ಚಿಕ್ಕಮಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ (Karnataka Election 2023) ಮುಹೂರ್ತ ನಿಗದಿಯಾಗುತ್ತಲೇ ರಾಜ್ಯಾದ್ಯಂತ ಹಣದ ಹೊಳೆಯೇ ಹರಿಯುತ್ತಿದೆ. ಚುನಾವಣೆ ಪ್ರಚಾರಕ್ಕಾಗಿ ಅಭ್ಯರ್ಥಿಗಳು ಕೋಟಿ ಕೋಟಿ ರೂಪಾಯಿಯನ್ನು ಸಾಗಣೆ ಮಾಡುತ್ತಿದ್ದಾರೆ. ಆದರೂ, ಅಧಿಕಾರಿಗಳ ಹದ್ದಿನ ಕಣ್ಣಿನಿಂದ ಕೋಟ್ಯಂತರ ರೂಪಾಯಿಯನ್ನು ಸಾಗಣೆ ಮಾಡುವುದು ಕಷ್ಟವಾಗುತ್ತಿದೆ. ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ಕೋಟಿ ಕೋಟಿ ರೂಪಾಯಿಯನ್ನು ಜಪ್ತಿ ಮಾಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾಖಲೆ ಇಲ್ಲದ 6.44 ಕೋಟಿ ರೂಪಾಯಿ ಹಾಗೂ 17 ಕೆಜಿ ಚಿನ್ನ ಮತ್ತು ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ಹಣ ಹಾಗೂ ಚಿನ್ನ ಜಪ್ತಿ ಮಾಡಲಾಗಿದೆ. ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹಾಕಿರುವ ಚೆಕ್‌ಪೋಸ್ಟ್‌ನಲ್ಲಿ ಅಧಿಕಾರಿಗಳು ಟಾಟಾ ಏಸ್ ವಾಹನವನ್ನು ತಪಾಸಣೆ ಮಾಡಿದ್ದಾರೆ. ಇದೇ ವೇಳೆ ಅಧಿಕಾರಿಗಳಿಗೆ ಕೋಟ್ಯಂತರ ರೂಪಾಯಿ, ಚಿನ್ನ ಹಾಗೂ ಬೆಳ್ಳಿ ದೊರೆತಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಬೆಂಗಳೂರಿನಲ್ಲಿ 30 ಲಕ್ಷ ರೂ. ಪತ್ತೆ
ಬೆಂಗಳೂರು: ನಗರದ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದ 30 ಲಕ್ಷ ರೂಪಾಯಿ ಪತ್ತೆಯಾಗಿದೆ. ಲಾಲ್ ಬಾಗ್ ದಕ್ಷಿಣ ಗೇಟ್ ಬಳಿ ಅಕ್ರಮವಾಗಿ ಹಣ ಸಾಗಣೆ ಮಾಡುತ್ತಿದ್ದಾಗ ಪೊಲೀಸರು ಇಬ್ಬರನ್ನು ಬಂಧಿಸಿ, ಹಣ ಜಪ್ತಿ ಮಾಡಿದ್ದಾರೆ. ಬಂಧಿತರನ್ನು ಗುಜರ್ ಹಾಗೂ ರತನ್ ಗುಪ್ತಾ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗದಲ್ಲಿ 1.39 ಕೋಟಿ ರೂ. ವಶಕ್ಕೆ
ಶಿವಮೊಗ್ಗ: ಜಿಲ್ಲೆಯ ಹರಕೆರೆ ಚೆಕ್ ಪೋಸ್ಟ್‌ನಲ್ಲಿ 1.39 ಕೋಟಿ ರೂಪಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. ವಾಹನ ತಪಾಸಣೆ ನಡೆಸುತ್ತಿರುವ ವೇಳೆ ನಗದು ಪತ್ತೆಯಾಗಿದೆ. ಯಾವುದೇ ದಾಖಲೆಯಿಲ್ಲದೆ ಬೊಲೆರೋ ವಾಹನದಲ್ಲಿ ಹಣ ಸಾಗಿಸಲಾಗುತ್ತಿತ್ತು. ಹಾಗಾಗಿ, ಪೊಲೀಸರು ಹಣ ಮತ್ತು ಚಾಲಕ ರವಿ ಮುಡಬೂಳ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿಯಲ್ಲಿ 1 ಕೋಟಿ ರೂಪಾಯಿ ಜಪ್ತಿ
ಕಲಬುರಗಿ: ತಾಲೂಕಿನ ಅಫಜಲಪುರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಪರತಾಬಾದ್ ಚೆಕ್‌ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಾಟ ಮಾಡಲಾಗುತ್ತಿದ್ದ 1 ಕೋಟಿ ರೂಪಾಯಿ ನಗದು ಹಣವನ್ನು ಜಪ್ತಿ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರದ ನಿವಾಸಿ ರವಿ ಮುಡಬೂಳ ಎಂಬುವವರು ಯಾವುದೇ ದಾಖಲೆ ಇಲ್ಲದೆ ಕಾರಿನಲ್ಲಿ ಹಣ ಕೊಂಡ್ಯೊಯುತ್ತಿದ್ದರು. ಸದ್ಯ ಒಂದು ಕೋಟಿ ರೂಪಾಯಿ ಜತೆಗೆ ರವಿ ಅವರನ್ನೂ ಚುನಾವಣಾಧಿಕಾರಿಗಳು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಇಷ್ಟು ಮೊತ್ತದ ಹಣವನ್ನು ಎಲ್ಲಿಂದ, ಎಲ್ಲಿಗೆ ಸಾಗಾಟ ಮಾಡಲಾಗುತ್ತಿದೆ. ಯಾವ ಉದ್ದೇಶಕ್ಕಾಗಿ ಸಾಗಿಸಲಾಗುತ್ತಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಪರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.