ಬೆಂಗಳೂರು: ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಹೊಸಕೆರೆಹಳ್ಳಿ ಕೆರೆಯ (Hosakerehalli Lake) ಮಧ್ಯೆ ರಸ್ತೆ ನಿರ್ಮಾಣಕ್ಕೆ ಅನುಮತಿ ನೀಡಿದ ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕ್ರಮ ಕೈಗೊಳ್ಳಲು ಸೂಚಿಸಿದ ಬೆನ್ನಲ್ಲೇ ಇಬ್ಬರು ಮಹಿಳಾ ಅಧಿಕಾರಿಗಳನ್ನು ಅಮಾನತು ಮಾಡಿ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್.ಕೆ.ಲಕ್ಷ್ಮೀಸಾಗರ್ ಆದೇಶ ಹೊರಡಿಸಿದ್ದಾರೆ.
ಘನತ್ಯಾಜ್ಯ ವಿಭಾಗದ ಇಇ ಎಚ್.ಎಸ್.ಮೇಘ ಹಾಗೂ ಎಇ ಶಿಲ್ಪ ಅಮಾನತುಗೊಂಡ ಅಧಿಕಾರಿಗಳು. ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆಯ ಮಧ್ಯೆ ರಸ್ತೆ ನಿರ್ಮಾಣಕ್ಕೆ ಕಾರಣಕರ್ತರಾದ ಅಧಿಕಾರಿಗಳು, ಎಂಜಿನಿಯರ್‌ಗಳನ್ನು ಸೋಮವಾರ (ಜೂನ್ 5) ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದ್ದರು. ಹೀಗಾಗಿ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ.
ಇದನ್ನೂ ಓದಿ | ಗ್ಲೋಬಲ್ ಬೆಂಗಳೂರು ಮಾಡಲು ಸಲಹಾ ಸಮಿತಿ; ಇದು ಡಿಕೆಶಿ ಮಾಸ್ಟರ್ ಪ್ಲ್ಯಾನ್!
ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು? ಯಾಕಾಗಿ ಇದನ್ನು ಮಾಡಿದಿರಿ? ಯಾರಿಗೆ ಅನುಕೂಲ ಮಾಡಿಕೊಡಲು ಮಾಡಿದಿರಿ? ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದೀರಿ ಎಂದು ಶಿವಕುಮಾರ್ ಅವರು ಸೋಮವಾರ ಮಧ್ಯಾಹ್ನ ಸಭೆಯಲ್ಲಿ ಬಿಬಿಎಂಪಿ ಆಯುಕ್ತರನ್ನು ಪ್ರಶ್ನಿಸಿದ್ದರು. ಅಧಿಕಾರಿಗಳು ಇದಕ್ಕೆ ಉತ್ತರಿಸಲು ತಡಬಡಾಯಿಸಿದರು. ತಕ್ಷಣವೇ ಉಪ ಮುಖ್ಯಮಂತ್ರಿಗಳು ಹೊಸಕೆರೆಹಳ್ಳಿ ಕೆರೆ ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚನೆ ನೀಡಿದ್ದರು.