಮಾರ್ ಅವರೂ ವಿಚಾರಣೆಯಿಂದ ಹಿಂದೆ ಸರಿದಿದ್ದರಿಂದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಹೊಸ ಪೀಠಕ್ಕೆ ಈ ಪ್ರಕರಣವನ್ನು ವಹಿಸಬೇಕಾಗಿದೆ.
Belagavi Border Dispute: ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ವಿಮೆ ಜಾರಿ: ಎಚ್ಚರಿಕೆ ನೀಡಿದ ಕರ್ನಾಟಕದ ಸಿಎಂ
ಕರ್ನಾಟಕದ ಗಡಿ ಭಾಗದ ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರದ ವಿಮಾ ಯೋಜನೆಯನ್ನು ಜಾರಿ ಮಾಡಲು ಮುಂದಾಗಿರುವ ಮಹಾರಾಷ್ಟ್ರದ ಶಿವಸೇನೆ-ಬಿಜೆಪಿ ನೇತೃತ್ವದ ಸರ್ಕಾರದ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಅವರು ಟ್ವೀಟ್ ಮಾಡಿ, ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬೊಮ್ಮಾಯಿ, ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದು ಉದ್ದಟತನದ ಪರಮಾವಧಿಯಾಗಿದ್ದು, ಇದು ಎರಡು ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನವಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಗಡಿ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಸುವುದಿಲ್ಲ ಎಂದು ಒಪ್ಪಿಕೊಂಡಿದ್ದರು.
ಈಗ ಕರ್ನಾಟಕದ 865 ಗ್ರಾಮಗಳ ಜನತೆಗೆ ವಿಮೆ ಯೋಜನೆ ಜಾರಿಗೆ ಆದೇಶ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸವಾಗಿದೆ. ಮಹಾರಾಷ್ಟ್ರ ಸರ್ಕಾರ ತಕ್ಷಣ ತನ್ನ ಆದೇಶವನ್ನು ವಾಪಸ್ ಪಡೆದು, ಅಮಿತ್ ಶಾ ಅವರ ಸೂಚನೆಗೆ ಗೌವರ ಕೊಡುವ ಮೂಲಕ ಎರಡೂ ರಾಜ್ಯಗಳ ನಡುವಿನ ಬಾಂಧವ್ಯ ಕಾಪಾಡುವ ಕೆಲಸ ಮಾಡಬೇಕು.
ಇದನ್ನೂ ಓದಿ: Border Dispute : ಒಂದು ದಿನದ ವಿಚಾರಣೆಗೆ ₹60 ಲಕ್ಷ !: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಲಕ್ಷ ಲಕ್ಷ ಹಣ ವೆಚ್ಚ
ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರಿಸಿದರೆ ಕರ್ನಾಟಕ ಸರ್ಕಾರವೂ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು. ಕರ್ನಾಟಕ ಗಡಿಯಲ್ಲಿರುವ ಜನರಿಗೆ ವಿಮೆ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರ ಸರ್ಕಾರ, ಅವರಿಂದ ಮಹಾರಾಷ್ಟ್ರಕ್ಕೆ ಸೇರಿದವರೆಂದು ಘೋಷಣಾ ಪತ್ರ ತೆಗೆದುಕೊಳ್ಳುವುದು ಖಂಡನೀಯ ಎಂದಿದ್ದಾರೆ.