ತುಮಕೂರು: ಜಿಲ್ಲೆಯ ಕುಣಿಗಲ್ ಕ್ಷೇತ್ರದ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದೆ. ಬಿಜೆಪಿ ಜನ ಸಂಕಲ್ಪ ಸಮಾವೇಶ (BJP Jan Sankalp Yatra) ಹಿನ್ನೆಲೆಯಲ್ಲಿ ಫ್ಲೆಕ್ಸ್ ಕಟ್ಟುವ ವಿಚಾರಕ್ಕೆ ಇಬ್ಬರು ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರ ನಡುವೆ ಮಂಗಳವಾರ ಮಾರಾಮಾರಿ ನಡೆದಿದೆ.
ಕುಣಿಗಲ್‌ನಲ್ಲಿ ಡಿ.7ರಂದು ಬಿಜೆಪಿ ಜನಸಂಕಲ್ಪ ಸಮಾವೇಶ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಹೀಗಾಗಿ ಕೊತ್ತಗೆರೆ ಗ್ರಾಮದಲ್ಲಿ ಪಕ್ಷದ ನಾಯಕರಿಗೆ ಸ್ವಾಗತ ಕೋರುವ ಫ್ಲೆಕ್ಸ್‌ಗಳನ್ನು ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಜೇಶ್ ಗೌಡ ಬೆಂಬಲಿಗರು ಕಟ್ಟುತ್ತಿದ್ದರು. ಈ ವೇಳೆ ಇದಕ್ಕೆ ಮತ್ತೊಬ್ಬ ಟಿಕೆಟ್ ಆಕಾಂಕ್ಷಿ ಡಿ. ಕೃಷ್ಣಕುಮಾರ್ ಬೆಂಬಲಿಗರು ಅಡ್ಡಿಪಡಿಸಿದ್ದಾರೆ. ಹೀಗಾಗಿ ಎರಡು ಬಣಗಳ ಕಾರ್ಯಕರ್ತರ ನಡುವೆ ಜಗಳ ನಡೆದಿದೆ. ಫ್ಲೆಕ್ಸ್ ಗಲಾಟೆ ತಾರಕಕ್ಕೇರಿದ್ದರಿಂದ ಮುಖ್ಯರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಯಿತು. ಹೀಗಾಗಿ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮಾಜಿ ಸಂಸದ ಮುದ್ದಹನುಮೇಗೌಡ ಕೂಡ ಕುಣಿಗಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇದರ ಜತೆಗೆ ಬಿಜೆಪಿ ಮುಖಂಡರಾದ ರಾಜೇಶ್ ಗೌಡ ಹಾಗೂ ಡಿ. ಕೃಷ್ಣಕುಮಾರ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಹೀಗಾಗಿ ಬಿಜೆಪಿ ಪಕ್ಷದಲ್ಲಿ ಭಿನ್ನಮತ ಕಾಣಿಸಿಕೊಂಡಿದೆ.
ಇದನ್ನೂ ಓದಿ | Karnataka Elections | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಗುಂಪುಗಾರಿಕೆಗೆ ಡಿಕೆಶಿ ಗರಂ, 4 ಅಂಶಗಳ ಎಚ್ಚರಿಕೆ ಸಂದೇಶ ರವಾನೆ