ಬೆಂಗಳೂರು: ಸೂರಜ್ ರೇವಣ್ಣ ಪ್ರಕರಣ (Suraj Revanna Case) ವಿಚಾರ ನಮಗೆ ಇನ್ನೂ ದೂರು ಬಂದಿಲ್ಲ. ಸುದ್ದಿ ವಾಹಿನಿಗಳಲ್ಲಿ ಈ ಬಗ್ಗೆ ನೋಡಿದ್ದೇವೆ. ಆದರೆ, ನಮಗೆ ಅಧಿಕೃತ ದೂರು ನೀಡಿಲ್ಲ. ದೂರು ಬಂದ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸೂರಜ್ ರೇವಣ್ಣ ವಿರುದ್ಧ ಕೇಳಿಬಂದಿರುವ ಸಲಿಂಗ ಕಾಮ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ ಅಂತ ಹೇಳಿದ್ದಾರೆ. ನನಗೆ ಯಾವುದೇ ಪತ್ರ ಬಂದಿಲ್ಲ, ಈಗ ತನಿಖೆ ಮಾಡುತ್ತೇವೆ. ಏನು ಅಂತ ತಿಳಿದುಕೊಂಡು ತನಿಖೆ ಮಾಡುತ್ತೇವೆ. ಸಿಐಡಿಗೆ ಕೊಡುವ ಮುನ್ನ ಪ್ರಕರಣದ ನೈಜತೆ ತಿಳಿದುಕೊಳ್ಳುತ್ತೇವೆ. ಪತ್ರ ಬರೆಯುವುದಕ್ಕೂ, ದೂರು ಕೊಡುವುದಕ್ಕೂ ವ್ಯತ್ಯಾಸ ಇದೆ. ಅಧಿಕೃತ ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯವರನ್ನು ಕರೆದು ಮಾತನಾಡುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ | Suraj Revanna Case: ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ; ಇಂದು ಮತ್ತೊಂದು ದೂರು ದಾಖಲು?
ಏನಿದು ಪ್ರಕರಣ?
ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಈ ಬಗ್ಗೆ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.
ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಉದ್ಯೋಗಿಯಾದ ಜೆಡಿಎಸ್ ಕಾರ್ಯಕರ್ತ, ಜೂನ್ 16ರಂದು ಸೂರಜ್ ತನಗೆ ವಾಟ್ಸ್‌ಆ್ಯಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದರು. ಉದ್ಯೋಗ ನೀಡುವ ಭರವಸೆ ನೀಡಿ ತನ್ನನ್ನು ಕರೆಸಿಕೊಂಡು, ಸಲಿಂಗ ಕಾಮಕ್ಕೆ ಒತ್ತಾಯಿಸಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದರಿಂದ ನನ್ನ ದೇಹದ ಮೇಲೆ ಗಾಯಗಳಾಗಿದ್ದು, ಈ ಬಗ್ಗೆ ಎಲ್ಲಾದರೂ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ. ಅಸಹಜ ಲೈಂಗಿಕ ದೌರ್ಜನ್ಯದಿಂದ ದೇಹದ ಹಲವು ಭಾಗಗಳಲ್ಲಿ ಕಚ್ಚಿದ ಗುರುತುಗಳಿವೆ, ಮರ್ಮಾಂಗದ ಮೇಲೂ ಗಾಯವಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.
ಇದನ್ನೂ ಓದಿ | Suraj Revanna Case: ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ; ದೂರು ಸಲ್ಲಿಸಿದ ವ್ಯಕ್ತಿ ವಿರುದ್ಧ ಎಫ್‌ಐಆರ್!
ಮತ್ತೊಂದೆಡೆ ದೂರು ನೀಡಿದ್ದ ವ್ಯಕ್ತಿ ವಿರುದ್ಧವೇ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಜೆಡಿಎಸ್ ಕಾರ್ಯಕರ್ತನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.