Site icon Vistara News

ಮುರುಘಾಶ್ರೀ ಪ್ರಕರಣ | ಇತ್ತ ಮೂರನೇ ಆರೋಪಿಗೆ ಜಾಮೀನು; ಅತ್ತ ಹೈಕೋರ್ಟ್‌ ಮೆಟ್ಟಿಲೇರಿದ ಮುರುಘಾಶ್ರೀ

ಮುರುಘಾಶ್ರೀ

ಚಿತ್ರದುರ್ಗ: ಶ್ರೀಮಠದ ಹಾಸ್ಟೆಲ್‌ನಲ್ಲಿದ್ದು ವ್ಯಾಸಂಗ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ನಿರಂತರ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮುರುಘಾ ಶರಣರಿಗೆ ಸಹಾಯ ಮಾಡಿದ ಆರೋಪದ ಮೇಲೆ ಬಂಧಿತನಾಗಿದ್ದ ಬಾಲ ಆರೋಪಿ ಬಸವಾದಿತ್ಯ (೧೭)ರಿಗೆ ಬಾಲ ನ್ಯಾಯ ಮಂಡಳಿ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.

ಬಸವಾದಿತ್ಯ ಈ ಪ್ರಕರಣದ 3ನೇ ಆರೋಪಿಯಾಗಿದ್ದು, ಜಿಲ್ಲಾ ಬಾಲ ಭವನಕ್ಕೆ ಅಧಿಕಾರಿಗಳು ಹಾಜರುಪಡಿಸಿದರು. ಸಿಡಬ್ಲ್ಯೂಸಿ ಅಧಿಕಾರಿಗಳು ಆರೋಪಿಯ ವಿಚಾರಣೆ ನಡೆಸಿದ್ದಾರೆ. ಇದೀಗ ಬಸವಾದಿತ್ಯಗೆ ಅಲ್ಪಮಟ್ಟಿನ ರಿಲೀಫ್‌ ಸಿಕ್ಕಂತಾಗಿದೆ.

ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸದ ಮುರುಘಾಶ್ರೀ
ಪೋಕ್ಸೊ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ನೀಡುವಂತೆ ಮುರುಘಾ ಶರಣರು ಹೈಕೋರ್ಟ್‌ಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಜಾಮೀನು ವಜಾಗೊಳಿಸಿದ ಚಿತ್ರದುರ್ಗ ಸೆಷನ್ಸ್‌ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದರು. ಶುಕ್ರವಾರ ಈ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಪ್ರತಿವಾದಿಗಳಾದ ಪೊಲೀಸರು ಹಾಗೂ ಬಾಲಕಿಯರ ಪರ ವಕೀಲರಿಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್‌ ಅಕ್ಟೋಬರ್ 28ಕ್ಕೆ ವಿಚಾರಣೆಯನ್ನು ‌ಮುಂದೂಡಿದೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಇನ್ನೂ 30-35 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಸ್ಟ್ಯಾನ್ಲಿ ಗಂಭೀರ ಆರೋಪ

ಏನಿದು ಲೈಂಗಿಕ ಕಿರುಕುಳ ಪ್ರಕರಣ?
ಚಿತ್ರದುರ್ಗ ಜಿಲ್ಲೆಯ ಮುರುಘಾ ಮಠದ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪ ಕೇಳಿಬಂದಿತ್ತು. ವಸತಿ ಶಾಲೆಯಲ್ಲಿದ್ದ ಈ ಈ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆಂದು ದೂರು ನೀಡಲಾಗಿತ್ತು. ಅಲ್ಲದೆ, ಇದಕ್ಕೆ ಅಲ್ಲಿನ ವಾರ್ಡನ್‌ ಸೇರಿ ಹಲವರು ಸಹಕಾರ ನೀಡುತ್ತಿದ್ದಾರೆ ಎಂದು ಆಗಸ್ಟ್‌ ೨೭ರಂದು ಇಬ್ಬರು ವಿದ್ಯಾರ್ಥಿನಿಯರು ಒಡನಾಡಿ ಸಂಸ್ಥೆಯ ಮೂಲಕ ಮೈಸೂರಿನ ನಜರ್‌ಬಾದ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಒಬ್ಬಳು ವಿದ್ಯಾರ್ಥಿನಿ ಮೇಲೆ ೩ ವರ್ಷದಿಂದ ಹಾಗೂ ಇನ್ನೊಬ್ಬ ವಿದ್ಯಾರ್ಥಿನಿಯ ಮೇಲೆ ಕಳೆದ ಒಂದೂವರೆ ವರ್ಷದಿಂದ ಲೈಂಗಿಕ ದೌರ್ಜನ್ಯವನ್ನು ನಡೆಸುತ್ತಾ ಬರಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಯಾರೆಲ್ಲ ಭಾಗಿಗಳು?
ಡಾ. ಶಿವಮೂರ್ತಿ ಮುರುಘಾಶರಣರ ಮೇಲೆ ಅತ್ಯಾಚಾರ ಆರೋಪವನ್ನು ಹೊರಿಸಲಾಗಿದ್ದು, ಅವರಿಗೆ ಸಹಕಾರ ನೀಡಿದ ಆರೋಪದಡಿ ವಸತಿ ಶಾಲೆಯ ವಾರ್ಡನ್‌ ರಶ್ಮಿ, ಮಠದ ಮರಿಸ್ವಾಮಿ ಬಸವಾದಿತ್ಯ, ಕಾರ್ಯದರ್ಶಿ ಪರಮಶಿವಯ್ಯ, ವಕೀಲ ಗಂಗಾಧರ್‌ ಮೇಲೆ ದೂರು ದಾಖಲಾಗಿತ್ತು. ಈ ಇಬ್ಬರು ವಿದ್ಯಾರ್ಥಿನಿಯರನ್ನು ಒತ್ತಾಯಪೂರ್ವಕವಾಗಿ ಸ್ವಾಮೀಜಿ ಬಳಿ ಕಳುಹಿಸಲಾಗುತ್ತಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಲೈಂಗಿಕ ಕ್ರಿಯೆಗೆ ಒಪ್ಪದೇ ಇದ್ದರೆ ಹಣ್ಣು, ಸಿಹಿಯಲ್ಲಿ ಮತ್ತುಬರುವ ಔಷಧವನ್ನು ಬೆರೆಸಿ ಅತ್ಯಾಚಾರ ನಡೆಸಲಾಗುತ್ತದೆ ಎಂದೂ ಹೇಳಲಾಗಿದೆ.

ಬಂಧನದ ಬಳಿಕ
ಆಗಸ್ಟ್‌ ೨೭ರಂದು ದೂರು ದಾಖಲಾಗಿತ್ತಾದರೂ ಮುಂದಿನ ನಾಲ್ಕು ದಿನಗಳ ಕಾಲ ಕಾನೂನು ಪ್ರಕ್ರಿಯೆಯನ್ನು ತೆಗೆದುಕೊಂಡಿರಲಿಲ್ಲ. ಸೆಪ್ಟೆಂಬರ್‌ ೧ರಂದು ರಾತ್ರಿ ಸ್ವಾಮೀಜಿಯನ್ನು ಬಂಧನ ಮಾಡಲಾಯಿತು. ಎರಡನೇ ಆರೋಪಿ, ಹಾಸ್ಟೆಲ್‌ ವಾರ್ಡನ್‌ ರಶ್ಮಿಯನ್ನು ಸಹ ಬಳಿಕ ಬಂಧನ ಮಾಡಿ ಶಿವಮೊಗ್ಗದ ಜೈಲಿಗೆ ಕಳುಹಿಸಲಾಗಿದೆ. ಇದರ ಜತೆಗೆ ಉಳಿದ ಆರೋಪಿಗಳ ಪೈಕಿ ಬಸವಾದಿತ್ಯ ಮತ್ತು ಪರಮಶಿವಯ್ಯ ತಲೆಮರೆಸಿಕೊಂಡಿದ್ದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ, ಕೋರ್ಟ್‌ ಅದನ್ನು ಪುರಸ್ಕರಿಸದೆ ವಿಚಾರಣೆಯನ್ನು ಮುಂದೂಡುತ್ತಲೇ ಬಂದಿದೆ. ಇದರ ನಡುವೆ, ವಕೀಲರಾಗಿರುವ ಗಂಗಾಧರಯ್ಯ ಅವರನ್ನು ಪೊಲೀಸರು ವಿಚಾರಣೆ ನಡೆಸಿ, ಕರೆದಾಗ ಬರುವ ಷರತ್ತಿನೊಂದಿಗೆ ಬಿಟ್ಟುಕಳುಹಿಸಲಾಗಿದೆ.

ಇದನ್ನೂ ಓದಿ | ಚಿತ್ರದುರ್ಗ ಮುರುಘಾಮಠ ಆವರಣದಲ್ಲಿ ನಾಲ್ಕೂವರೆ ವರ್ಷದ ಹೆಣ್ಣು ಮಗು ಪತ್ತೆ; ಅನಧಿಕೃತ ಪೋಷಣೆ ಆರೋಪ

Exit mobile version