ಹುಬ್ಬಳ್ಳಿ: ರಾಜ್ಯದಲ್ಲಿ ಗ್ಯಾರಂಟಿ ಗ್ಯಾರಂಟಿ ಎಂದು ಬಾಯಿ ಬಡಿದುಕೊಳ್ಳುವ ಕಾಂಗ್ರೆಸ್ ಸರ್ಕಾರ ಈಗ ತೈಲ ಬೆಲೆ ಏರಿಸುವ ಮೂಲಕ ಜನರ ಕೈಗೆ ಅಕ್ಷರಶಃ ಚೊಂಬು ಕೊಟ್ಟಿದೆ ನೋಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ರಾಜ್ಯ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ.
ಇದನ್ನೂ ಓದಿ: Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ
ರಾಜ್ಯದಲ್ಲಿ ಅಭಿವೃದ್ಧಿ ಮಾತ್ರ ಕೇಳ್ಬೇಡಿ, ತಗೊಳ್ರಪ್ಪ ಕೊಟ್ರು ಚೊಂಬು ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿ ಹಾಯ್ದ ಸಚಿವರು, ಬೆಲೆ ಏರಿಕೆ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದತ್ತ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುತ್ತ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ರಾಜ್ಯದ ಜನಸಾಮಾನ್ಯರಿಗೆ ತಾನೇ ಬೆಲೆ ಏರಿಕೆ ಬಿಸಿ ತಟ್ಟಿಸಿದೆ ಎಂದು ಸಚಿವ ಜೋಶಿ ಕಿಡಿಕಾರಿದರು.
ಕೇಂದ್ರ ಸರ್ಕಾರ ಇಂಧನ ಬೆಲೆ ಕಡಿಮೆ ಮಾಡಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನರಿಗೆ ಹೊರೆ ಮಾಡಿದೆ ಎಂದು ಖಂಡಿಸಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಭ್ರಷ್ಟಾಚಾರ, ದುರಾಡಳಿತ, ರೈತರ ಆತ್ಮಹತ್ಯೆ, ಹಗರಣಗಳ ಭಾಗ್ಯಗಳನ್ನು ನೀಡಿದೆಯೇ ಹೊರತು ಜನರ ಪಾಲಿಗೆ ಭಾಗ್ಯಶಾಲಿಯಾಗಿ ಉಳಿದಿಲ್ಲ ಎಂದು ಟೀಕಿಸಿದರು.
ಇದನ್ನೂ ಓದಿ: Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡ 1.5 ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳನ್ನೇ ಕೈಗೊಂಡಿಲ್ಲ. ಈಗ ನೇರವಾಗಿ ಜನರ ಜೇಬಿಗೇ ಕತ್ತರಿ ಹಾಕುವ ಕೆಲಸಕ್ಕೆ ಕೈ ಹಾಕಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು.