Site icon Vistara News

Uttara Kannada News: ಉ.ಕ ಜಿಲ್ಲೆಯನ್ನು ಮಕ್ಕಳಸ್ನೇಹಿ ಜಿಲ್ಲೆಯನ್ನಾಗಿಸಲು ಕೈ ಜೋಡಿಸಿ: ಡಾ. ತಿಪ್ಪೇಸ್ವಾಮಿ

One day training workshop at Karwar

ಕಾರವಾರ: ಉತ್ತರ ಕನ್ನಡ ಜಿಲ್ಲೆಯನ್ನು (Uttara Kannada News) ಮಕ್ಕಳ ಸ್ನೇಹಿ ಜಿಲ್ಲೆಯನ್ನಾಗಿ ರೂಪಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಹೇಳಿದರು.

ನಗರಸಭೆಯ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಜೆ.ಜೆ. ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಆರ್.ಟಿ.ಇ ಕಾಯ್ದೆ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಸರ್ವಾಂಗೀಣ ಬೆಳವಣಿಗೆ, ರಕ್ಷಣೆ ಹಾಗೂ ಅವರ ಹಕ್ಕುಗಳ ರಕ್ಷಣೆ ನಮ್ಮ ಆದ್ಯ ಕರ್ತವ್ಯ. ಆ ನಿಟ್ಟಿನಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಇತ್ತೀಚಿಗೆ ಹೆಣ್ಣು ಭ್ರೂಣ ಹತ್ಯೆ ಹೆಚ್ಚಾಗಿ ನಡೆಯುತ್ತಿದೆ. ಮಕ್ಕಳ ಮೇಲಿನ ದೌರ್ಜನ್ಯ ಭ್ರೂಣದಲ್ಲಿರುವಾಗಲೇ ನಡೆಯುತ್ತಿರುವುದು ವಿಷಾದನೀಯ ಎಂದರು.

ಇದನ್ನೂ ಓದಿ: Dharmendra Pradhan: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಎರಡು ಬಾರಿ 10, 12ನೇ ತರಗತಿ ಬೋರ್ಡ್‌ ಪರೀಕ್ಷೆ ಬರೆಯಲು ಅವಕಾಶ

ಮಕ್ಕಳ ರಕ್ಷಣಾ ನೀತಿ-2016 ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲಾ ಹಂತದ ಅಧಿಕಾರಿಗಳು ಪ್ರಯತ್ನಿಸಬೇಕು. ಸರ್ಕಾರಿ, ಖಾಸಗಿ ಸೇರಿದಂತೆ ವಿವಿಧ ಇಲಾಖೆಗಳ ಅಡಿ ಕಾರ್ಯನಿರ್ವಹಿಸುವ ಶಾಲೆಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸುರಕ್ಷತಾ ಸಮಿತಿ ರಚನೆ ಮಾಡಬೇಕು ಎಂದರು.

ಮಕ್ಕಳ ರಕ್ಷಣಾ ನೀತಿ ಅನುಷ್ಠಾನದ ಕಾರ್ಯಸೂಚಿಗಳನ್ನು ಈಗಾಗಲೇ ಹೊರಡಿಸಲಾಗಿದೆ. ಪ್ರತಿ ಶಾಲೆಗಳಲ್ಲೂ ಮಕ್ಕಳ ಸುರಕ್ಷತಾ ಸಮಿತಿ, ಮಕ್ಕಳ ಸಹಾಯ ಗುಂಪು ರಚನೆ ಮಾಡಬೇಕು. ಮಕ್ಕಳ ದೂರುಗಳನ್ನು ಸಲ್ಲಿಸಲು ದೂರು ಪಟ್ಟಿಗೆಗಳನ್ನು ಕಡ್ಡಾಯವಾಗಿ ಶಾಲೆಗಳಲ್ಲಿ ಇಡಬೇಕು. ಎಲ್ಲಾ ಖಾಸಗಿ ಶಾಲೆಗಳ ಪ್ರಾರಂಭಕ್ಕೂ ಮುನ್ನಾ ಆಡಳಿತ ಮಂಡಳಿಗಳು ಮಕ್ಕಳ ರಕ್ಷಣಾ ಬದ್ದತೆ ಪತ್ರಕ್ಕೆ ಸಹಿ ಹಾಕುವುದು ಕಡ್ಡಾಯವಾಗಿದೆ. ಶಾಲೆಗಳಲ್ಲಿ ಮಕ್ಕಳಿಗೆ ಪೋಕ್ಸೋ ಕಾಯ್ದೆಯ ಕುರಿತು ಜಾಗೃತಿ ಕಾರ್ಯಗಾರ ಆಯೋಜಿಸಬೇಕು ಎಂದರು.

ಪಂಚಾಯತ್ ರಾಜ್ಯ ವ್ಯವಸ್ಥೆಯಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಕಾನೂನು ಸಮಿತಿ ರಚನೆ, ಶಿಕ್ಷಣ ಕಾರ್ಯಪಡೆ ಇರಬೇಕು ಹಾಗೂ ಇದರ ಜತೆಗೆ ಪಂಚಾಯಿತಿ ವ್ಯಾಪ್ತಿಯ ಮಕ್ಕಳ ಅಂಕಿ ಅಂಶಗಳು ನಿರ್ವಹಿಸುವುದು ಅವಶ್ಯ. ಜಿಲ್ಲೆಯಲ್ಲಿ ಭೇಟಿ ನೀಡಿರುವ ಶಾಲೆ, ವಸತಿ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ಅಳವಡಿಸಿಕೊಂಡು ಅದರಡಿಯಲ್ಲಿರುವ ಸಮಿತಿಗಳನ್ನು ರಚಿಸಿ ಕಡತ ನಿರ್ವಹಣೆ ಮಾಡದಿರುವುದು ಕಂಡುಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಮಕ್ಕಳ ರಕ್ಷಣಾ ನೀತಿಯನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕು ಎಂದರು.

ಇದನ್ನೂ ಓದಿ: Salary Hike: 300 ಶೇಕಡಾ ಸಂಬಳ ಹೆಚ್ಚಳ! ಯಾವ ಕಂಪನಿಯಲ್ಲಿ ನೋಡಿ

ತಮ್ಮ ಸುತ್ತಮುತ್ತಲು ಮಕ್ಕಳ ಮೇಲೆ ಆಗುವ ದೌರ್ಜನ್ಯಗಳು ಕಂಡುಬಂದರೆ ಕೂಡಲೇ ಮಕ್ಕಳ ಸಹಾಯವಾಣಿ 1098ಗೆ ಸಂಪರ್ಕಿಸಿ ಮಾಹಿತಿ ನೀಡಿದ್ದಲ್ಲಿ ಆ ಮಗುವಿನ ರಕ್ಷಣೆಗೆ ಕೈ ಕೈ ಜೋಡಿಸಿದಂತಾಗುತ್ತದೆ. ಆ ನಿಟ್ಟಿನಲ್ಲಿ ಮಕ್ಕಳ ರಕ್ಷಣೆಗೆ ಪ್ರತಿಯೊಬ್ಬರು ತಮ್ಮ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ಡಿ ರಾಯ್ಕರ್ ಮಾತನಾಡಿ‌, ಕಾನೂನು ಸೇವಾ ಪ್ರಾಧಿಕಾರಕ್ಕೆ ಎಲ್ಲಾ ಇಲಾಖೆಗಳ ಮೇಲ್ವಿಚಾರಣೆ ಮಾಡುವ ಅಧಿಕಾರವಿದ್ದು, ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ಕಾರ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಕೆಲವೊಮ್ಮೆ ಅನಾಹುತಗಳು ಆಗುವ ಮುಂಚೆಯೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಲ್ಲಿ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಲು ಸಾಧ್ಯ ಎಂದರು.

ಮಕ್ಕಳ ಬಗ್ಗೆ ಎಚ್ಚರ ವಹಿಸುವುದು ಪಾಲಕರ ಮತ್ತು ಶಿಕ್ಷಣ ಸಂಸ್ಥೆಗಳ ಕರ್ತವ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ದುಶ್ಚಟಗಳಿಗೆ ಒಳಗಾಗಿ ತಮ್ಮ ಭವಿಷ್ಯವನ್ನು ಅಂತ್ಯಗೊಳಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪಾಲಕರು ಮತ್ತು ಶಿಕ್ಷಕರು ಆ ಮಕ್ಕಳಲ್ಲಿ ಆಗುತ್ತಿರುವ ಬದಲಾವಣೆಯನ್ನು ಗಮನಿಸಿ, ಅವರನ್ನು ಅಂತಹ ದುಶ್ಚಟಗಳಿಂದ ದೂರವಿರುವಂತೆ ನೋಡಿಕೊಳ್ಳಬೇಕು ಎಂದರು.

ವಸತಿ ಶಾಲೆಗಳಲ್ಲಿ ವಾಸಿಸುವ ಮಕ್ಕಳಿಗೆ ಮೂಲಸೌಕರ್ಯ ಒದಗಿಸುವದು ಹಾಗೂ ಅವರಿಗೆ ಗುಣಮಟ್ಟದ ಆಹಾರ ನೀಡಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಮಕ್ಕಳನ್ನು ತಮ್ಮ ಮಕ್ಕಳಂತೆ ಕಾಳಜಿಯಿಂದ ನೋಡಿಕೊಳ್ಳುವುದು ವಸತಿ ಶಾಲೆಗಳ ಮೇಲ್ವಿಚಾರಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಕೊಪ್ಪಳದ ಮಕ್ಕಳ ರಕ್ಷಣಾ ಕಾರ್ಯಕ್ರಮ ಸಂಯೋಜಕ ಹರೀಶ ಜೋಗಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು, ಜೆ.ಜೆ. ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಆರ್.ಟಿ.ಇ ಕಾಯ್ದೆ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ: SSLC And PUC Exam : ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗೆ ಡೇಟ್‌ ಫಿಕ್ಸ್‌; ಏನಿದೆ ಈ ಬಾರಿ ಷರತ್ತುಗಳು

ಈ ಸಂದರ್ಭದಲ್ಲಿ ಕುಮಟಾ ಜಿಲ್ಲಾ ತರಬೇತಿ ಶಿಕ್ಷಣ ಸಂಸ್ಥೆಯ ಉಪನಿರ್ದೇಶಕರು, ಅಭಿವೃದ್ಧಿ ಹಾಗೂ ಪ್ರಾಂಶುಪಾಲ ಎನ್.ಜಿ. ನಾಯ್ಕ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅನ್ನಪೂರ್ಣ ವಸ್ತ್ರದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ವಿರೂಪಾಕ್ಷಗೌಡ ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕಿ ಡಾ.ಲಕ್ಷ್ಮಿದೇವಿ ಎಸ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಳ್, ಪೌರಾಯುಕ್ತ ಚಂದ್ರಮೌಳಿ ಮತ್ತಿತರರು ಉಪಸ್ಥಿತರಿದ್ದರು.

Exit mobile version