ಶಿರಾ: ತಾಲೂಕಿನ ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಜೆಡಿಎಸ್ (JDS) ತಾಲೂಕು ಘಟಕದ ವತಿಯಿಂದ ಜೆಸ್ಕಾಂ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ (Protest) ನಡೆಸಲಾಯಿತು.
ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಸತ್ಯಪ್ರಕಾಶ್ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ,
ತಾಲೂಕಿನಾದ್ಯಂತ ಅನಿಯಮಿತವಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ ಇದರಿಂದ ರೈತರಿಗೆ, ವಿದ್ಯಾರ್ಥಿಗಳಿಗೆ, ರೋಗಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಮಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ, ಪಂಪ್‌ಸೆಟ್ ಗಳಿಂದ ಹೊಲಗಳಿಗೆ ನೀರುಣಿಸಬೇಕೆಂದರೆ ಸಮರ್ಪಕ ವಿದ್ಯುತ್ ಇಲ್ಲದಿರುವುದರಿಂದ ರೈತರಿಗೆ ತೀವ್ರ ತೊಂದರೆಯಾಗುತ್ತಿದೆ
ಸರ್ಕಾರವು ಉಚಿತ 5 ಭಾಗ್ಯಗಳ ಗುಂಗಿನಲ್ಲಿದ್ದು ರೈತರನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದ ಅವರು, ಕೂಡಲೇ ಸರ್ಕಾರ ಸಮರ್ಪಕ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಒಂದು ವಾರದ ಗಡುವು ನೀಡಿದ್ದು ಸಮಸ್ಯೆಗಳನ್ನು ಬಗೆಹರಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ತಾಲೂಕು ಘಟಕದ ಮುಖಂಡರುಗಳಾದ ಮುದಿಮಡು ರಂಗಸ್ವಾಮಿ, ಎಸ್.ಆರ್.ಗೌಡ, ಟಿ.ಡಿ.ಮಲ್ಲೇಶ್, ಸುನೀಲ್ ಗೌಡ ಸೇರಿದಂತೆ ವಿವಿಧ ಮುಖಂಡರು, ಇತರರು ಪಾಲ್ಗೊಂಡಿದ್ದರು.