Site icon Vistara News

Uttara Kannada News: ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ ಮಾಡಲು ಡಿಸಿ ಆದೇಶ

Implement strict model code of conduct in district says DC Gangubai Manakar

ಕಾರವಾರ: ಲೋಕಸಭಾ ಚುನಾವಣೆ ಘೋಷಣೆಯಾದ ಕೂಡಲೇ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆಯನ್ನು (Model Code of Conduct) ಅನುಷ್ಠಾನಗೊಳಿಸುವಂತೆ, ಮಾದರಿ ನೀತಿ ಸಂಹಿತೆ ಜಾರಿಗೊಳಿಸಲು ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಸೂಚನೆ (Uttara Kannada News) ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಹೊರಡಿಸುವ ಮಾದರಿ ನೀತಿ ಸಂಹಿತೆಯನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಯಾವುದೇ ಸಂದರ್ಭದಲ್ಲೂ ಜಿಲ್ಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಅವಕಾಶ ನೀಡಬಾರದು. ನೀತಿ ಸಂಹಿತೆ ವ್ಯಾಪ್ತಿಗೆ ಒಳಪಡುವ ವಿಷಯಗಳ ಕುರಿತಂತೆ ರೂಪಿಸಿರುವ ಮಾರ್ಗಸೂಚಿಗಳನ್ನು ಸರಿಯಾಗಿ ಅರ್ಥೈಸಿಕೊಂಡು ಅದರಂತೆ ಕಾರ್ಯ ನಿರ್ವಹಿಸಬೇಕು ಎಂದರು.

ಇದನ್ನೂ ಓದಿ:‘Kohli’s Kitchen’: ಕೊಹ್ಲಿ ಹೆಸರಿನಲ್ಲಿ ಬೆಂಗಳೂರು ಅಭಿಮಾನಿಯ ರೆಸ್ಟೋರೆಂಟ್; ಇಲ್ಲಿ ಏನೆಲ್ಲ ಸಿಗುತ್ತೆ?

ನೀತಿ ಸಂಹಿತೆ ಜಾರಿಗೊಳಿಸುವ ಅವಧಿಯಲ್ಲಿ ರಾಜಕಿಯ ಮುಖಂಡರುಗಳು, ರಾಜಕೀಯ ಪಕ್ಷಗಳು , ಸಚಿವರುಗಳಿಗೆ ನಿಗಧಿಪಡಿಸಿರುವ ಕಾರ್ಯ ವ್ಯಾಪ್ತಿಯನ್ನು ಅಧಿಕಾರಿಗಳು ತಿಳಿದು ಅದರಂತೆ ಕಾರ್ಯನಿರ್ವಹಿಸಬೇಕು. ಯಾವುದೇ ರಾಜಕೀಯ ವ್ಯಕ್ತಿ ಅಥವಾ ಪಕ್ಷಗಳಿಗೆ ಸರ್ಕಾರಿ ನೌಕರರು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಬೆಂಬಲ ನೀಡುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಲಿದ್ದು ಈ ಕುರಿತಂತೆ ಸಂಬಂಧಪಟ್ಟ ನೌಕರರ ವಿರುದ್ದ ಪ್ರಜಾ ಪ್ರತಿನಿಧಿ ಕಾಯ್ದೆಯನ್ವಯ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಯೊಬ್ಬ ಅಧಿಕಾರಿ/ಸಿಬ್ಬಂದಿಗಳೂ ಸಹ ತಮಗೆ ವಹಿಸುವ ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸಬೇಕು. ಯಾವುದೇ ಸಬೂಬುಗಳನ್ನು ಹೇಳಿ ಚುನಾವಣಾ ಕರ್ತವ್ಯದಿಂದ ತಪ್ಪಿಸಿಕೊಳ್ಳುವಂತಿಲ್ಲ. ತಮಗೆ ವಹಿಸಲಾಗುವ ಚುನಾವಣಾ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಬೇಕು. ಸರ್ಕಾರಿ ನೌಕರರು ಯಾವುದೇ ರಾಜಕೀಯ ವ್ಯಕ್ತಿ ಅಥವಾ ಪಕ್ಷದ ಪರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕುವುದು, ಬೆಂಬಲಿಸುವುದು, ಕಮೆಂಟ್ ಮಾಡುವುದು, ಮತ್ತೊಬ್ಬರಿಗೆ ಕಳುಹಿಸುವುದು ನೀತಿ ಸಂಹಿತೆಯ ಉಲ್ಲಂಘನೆ ವ್ಯಾಪ್ತಿಗೆ ಬರಲಿದೆ ಎಂದರು.

ಚುನಾವಣೆ ಘೋಷಣೆಯಾದ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಜಿಲ್ಲೆಯಲ್ಲಿ ಮುಕ್ತ, ನ್ಯಾಯ ಸಮ್ಮತ,ಪಾರದರ್ಶಕ ಹಾಗೂ ಶಾಂತಿಯುತ ಚುನಾವಣೆ ನಡೆಯಲು ಮಾದರಿ ನೀತಿ ಸಂಹಿತೆಯ ಅನುಷ್ಠಾನ ಅತ್ಯಂತ ಅಗತ್ಯವಾಗಿದ್ದು, ಈ ಕಾರ್ಯಕ್ಕೆ ನಿಯೋಜಿಸುವ ಎಲ್ಲಾ ಅಧಿಕಾರಿಗಳು ಅತ್ಯಂತ ಹೆಚ್ಚಿನ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಇದನ್ನೂ ಓದಿ: Deepika Padukone: BAFTA ಪ್ರಶಸ್ತಿ ಸಮಾರಂಭ ನಿರೂಪಿಸುವವರ ತಂಡದಲ್ಲಿರುವ ಏಕೈಕ ಭಾರತೀಯ ನಟಿ ಈಕೆ!

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕಾಂದೂ, ಉಪ ವಿಭಾಗಾಧಿಕಾರಿ ಕನಿಷ್ಕ, ಎಎಸ್ಪಿ ಜಯಕುಮಾರ್ ಹಾಗೂ ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕೆ ನಿಯೋಜಿಸಿರುವ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version