ಬೆಂಗಳೂರು: ಬಿಟಿಎಂ ಲೇಔಟ್ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಮಡಿವಾಳ ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ. ಭಾನುವಾರ ಚುನಾವಣಾ ಪ್ರಚಾರದ (Karnataka Election) ವೇಳೆ ಹರಿನಾಥ್ ಎಂಬ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದರು.
ಘಟನೆಯನ್ನು ವಿರೋಧಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಹರೀಶ್ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | Karnataka Election: ಅಭಿವೃದ್ಧಿ ಕೆಲಸ, ಸಾಧನೆಗಳೇ ಮತ್ತೆ ಅಧಿಕಾರ ತಂದು ಕೊಡಲಿವೆ ಎಂದ ಸಿಎಂ ಬಸವರಾಜ ಬೊಮ್ಮಾಯಿ
ಏನಿದು ಘಟನೆ?
ಭಾನುವಾರ ರಾತ್ರಿ ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಅವರ ಪರ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದಾಗ, ಕಾಂಗ್ರೆಸ್ ಕಾರ್ಯಕರ್ತರು ಎದುರಾಗಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಗಲಾಟೆ ಶುರುವಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ಹರಿನಾಥ್ ಎಂಬುವವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಹರಿನಾಥ್ ಮುಖದ ಭಾಗಕ್ಕೆ ಗಂಭೀರ ಗಾಯಗಳಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಮಡಿವಾಳ ಪೊಲೀಸ್ ಠಾಣೆಗೆ ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಪುತ್ರ ಹಾಗೂ ಕಾರ್ಯಕರ್ತರು ಭಾನುವಾರ ರಾತ್ರಿಯೇ ದೂರು ನೀಡಿದ್ದರು. ಅಲ್ಲದೆ, ಸಂಸದ ತೇಜಸ್ವಿ ಸೂರ್ಯ ಸೇರಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿದ್ದರು. ಆದರೆ, ಸಂಜೆಯಾದರೂ ಬಂಧಿಸದೇ ಇದ್ದ ಕಾರಣ ಮತ್ತೆ ಶ್ರೀಧರ ರೆಡ್ಡಿ ನೇತೃತ್ವದಲ್ಲಿ ಮಡಿವಾಳ ಠಾಣೆ ಮುಂದೆ ಪ್ರತಿಭಟನೆ ಮಾಡಿದ್ದರು. ನಂತರ ಪೊಲೀಸರು ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಬಂಧಿಸಿದ್ದಾರೆ.