Site icon Vistara News

Uttara Kannada News: ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂದ ಡಾ.ತಿಪ್ಪೇಸ್ವಾಮಿ

District Level Childrens Rights Protection Committee meeting at DC office Karwar

ಕಾರವಾರ: ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ರೂಪಿಸಿರುವ ಮಕ್ಕಳ ಹಕ್ಕುಗಳನ್ನು (Childrens Rights) ರಕ್ಷಿಸಿ ಅವರ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಾಣ ಮಾಡುವುದು ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರ ಜವಾಬ್ದಾರಿಯಾಗಿದೆ (Responsibility) ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಕ್ಕಳ ಹಕ್ಕುಗಳ ರಕ್ಷಣೆ ಕುರಿತಂತೆ ಜಿಲ್ಲೆಯ ಎಲ್ಲಾ ಜಿಲ್ಲಾಮಟ್ಟ, ತಾಲೂಕುಮಟ್ಟ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿಗಳಿಗೂ ಜವಾಬ್ದಾರಿಗಳಿದ್ದು, ಎಲ್ಲರೂ ತಮ್ಮ ವ್ಯಾಪ್ತಿಯಲ್ಲಿ ಮಕ್ಕಳ ಮೇಲೆ ಯಾವುದೇ ರೀತಿಯ ದೌರ್ಜನ್ಯ ಅಥವಾ ಅವರ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಈ ಕುರಿತು ಪರಸ್ಪರ ಸಮನ್ವಯದೊಂದಿಗೆ ಅಗತ್ಯ ಕ್ರಮ ಕೈಗೊಂಡು, ಮಕ್ಕಳ ರಕ್ಷಣೆಗೆ ತಕ್ಷಣ ಮುಂದಾಗಬೇಕು ಎಂದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 112/1098 ಬಗ್ಗೆ ಶಾಶ್ವತ ಫಲಕಗಳನ್ನು ಅಳವಡಿಸಬೇಕು. ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ 2016ರ ಮಾರ್ಗಸೂಚಿಯಂತೆ, ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಮಕ್ಕಳ ಸುರಕ್ಷಾ ಸಮಿತಿಗಳನ್ನು ರಚಿಸಿಕೊಂಡು ನಿಯಮಿತವಾಗಿ ಸಭೆಗಳನ್ನು ನಡೆಸಿ ಮಕ್ಕಳ ರಕ್ಷಣೆಯ ಬಗ್ಗೆ ಸದಾ ನಿಗಾವಹಿಸಬೇಕು ಎಂದರು.

ಇದನ್ನೂ ಓದಿ: Vijayanagara News: ಹೊಸಪೇಟೆಯಲ್ಲಿ 22ಲಕ್ಷಕ್ಕೂ ಅಧಿಕ ಮೌಲ್ಯದ 29 ಬೈಕ್‌ಗಳ ವಶ; ಆರೋಪಿಗಳ ಬಂಧನ

ಡಾ. ತಿಪ್ಪೇಸ್ವಾಮಿ ನೀಡಿದ ಸೂಚನೆಗಳು

  1. ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಸೇರಿದಂತೆ ವಿವಿಧ ಇಲಾಖೆಗಳ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳಲ್ಲಿ ಹಾಗೂ ವಸತಿ ಶಾಲೆಗಳಲ್ಲಿ ಸಿಸಿಟಿವಿ ಅಳವಡಿಕೆ ಸೇರಿದಂತೆ ಮಕ್ಕಳ ಸುರಕ್ಷತೆಗೆ ಗರಿಷ್ಠ ಸುರಕ್ಷತಾ ಕ್ರಮ ಕೈಗೊಳ್ಳಬೇಕು.
  2. ಮಕ್ಕಳ ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.
  3. ಮೂಲಭೂತ ಸೌಕರ್ಯದಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು.
  4. ಆಗಾಗ ಮಕ್ಕ ಸಮಗ್ರ ಆರೋಗ್ಯ ತಪಾಸಣೆ ನಡೆಸಬೇಕು.
  5. ಜಿಲ್ಲೆಯಲ್ಲಿನ ಶಾಲೆಗಳ ಕಟ್ಟಡದ ಮೇಲೆ ವಿದ್ಯುತ್ ತಂತಿಗಳು ಹಾದು ಹೋಗಿರುವ ಬಗ್ಗೆ ಮತ್ತು ಶಾಲಾ ಆವರಣದಲ್ಲಿ ವಿದ್ಯುತ್ ಕಂಬಗಳು, ಟ್ರಾನ್ಸ್‌ ಫಾರ್ಮರ್‌ಗಳು ಅಳವಡಿಕೆಯಾಗಿರುವ ಬಗ್ಗೆ ಪರಿಶೀಲಿಸಿ ಅವುಗಳನ್ನು ಕೂಡಲೇ ಅಲ್ಲಿಂದ ತೆರವುಗೊಳಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
  6. ಶಾಲಾ ವಾಹನಗಳಲ್ಲಿ ಮಕ್ಕಳ ನಿಗದಿಗಿಂತ ಹೆಚ್ಚು ಕರೆದುಕೊಂಡು ಹೋಗುತ್ತಿರುವುದು ಕಂಡು ಬರುತ್ತಿದ್ದು ಈ ಬಗ್ಗೆ ಆರ್.ಟಿ.ಓ. ಅಧಿಕಾರಿಗಳು ಪರಿಶೀಲಿಸಿ ಅಗತ್ಯ ಕೈಗೊಳ್ಳುವುದರ ಜತೆಗೆ ಎಲ್ಲಾ ಶಾಲಾ ಬಸ್‌ಗಳ ದೃಢತೆ, ವಿಮೆ ಸೇರಿದಂತೆ ವಾಹನಕ್ಕೆ ಸಂಬಂದಪಟ್ಟ ದಾಖಲೆಗಳನ್ನು ಪರಿಶೀಲಿಸಬೇಕು.
  7. ಹೆಚ್ಚಿನ ಮಕ್ಕಳು ಶಾಲೆಗೆ ತೆರಳುವ ಮಾರ್ಗಗಳಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮದ ಮೂಲಕ ಅವರಿಗೆ ಸೂಕ್ತ ಬಸ್ ವ್ಯವಸ್ಥೆ ಒದಗಿಸಬೇಕು.
  8. ಪೊಲೀಸ್ ಇಲಾಖೆ ವತಿಯಿಂದ ತಮ್ಮ ವ್ಯಾಪ್ತಿಯಲ್ಲಿ ಮಕ್ಕಳಿಗೆ ತೆರೆದ ಮನೆ ಕಾರ್ಯಕ್ರಮದ ಮೂಲಕ ಪೊಲೀಸ್ ಇಲಾಖೆ ಮಕ್ಕಳ ಸ್ನೇಹಿಯಾಗಿರಬೇಕು.
  9. ಮಕ್ಕಳಿಗೆ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿ, ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಮಕ್ಕಳ ಹಕ್ಕುಗಳ ಕುರಿತು ಸಿಬ್ಬಂದಿಗೆ ಕಾನೂನು ಅರಿವು ಮೂಡಿಸಬೇಕು.
  10. ಆರೋಗ್ಯ ಇಲಾಖೆಯ ಮೂಲಕ ಶಾಲೆಗಳಿಗೆ ಭೇಟಿ ನೀಡಿ, ಮಕ್ಕಳಿಗೆ ಆರೋಗ್ಯದ ಬಗ್ಗೆ ನಿಯಮಿತವಾಗಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು.

ಇದನ್ನೂ ಓದಿ: Uttara Kannada News: ಗಾಂಜಾ ಮಾರುತ್ತಿದ್ದವನ ಬಂಧನ; 80 ಸಾವಿರ ರೂ. ಮೌಲ್ಯದ ಗಾಂಜಾ ವಶ

ಮಕ್ಕಳ ರಕ್ಷಣೆಗೆ ಮತ್ತು ಮಕ್ಕಳ ಸಮಗ್ರ ಬೆಳವಣಿಗೆಗೆ ಎಲ್ಲಾ ಇಲಾಖೆಗಳು ಪೂರಕ ವಾತಾವರಣ ನಿರ್ಮಾಣ ಮಾಡುವುದರ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು, ಮಕ್ಕಳ ರಕ್ಷಣೆಗಾಗಿ ರೂಪಿಸಿರುವ ಕಾಯ್ದೆಯ ಆಶಯ ಮತ್ತು ಉದ್ದೇಶಗಳನ್ನು ಯಶಸ್ವಿಯಾಗಿ ಜಾರಿಗೊಳಿಸಬೇಕು ಎಂದು ಡಾ. ತಿಪ್ಪೇಸ್ವಾಮಿ ಸೂಚಿಸಿದರು.

ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾತನಾಡಿ, ಮಕ್ಕಳು ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಯಾವುದೇ ಕಾರಣಕ್ಕೂ ಅಧಿಕಾರಿಗಳು ನಿರ್ಲಕ್ಷ್ಯತೆ ತೋರಬಾರದು. ಪ್ರತಿಯೊಂದು ಇಲಾಖೆಗೆ ಮಕ್ಕಳ ರಕ್ಷಣೆಗೆ ತನ್ನದೇ ಆದ ಜವಾಬ್ದಾರಿಗಳಿದ್ದು, ಅದನ್ನು ಸೂಕ್ತ ರೀತಿಯಲ್ಲಿ ಜಾರಿಗೊಳಿಸಬೇಕು. ಸರ್ಕಾರ ಮಕ್ಕಳಿಗೆ ರೂಪಿಸಿರುವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು. ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿ ಪ್ರಕರಣ ಕಂಡು ಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು. ಮಕ್ಕಳ ವಿಚಾರದಲ್ಲಿ ಅಧಿಕಾರಿಗಳು ಮಾನವೀಯತೆ ನೆಲೆಯಲ್ಲಿ ಕಾರ್ಯನಿರ್ವಹಿಸಿ, ಮಕ್ಕಳಿಗೆ ಅವರ ಬಾಲ್ಯವನ್ನು ಆನಂದಿಸಲು ಸಮಾಜದಲ್ಲಿ ಸೂಕ್ತ ಮತ್ತು ಸುರಕ್ಷಿತ ವಾತಾವರಣ ನಿರ್ಮಾಣ ಮಾಡಬೇಕು ಎಂದರು.

ಇದನ್ನೂ ಓದಿ: World Culture Festival: ಸಂಗೀತ, ನೃತ್ಯಗಳ ಮೂಲಕ ‘ವಸುದೈವ ಕುಟುಂಬಕಂ’ ಸಂದೇಶ ಸಾರಿದ ವಿಶ್ವ ಸಾಂಸ್ಕೃತಿಕ ಉತ್ಸವ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಎಚ್.ಎಚ್ ಕುಕನೂರ, ಡಿವೈಎಸ್ಪಿ ವೆಲೆಂಟೈನ್ ಡಿಸೋಜಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Exit mobile version