Site icon Vistara News

HD Kumaraswamy: ನಾಫೆಡ್ ಮೂಲಕ 1.5 ಲಕ್ಷ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಿ: ಮೋದಿಗೆ ಎಚ್‌ಡಿಕೆ ಮನವಿ

PM Narendra Modi and HD Kumaraswamy

ಬೆಂಗಳೂರು: ಕೇಂದ್ರ ಸರ್ಕಾರ ಕೊಬ್ಬರಿಗೆ ಬೆಂಬಲ ಬೆಲೆ (Support price for copra) ನೀಡಿರುವುದು ಸ್ವಾಗತಾರ್ಹ. ಆದರೆ, ರಾಜ್ಯದ ರೈತರಿಗೆ ಇನ್ನೂ ಹೆಚ್ಚಿನ ನೆರವು ಸಿಗಬೇಕಿದೆ. ಹೀಗಾಗಿ ಕರ್ನಾಟಕದಲ್ಲಿ ನಾಫೆಡ್ ಮೂಲಕ 1.5 ಲಕ್ಷ ಮೆಟ್ರಿಕ್ ಟನ್ ಕೊಬ್ಬರಿಯನ್ನು ಖರೀದಿ ಮಾಡಬೇಕು ಎಂದು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಮನವಿ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಎಚ್.ಡಿ. ಕುಮಾರಸ್ವಾಮಿ, ಕೊಬ್ಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಮಿಲ್ಲಿಂಗ್‌ ಕೊಬ್ಬರಿಗೆ 300 ರೂ. ಹಾಗೂ ಉಂಡೆ ಕೊಬ್ಬರಿಗೆ 250 ರೂ. (ಪ್ರತಿ ಕ್ವಿಂಟಾಲ್‌ಗೆ) ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 21ರಂದು ನವದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೊಬ್ಬರಿ ರೈತರ ಸಂಕಷ್ಟ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಪ್ರಧಾನಿ ಮೋದಿ ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಹೀಗಾಗಿ ಈಗ ನೆರವು ನೀಡಲಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ.

ಇದನ್ನೂ ಓದಿ: Kannada Name plate: ಧರ್ಮದ್ದಾದರೆ ಕೇಸ್‌ ವಾಪಸ್‌; ಕನ್ನಡದ ಹೋರಾಟವಾದರೆ ಯಾಕಿಲ್ಲ: ಪ್ರವೀಣ್‌ ಶೆಟ್ಟಿ ಗುಡುಗು

ನಾಫೆಡ್ ಮೂಲಕ 1.5 ಲಕ್ಷ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಗೆ ಮನವಿ

ಆದರೆ, ರಾಜ್ಯದಲ್ಲಿ ತೆಂಗು ಬೆಳೆಗಾರರು ಬಹಳ ಸಂಕಷ್ಟದಲ್ಲಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ನೆರವು ಬೇಕಿದೆ. ಮಧ್ಯವರ್ತಿಗಳು ಅವರನ್ನು ಕಿತ್ತು ತಿನ್ನುತ್ತಿದ್ದಾರೆ. ಇದು ಎಲ್ಲೆಡೆ ಕಂಡು ಬರುತ್ತಿರುವ ನೈಜ ಚಿತ್ರಣ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರವಾಗಿ ನಾಫೆಡ್ ಮೂಲಕವೇ ಕೊನೇ ಪಕ್ಷ ರಾಜ್ಯದಲ್ಲಿ 1.5 ಲಕ್ಷ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ವಿನಂತಿಸುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

Exit mobile version