ಬೆಂಗಳೂರು: ರಾಜ್ಯ ಪ್ರಾಥಮಿಕ ಶಾಲಾ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ (Teacher Transfer) ಪ್ರಕ್ರಿಯೆಯನ್ನು ಮುಂದೂಡುವಂತೆ ಕೇಂದ್ರ ಚುನಾವಣಾ ಆಯೋಗವು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚಿಸಿದೆ. ಹೀಗಾಗಿ ಚುನಾವಣಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿದ ನಂತರವಷ್ಟೇ ವರ್ಗಾವಣೆ ಪ್ರಕ್ರಿಯೆ ಮತ್ತೆ ಆರಂಭವಾಗಲಿದೆ.
ವಿವಿಧ ಕಾರಣಗಳಿಂದ ಸ್ಥಗಿತಗೊಂಡಿದ್ದ ವರ್ಗಾವಣೆ ಪ್ರಕ್ರಿಯೆಯನ್ನು ಆರಂಭಿಸಲು ಕಳೆದ ವಾರವಷ್ಟೇ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಇದರ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆಯು ಇದಕ್ಕೆ ಅನುಮತಿ ನೀಡುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು. ಕರ್ನಾಟಕ ಚುನಾವಣಾ ಆಯುಕ್ತರು ಇದನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳಿಸಿದ್ದು, ಅಲ್ಲಿಂದ ಈ ವರ್ಗಾವಣೆ ಪ್ರಕ್ರಿಯೆಯನ್ನು ಮುಂದೂಡುವಂತೆ ಸೂಚನೆ ಬಂದಿದೆ. ಹೀಗಾಗಿ ಚುನಾವಣೆಯ ನಂತರವಷ್ಟೇ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಸಾಧ್ಯವಾಗಲಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ʻವಿಸ್ತಾರ ನ್ಯೂಸ್ʼ ಗೆ ತಿಳಿಸಿದ್ದಾರೆ.
ವರ್ಗಾವಣೆಗಾಗಿ ಹಲವಾರು ವರ್ಷಗಳಿಂದ ಕಾಯುತ್ತಿದ್ದ ಸಾವಿರಾರು ಶಿಕ್ಷಕರಿಗೆ ಇದರಿಂದ ಬಹಳ ನಿರಾಸೆಯಾಗಿದೆ. ವರ್ಗಾವಣೆಗಾಗಿ ಈಗಾಗಲೇ 88 ಸಾವಿರಕ್ಕೂ ಹೆಚ್ಚು ಶಿಕ್ಷಕರು ಅರ್ಜಿ ಸಲ್ಲಿಸಿದ್ದಾರೆ. ವರ್ಗಾವಣೆ ಕಾಯಿದೆಗೆ ತಿದ್ದುಪಡಿ ತಂದು, ಶಿಕ್ಷಕರ ಸ್ನೇಹಿ ನಿಯಮಗಳನ್ನು ಜಾರಿಗೆ ತಂದಿದ್ದ ಹಾಲಿ ಸರ್ಕಾರದ ಅವಧಿಯಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿಲ್ಲ. ಚುನಾವಣೆಯ ದಿನಾಂಕ ಘೋಷಣೆಯಾಗುವುದಕ್ಕಿಂತ ಮೊದಲು ಈ ವರ್ಗಾವಣೆಗೆ ಚಾಲನೆ ನೀಡಬೇಕೆಂದು ಒತ್ತಾಯಿಸಿಕೊಂಡೇ ಬಂದಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಕೂಡ ಈಗ ನಿರಾಸೆ ಅನುಭವಿಸುವಂತಾಗಿದೆ.
ಈ ಸಂಘಟನೆಗಳ ಒತ್ತಡಕ್ಕೆ ಮಣಿದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 31 ರಂದು ವರ್ಗಾವಣೆಗೆ ಸಂಬಂಧಿಸಿದ ಕಡತಕ್ಕೆ ಅನುಮೋದನೆ ನೀಡಿ, ಚುನಾವಣಾ ಆಯೋಗದ ಅನುಮತಿಯನ್ನು ಪಡೆದು ಈ ವರ್ಗಾವಣೆ ಪ್ರಕ್ರಿಯೆಯನ್ನು ನಡೆಸಬೇಕೆಂದು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರಾತ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಏ.3 ರಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಪತ್ರ ಬರೆದಿದ್ದು, ಶಿಕ್ಷಕರ ವರ್ಗಾವಣೆಗೆ ಸಹಮತಿ ನೀಡುವಂತೆ ಕೋರಿದ್ದರು.
ಯಾವುದೇ ವರ್ಗಾವಣೆ ಮಾಡಬೇಕಾಗಿದ್ದಲ್ಲಿ ಆಯೋಗದ ಅನುಮತಿ ಪಡೆಯುವಂತೆ ರಾಜ್ಯ ಚುನಾವಣಾ ಆಯೋಗ ಸುತ್ತೋಲೆ ಹೊರಡಿಸಿರುವುದರಿಂದ ಶಿಕ್ಷಕರ ಸಾಮಾನ್ಯ ವರ್ಗಾವಣೆಗೂ ಆಯೋಗದ ಅನುಮತಿ ಅವಶ್ಯವಾಗಿದೆ.
ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್‌ನಲ್ಲಿ ನಿಗದಿಯಾದ ಹಾಗೂ ಶಿಕ್ಷಕರು ವರ್ಗಾವಣೆಗೊಂಡ ಸ್ಥಳಕ್ಕೆ ನೂತನ ಶೈಕ್ಷಣಿಕ ವರ್ಷದ ಆರಂಭದಿಂದ ಅಂದರೆ ಜೂನ್ 1 ರ ನಂತರ ಕರ್ತವ್ಯಕ್ಕೆ ಹಾಜರಾಗುವ ಷರತ್ತಿಗೊಳಪಟ್ಟು ಈ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುವುದು. ಹೆಚ್ಚುವರಿ ಶಿಕ್ಷಕರ ನಿಯೋಜನೆ, ಸರ್ಕಾರಿ ಪ್ರಾಥಮಿ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರನ್ನು ಕೌನ್ಸಿಲಿಂಗ್ ಮುಖಾಂತರ ಮಾತ್ರ ವರ್ಗಾವಣೆ ಮಾಡಲಾಗುತ್ತದೆ. ಇದಕ್ಕೆ ಈಗಾಗಲೇ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದು ಇಲಾಖೆಯು ಪತ್ರದಲ್ಲಿ ವಿವರಿಸಿತ್ತು.
ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್ ಮಾಡಿ.
ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯಗಳಡಿ ವರ್ಗಾವಣೆಗಾಗಿ 88,324 ಶಿಕ್ಷಕರು ಅರ್ಜಿ ಸಲ್ಲಿಸಿದ್ದಾರೆ. ತಾಂತ್ರಿಕ ಕಾರಣಗಳಿಂದಾಗಿ ಕಳೆದ ಡಿಸೆಂಬರ್‌ನಲ್ಲಿ ಆರಂಭವಾಗಿದ್ದ ಈ ವರ್ಗಾವಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು ಎಂದು ರಿತೇಶ್ ಕುಮಾರ್ ಸಿಂಗ್ ಚುನಾವಣಾ ಆಯೋಗಕ್ಕೆ ವಿವರಿಸಿದ್ದರು. ಆದರೆ ಆಯೋಗ ಈ ವರ್ಗಾವಣೆಯನ್ನು ತುರ್ತು ಪ್ರಸ್ತಾವನೆ ಎಂದು ಪರಿಗಣಿಸಿಲ್ಲ. ಹೀಗಾಗಿ ಮುಂದೂಡುವಂತೆ ಸೂಚಿಸಿದೆ ಎನ್ನಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ಶಿಕ್ಷಕರು ಈ ಬಗ್ಗೆ ನಿರಾಶರಾಗಬಾರದು. ನೂತನ ಸರ್ಕಾರ ರಚನೆಯಾದ ಕೂಡಲೇ ಸಂಘವು ಸರ್ಕಾರದೊಂದಿಗೆ ಮಾತುಕತೆ ನಡೆಸಿ, ಕೂಡಲೇ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ದೊರೆಯುಂತೆ ಕ್ರಮ ವಹಿಸಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : KMF Products: ತುಪ್ಪಾ ಬೇಕು ತುಪ್ಪಾ ಅಂದ್ರು ರಾಜ್ಯ-ಹೊರ ರಾಜ್ಯ ಗ್ರಾಹಕರು; ನಂದಿನಿ ತುಪ್ಪಕ್ಕೆ ಬೇಡಿಕೆ ಇದ್ದರೂ ಆಗದ ಪೂರೈಕೆ