ಮಡಿಕೇರಿ: ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರದಲ್ಲಿ ಎಫ್‌ಐಆರ್ ದಾಖಲಾದ ಬಳಿಕ, ಕಾಂಗ್ರೆಸ್ ಮುಖಂಡರೊಬ್ಬರು ನೀಡಿದ ದೂರಿನ ಮೇರೆಗೆ 9 ಬಿಜೆಪಿ ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರ ವಿರುದ್ಧ ಮಡಿಕೇರಿ ನಗರ ಠಾಣೆಯಲ್ಲೂ ಎಫ್‌ಐಆರ್ ದಾಖಲಾಗಿದ್ದು, ವಿಚಾರಣೆ ಹಿನ್ನೆಲೆಯಲ್ಲಿ ಆರೋಪಿಗಳು ಪೊಲೀಸ್ ಠಾಣೆಗೆ ಶುಕ್ರವಾರ ಹಾಜರಾಗಿದ್ದಾರೆ.
ಕಾಂಗ್ರೆಸ್ ಮುಖಂಡ ಪ್ರಕಾಶ್ ಆಚಾರ್ಯ ನೀಡಿದ್ದ ದೂರಿನ ಮೇರೆಗೆ ಕವನ್ ಕಾರ್ಯಪ್ಪ, ಉಮೇಶ್ ಸುಬ್ರಮಣಿ, ಸತ್ಯ ಕರ್ಕೆರ, ಮಹೇಶ್ ಜೈನಿ, ನವೀನ್ ಪೂಜಾರಿ, ಅರುಣ್ ಶೆಟ್ಟಿ, ಸಬಿತಾ, ಶ್ವೇತಾ, ಭರತ್ ಮೇಲೆ ಎಫ್‌ಐಆರ್ ದಾಖಲಾಗಿದೆ. ವಿಚಾರಣೆ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ 9 ಮಂದಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆ ಕಾರ್ಯಕರ್ತರು ಹಾಜರಾಗಿದ್ದರು. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಗರ ಪೊಲೀಸ್ ಠಾಣೆಗೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಿ ಠಾಣೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಕುಶಾಲನಗರ ಠಾಣೆಯಲ್ಲಿ 9 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ವಿಚಾರಣೆ ಬಳಿಕ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ ಜಾಮೀನು ಕೊಡಿಸಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಮಡಿಕೇರಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪ್ರಜಾಪ್ರಭುತ್ವದಲ್ಲಿ ಕಪ್ಪು ಬಾವುಟ ಪ್ರದರ್ಶನಕ್ಕೆ ಅವಕಾಶ ಇದೆ. ಅದೇ ರೀತಿ ಬಿಜೆಪಿ ಕಾರ್ಯಕರ್ತರು ಕಪ್ಪು ಭಾವುಟ ಪ್ರದರ್ಶನ ಮಾಡಿದ್ದಾರೆ. ಆದರೆ ಮೊಟ್ಟೆ ಏಸೆದಿರುವವರು ಯಾರೆಂದು ನಮಗೆ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷದಲ್ಲೆ ಇರುವಂತಹ ಬಿನ್ನಾಭಿಪ್ರಾಯ ಹಾಗೂ ಗುಂಪುಗಾರಿಕೆಯಿಂದಲೇ ಹೀಗಾಗಿರಬಹುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಭೀನ್ ದೇವಯ್ಯ ಆರೋಪಿಸಿದ್ದಾರೆ.
ಇದನ್ನೂ ಓದಿ | ಸಿದ್ದರಾಮಯ್ಯ ಭದ್ರತಾ ವೈಫಲ್ಯ: ಡಿಜಿ ಪ್ರವೀಣ್ ಸೂದ್ ಕರೆಸಿಕೊಂಡು ಚರ್ಚೆ ನಡೆಸಿದ ಮುಖ್ಯಮಂತ್ರಿ ಬೊಮ್ಮಾಯಿ