Site icon Vistara News

Uttara Kannada News: ಉತ್ತರ ಕನ್ನಡ ಸ್ಥಳೀಯ ಸಂಸ್ಥೆಗಳ ಕಾಮಗಾರಿ ಚುರುಕುಗೊಳಿಸಲು ಡಿಸಿ ಸೂಚನೆ

Uttara Kannada News Meeting by DC Gangubai Manakar in Karwar

ಕಾರವಾರ: ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ 2024-25ನೇ ಸಾಲಿನ ಕ್ರಿಯಾ ಯೋಜನೆಯಲ್ಲಿನ ಎಲ್ಲಾ ಕಾಮಗಾರಿಗಳಿಗೆ ಅನುಮೋದನೆ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌, ಈ ಎಲ್ಲಾ ಕಾಮಗಾರಿಗಳನ್ನು ಶೀಘ್ರದಲ್ಲಿ ಆರಂಭಿಸುವಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ (Uttara Kannada News) ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಎಲ್ಲಾ ಕಾಮಗಾರಿಗಳಿಗೆ ಅವರು ಅನುಮೋದನೆ ನೀಡಿದರು.

13ನೇ ಹಣಕಾಸು ಯೋಜನೆಯಡಿ ಜಿಲ್ಲೆಯ ಎಲ್ಲಾ 13 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 16.84 ಕೋಟಿ ರೂ ಮೊತ್ತದ ಕಾಮಗಾರಿಗಳ ಕ್ರಿಯಾ ಯೋಜನೆ, ಎಸ್.ಎಫ್.ಸಿ ಯೋಜನೆಯ 7.81 ಕೋಟಿ ರೂ. ಮೊತ್ತದ ಕಾಮಗಾರಿಗಳ ಕ್ರಿಯಾ ಯೋಜನೆ ಮತ್ತು ಎಂ.ಆರ್.ಎಫ್ ಘಟಕಗಳ ಸ್ಥಾಪನೆಗೆ ಮತ್ತು 7 ಇಂದಿರಾ ಕ್ಯಾಂಟೀನ್‌ಗಳಲ್ಲಿ ಅಗತ್ಯವಿರುವ ದುರಸ್ತಿ ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದ ಜಿಲ್ಲಾಧಿಕಾರಿಗಳು, ಈ ಎಲ್ಲಾ ಕಾಮಗಾರಿಗಳಿಗೆ ಕೂಡಲೇ ಟೆಂಡರ್ ಕರೆದು, ನಿಗದಿತ ಅವಧಿಯೊಳಗೆ ವರ್ಕ್ ಆರ್ಡರ್ ನೀಡಿ, ಮಳೆಗಾಲದ ಮುಗಿದ ಕೂಡಲೇ ಈ ಕಾಮಗಾರಿಗಳನ್ನು ಆರಂಭಿಸಲು, ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು.

ಇದನ್ನೂ ಓದಿ: Eshwar Khandre: ಚಾರಣಪಥಗಳ ಆನ್‌ಲೈನ್ ಟಿಕೆಟ್‌ಗೆ ಶೀಘ್ರ ಚಾಲನೆ; ಸಚಿವ ಈಶ್ವರ ಖಂಡ್ರೆ

ಕ್ರಿಯಾ ಯೋಜನೆಯಲ್ಲಿನ ಕಾಮಗಾರಿಗಳು ಮಾತ್ರವಲ್ಲದೇ ಸಾರ್ವಜನಿಕರಿಂದ ಬೇಡಿಕೆ ಬರುವ ಅಗತ್ಯ ತುರ್ತು ಕಾಮಗಾರಿಗಳನ್ನು ಆದ್ಯತೆಯಲ್ಲಿ ಕೈಗೊಳ್ಳಿ, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ನಿರಂತರವಾಗಿ ಪರಿಶೀಲಿಸಿ, ಚರಂಡಿಯಲ್ಲಿ ಕಸ ಸಂಗ್ರಹವಾಗಿ ಮಳೆಯಿಂದ ಯಾವುದೇ ಮನೆಗಳಿಗೆ ನೀರು ನುಗ್ಗದಂತೆ ಎಚ್ಚರಿಕೆ ವಹಿಸಿ, ಎಲ್ಲೆಡೆ ಸ್ವಚ್ಛತೆಗೆ ಪ್ರಥಮಾದ್ಯತೆ ನೀಡಬೇಕು ಎಂದರು.

ಎಲ್ಲಾ ನಗರಸ್ಥಳೀಯ ಸಂಸ್ಥೆಗಳು ತಮ್ಮ ಅನುದಾನದಲ್ಲಿ, ಪ.ಜಾತಿ, ಪ.ಪಂಗಡ ಮತ್ತು ವಿಕಲಚೇತನರಿಗೆ ಮೀಸಲಿಟ್ಟಿರುವ ಸಂಪೂರ್ಣ ಅನುದಾನವನ್ನು ಸದ್ಭಳಕೆ ಮಾಡಿಕೊಂಡು ಅವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವಂತೆ ತಿಳಿಸಿದರು.

ಜಿಲ್ಲೆಯ ಕಾರವಾರ, ಅಂಕೋಲಾ ಮತ್ತು ಭಟ್ಕಳದಲ್ಲಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಸರ್ಕಾರದ ಪರಿಷ್ಕೃತ ಮೆನು ಪ್ರಕಾರ ಸಾರ್ವಜನಿಕರಿಗೆ ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಭೋಜನ ವಿತರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತೆರಿಗೆ ವಸೂಲಾತಿಗೆ ಆದ್ಯತೆ ನೀಡುವಂತೆ ಹಾಗೂ ನಿಗದಿತ ಅವಧಿಯಲ್ಲಿ ಶೇ.100 ರಷ್ಟು ತೆರಿಗೆ ವಸೂಲಾತಿಯನ್ನು ಮಾಡುವಂತೆ ಕಟುನಿಟ್ಟಿನ ಸೂಚನೆ ನೀಡಿದ ಅವರು, ತೆರಿಗೆ ಸಂಗ್ರಹದಲ್ಲಿ ಗುರಿ ಸಾಧಿಸದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ: Bengaluru News: ಕಲಾ ರಸಿಕರ ಮನಸೂರೆಗೊಳಿಸಿದ ‘ಶ್ರದ್ಧಾ ನೃತ್ಯಾರ್ಣವʼ ವಿಶೇಷ ನೃತ್ಯೋತ್ಸವ

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗಿಸ್ ಹಾಗೂ ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳು ಆಯುಕ್ತರು, ಮುಖ್ಯಾಧಿಕಾರಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version