ಶಿರಾ: ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಶಿರಾ ನಗರಕ್ಕೆ (Shira News) ಸೋಮವಾರ ಬೆಳಿಗ್ಗೆ ಭೇಟಿ ನೀಡಿದ ಎಚ್.ಡಿ. ಕುಮಾರಸ್ವಾಮಿ ಅವರನ್ನು ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು.
ಮೊದಲಿಗೆ ತಾಲೂಕಿನ ಪಟ್ಟನಾಯಕನಹಳ್ಳಿಯ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದಲ್ಲಿರುವ ಓಂಕಾರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದರು. ಬಳಿಕ ಮಠದ ಶ್ರೀ ನಂಜಾವಧೂತ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು.
ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ
ಇದಕ್ಕೂ ಮೊದಲು ಶಿರಾ ನಗರದಲ್ಲಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರ ಸರ್ಕಾರದಲ್ಲಿ 2 ಕಠಿಣ ಇಲಾಖೆಗಳನ್ನು ನಿಭಾಯಿಸುವ ಹೊಣೆಗಾರಿಕೆ ಸಿಕ್ಕಿದೆ. ಜತೆಗೆ ರಾಜ್ಯಕ್ಕೆ ಉತ್ತಮ ಕೊಡುಗೆ ನೀಡುವ ಅವಕಾಶವೂ ದೊರಕಿದೆ. ಸಿಕ್ಕಿರುವ ಅಧಿಕಾರವನ್ನು ಸಮರ್ಥವಾಗಿ ಬಳಸಿಕೊಂಡು ರಾಜ್ಯ ಮತ್ತು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ನೀಡುವುದಾಗಿ ಭರವಸೆ ನೀಡಿದರು.
ಇದೇ ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಂದೆ ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವವನ್ನು ಗುರುತಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿ ಜವಾಬ್ದಾರಿಯನ್ನು ನೀಡಲಾಗಿದೆ. ಅವರು ಇಂದು ಕೇಂದ್ರ ಸಚಿವರಾಗಿದ್ದು, ದೇಶ ಮತ್ತು ರಾಜ್ಯಕ್ಕಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದ ಅವರು, ತಮ್ಮ ನಿರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ಪೂರೈಸುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಇದನ್ನೂ ಓದಿ: Karnataka Weather : ಬೆಂಗಳೂರು, ಚಿಕ್ಕಮಗಳೂರಲ್ಲಿ ಸುರಿದ ಧಾರಾಕಾರ ಮಳೆ
ಈ ಸಂದರ್ಭದಲ್ಲಿ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಜೆಡಿಎಸ್ ಮುಖಂಡ ಆರ್.ಉಗ್ರೇಶ್, ಜೆಡಿಎಸ್ ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಸತ್ಯಪ್ರಕಾಶ್ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಇತರರು ಉಪಸ್ಥಿತರಿದ್ದರು.