Site icon Vistara News

Udhayanidhi Stalin: ಸನಾತನ ಧರ್ಮದ ವಿರುದ್ಧ ಹೇಳಿಕೆ; ಇಂದು ಬೆಂಗಳೂರು ಕೋರ್ಟ್‌ನಲ್ಲಿ ಉದಯನಿಧಿ ಸ್ಟಾಲಿನ್‌ ವಿಚಾರಣೆ

Udhayanidhi Stalin

Udhayanidhi Stalin

ಬೆಂಗಳೂರು: ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ವಿಚಾರಕ್ಕೆ ಸಂಬಂಧಿಸಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ (Udhayanidhi Stalin) ಇಂದು (ಜೂನ್‌ 25) ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಉದಯನಿಧಿ ಸ್ಟಾಲಿನ್ ಕಳೆದ ವರ್ಷ ನೀಡಿದ್ದ ಹೇಳಿಕೆ ಸಂಬಂಧ ಪರಮೇಶ್ ಎಂಬವರು ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಕೋರ್ಟ್‌ ಸಮನ್ಸ್ ಜಾರಿ ಮಾಡಿತ್ತು. ಹೀಗಾಗಿ ಉದಯನಿಧಿ ಸ್ಟಾಲಿನ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಉದಯನಿಧಿ ಸ್ಟಾಲಿನ್ ಆಗಮನದ ಹಿನ್ನೆಲೆಯಲ್ಲಿ ಕೋರ್ಟ್‌ ಆವರಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೂವರು ಇನ್ಸ್‌ಪೆಕ್ಟರ್‌ ಸೇರಿದಂತೆ 70ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಏನಿದು ವಿವಾದ?

ತಮಿಳುನಾಡಿನ ಸಿಎಂ ಎಂ.ಕೆ.‌ ಸ್ಟಾಲಿನ್ ಪುತ್ರ ಹಾಗೂ ಕ್ರೀಡಾ ಸಚಿವರಾಗಿರುವ ಉದಯನಿಧಿ ಸ್ಟಾಲಿನ್‌ 2023ರ ಸೆ. 4ರಂದು ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ “ಸನಾತನ ನಿರ್ಮೂಲನಾ ಸಮಾವೇಶ”ದಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮದ ಉಲ್ಲೇಖ ಮಾಡಿದ್ದರು. “ ಸನಾತನ ಧರ್ಮ ಕೊರೊನಾ, ಡೆಂಗ್ಯೂ, ಮಲೇರಿಯಾ ಇದ್ದಂತೆ. ಇಂತಹ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನೀವು “ಸನಾತನ ವಿರೋಧಿ ಸಮ್ಮೇಳನ” ಎಂಬುದಾಗಿ ಆಯೋಜಿಸುವ ಬದಲು “ಸನಾತನ ನಿರ್ಮೂಲನಾ ಸಮ್ಮೇಳನ” ಎಂಬುದಾಗಿ ಕಾರ್ಯಕ್ರಮ ಆಯೋಜಿಸಿದ್ದು ನನಗೆ ಇಷ್ಟವಾಯಿತು” ಎಂದು ಹೇಳಿದ್ದರು.

ಉದಯನಿಧಿ ಸ್ಟಾಲಿನ್‌ ಅವರು ಈ ಹೇಳಿಕೆ ನೀಡಿದ ಬಳಿಕ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಪರ-ವಿರೋಧ ಚರ್ಚೆಗಳು ಆರಂಭವಾಗಿದ್ದವು. ಬಿಜೆಪಿ ನಾಯಕರಂತೂ ಉದಯನಿಧಿ ಸ್ಟಾಲಿನ್‌ ಅವರ ಮೇಲೆ ಮುಗಿಬಿದ್ದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರೇ, “ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲೆಂದೇ ಪ್ರತಿಪಕ್ಷಗಳು ಒಗ್ಗೂಡಿ ಇಂಡಿಯಾ ಎಂಬ ಒಕ್ಕೂಟ ರಚಿಸಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಉದಯನಿಧಿ ಸ್ಟಾಲಿನ್‌, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ಕಾನೂನು ಹೋರಾಟಕ್ಕೂ ಸಿದ್ಧನಾಗಿದ್ದೇನೆ ಎಂದು ಹೇಳಿದ್ದರು.

ಈ ವಿವಾದ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಉದಯನಿಧಿ ಸ್ಟಾಲಿನ್‌ ಹಾಗೂ ತಮಿಳುನಾಡು ಸರ್ಕಾರ ಸೇರಿ 16 ಜನರಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿಗೊಳಿಸಿತ್ತು. ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್‌, ಮತ್ತೊಬ್ಬ ಸಚಿವ ಎ. ರಾಜಾ ಸೇರಿ 16 ಜನರಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿಗೊಳಿಸಿತ್ತು. ಇವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಪ್ರತಿಕ್ರಿಯೆ ನೀಡುವಂತೆ ತಮಿಳುನಾಡು ಸರ್ಕಾರ ಹಾಗೂ 15 ಜನರಿಗೆ ನೋಟಿಸ್‌ ಜಾರಿಗೊಳಿಸಿತ್ತು. ಎ.ರಾಜಾ ಕೂಡ ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇವರ ವಿರುದ್ಧ ಚೆನ್ನೈ ಮೂಲದ ಬಿ. ಜಗನ್ನಾಥ್‌ ಕೋರ್ಟ್‌ ಮೊರೆ ಹೋಗಿದ್ದರು.

ಇದನ್ನೂ ಓದಿ: Udhayanidhi Stalin: ಸಂಸತ್‌ಗೆ ಮುರ್ಮುರನ್ನು ಆಹ್ವಾನಿಸದಿರುವುದೇ ಸನಾತನ ಧರ್ಮ ಎಂದ ಉದಯನಿಧಿ

Exit mobile version