ಬೆಂಗಳೂರು: ಬೆಂಗಳೂರು ನಗರದಲ್ಲಿ ಸ್ಥಗಿತಗೊಳಿಸಲಾಗಿರುವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ, ಸದ್ಯಕ್ಕೆ, ಸರಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ, ಜಾರಿಗೊಳಿಸುವ ಬಗ್ಗೆ, ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು, ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೂ ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನ ವಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಸಾರ್ವಜನಿಕರಿಂದ, ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು ಎಂದು ನೆನಪಿಸಿದ ಸಚಿವರು, ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಯಾಕೆ ಈ ಹೇಳಿಕೆಗೆ ಮಹತ್ವ?
ನಗರದಲ್ಲಿ ಸಾರ್ವಜನಿಕರಿಂದ ಕೇಳಿಬಂದ ವ್ಯಾಪಕ ಜನಾಕ್ರೋಶದ ಹಿನ್ನೆಲೆಯಲ್ಲಿ ಸರಕಾರ ಟೋಯಿಂನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಇತ್ತೀಚೆಗೆ ಟೋಯಿಂಗ್ ವಾಹನಗಳ ಮಾಲೀಕರು ಮತ್ತು ಕಾರ್ಮಿಕರ ಸಂಘ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದವು. ಈ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಳ್ಳುವಂತೆ ಸರಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತ್ತು. ಜತೆಗೆ ಆರು ವಾರಗಳಲ್ಲಿ ಸಂಘದ ಮನವಿಯನ್ನು ಪರಿಗಣಿಸುವಂತೆ ಸರಕಾರಕ್ಕೆ ಹೇಳಿತ್ತು. ಈ ಹಿನ್ನೆಲೆಯಲ್ಲಿ ಸರಕಾರದ ನಿಲುವೇನು ಎನ್ನುವ ಕುತೂಹಲ ಮೂಡಿತ್ತು. ಹಾಗಾಗಿ ಸರಕಾರ ಸ್ಪಷ್ಟ ನಿಲುವನ್ನು ಪ್ರಕಟಿಸಿದೆ.