ಬೆಂಗಳೂರು: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡು ಹಲವರು ಗಾಯಗೊಂಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ತೀವ್ರ ದುಃಖಿತನಾಗಿದ್ದೇನೆ ಎಂದಿರುವ ಅವರು ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಈ ನಡುವೆ, ರಾಜ್ಯ ಸರಕಾರದಿಂದ ಮೃತರ ಕುಟುಂಬಗಳಿಗೆ ತಲಾ ೫ ಲಕ್ಷ ರೂ. ಮತ್ತು ಗಾಯಗೊಂಡಿರುವವರ ಚಿಕಿತ್ಸೆಯ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ನಾಳೆ ಮನೆಗಳಿಗೆ ಭೇಟಿ ನೀಡುವ ಸಾಧ್ಯತೆ
ಶಿರಾ ಅಪಘಾತದಲ್ಲಿ ಮೃತಪಟ್ಟವರು ಮತ್ತು ಗಾಯಕ್ಕೊಳಗಾದವರೆಲ್ಲರೂ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ನಿವಾಸಿಗಳು. ನಾಳೆ ರಾಯಚೂರು ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಮೃತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳುವ ಸಾಧ್ಯತೆ ಇದೆ. ವಡವಟ್ಟಿ, ಕುರುಕುಂದ, ಶಾಂತಗಲ್ ಗ್ರಾಮಕ್ಕೆ ಭೇಟಿ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಎಚ್‌ಡಿಕೆ ಕಂಬನಿ
ʻʻತುಮಕೂರು ಜಿಲ್ಲೆಯ ಶಿರಾ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 9 ಜನರು ದುರ್ಮರಣಕ್ಕಾಗಿ, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತವಾಯಿತು. ಮೃತಪಟ್ಟವರು ಕೂಲಿಕಾರ್ಮಿಕರು, ಬದುಕು ಕಟ್ಟಿಕೊಳ್ಳಲು ಅವರೆಲ್ಲರೂ ರಾಯಚೂರಿನಿಂದ ಬೆಂಗಳೂರಿಗೆ ಬರುತ್ತಿದ್ದರೆಂದು ತಿಳಿದು ನನಗೆ ಅತೀವ ದುಃಖವಾಗಿದೆ.ʼʼ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ.