Site icon Vistara News

Uttara Kannada News: ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲೆಯಲ್ಲಿ 14,401 ವಿದ್ಯಾರ್ಥಿಗಳು: ಡಿಸಿ ಗಂಗೂಬಾಯಿ ಮಾನಕರ್

Second PUC Exam Preparatory Meeting at Karwar

ಕಾರವಾರ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ (Second PUC) ಪರೀಕ್ಷೆಗಳು ಮಾರ್ಚ್ 1ರಿಂದ 22ರವರೆಗೆ ನಡೆಯಲಿದ್ದು, ಈ ಬಾರಿ ಜಿಲ್ಲೆಯಲ್ಲಿ ಒಟ್ಟು 14,401 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ (Uttara Kannada News) 31 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಎಲ್ಲಾ ಪರೀಕ್ಷೆಗಳು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಯಲು ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಡಿಸಿ ಗಂಗೂಬಾಯಿ ಮಾನಕರ್‌ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ರೆಗ್ಯುಲರ್, ಖಾಸಗಿ ಮತ್ತು ಪುನಾರಾವರ್ತಿತ ಸೇರಿದಂತೆ 14,401 ವಿದ್ಯಾರ್ಥಿಗಳು ಹಾಜರಾಗಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ, ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸುವಂತೆ ಸೂಚನೆ ನೀಡಿದರು.

ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬ್ಬಂದಿ ಸ್ಮಾರ್ಟ್‌ವಾಚ್, ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾಹಿತಿ ನೀಡುವಂತೆ ಮತ್ತು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮುನ್ನವೇ ಈ ಬಗ್ಗೆ ಸಮಗ್ರವಾಗಿ ಪರಿಶೀಲಿಸುವಂತೆ ಸೂಚನೆ ನೀಡಿದರು.

ಇದನ್ನೂ ಓದಿ: Elephant Attack: ʼಕರ್ನಾಟಕದ ಪರಿಹಾರ ಬೇಕಿಲ್ಲ…ʼ ಕಾಡಾನೆ ಬಲಿ ಪಡೆದ ವ್ಯಕ್ತಿಯ ಕುಟುಂಬಕ್ಕೆ 10 ಲಕ್ಷ ರೂ. ಕೊಟ್ಟ ಕೇರಳ ಸರ್ಕಾರ

ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳಿಗೆ ಯಾವುದೇ ಮೂಲಭೂತ ಸಮಸ್ಯೆಗಳಾಗದಂತೆ ಸೂಕ್ತ ಬೆಳಕಿನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಗ್ರಾಮೀಣ ಪ್ರದೇಶದಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಆಗಮಿಸಲು ಬಸ್‌ಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗದ ಬಸ್ ಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ, ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಮತ್ತು ವಾಪಸ್ ಮರಳಲು ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದು, ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣ ಮಾಡಬಹುದಾಗಿದ್ದು ಜಿಲ್ಲೆಯ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಗೌಪ್ಯತೆಯ ದೃಷ್ಠಿಯಿಂದ ಪರೀಕ್ಷಾ ದಿನದಂದು ಮಾಧ್ಯಮದವರಿಗೆ ಪರೀಕ್ಷಾ ಕೊಠಡಿಯೊಳಗೆ ಚಿತ್ರೀಕರಣಕ್ಕೆ ಅವಕಾಶವಿರುವುದಿಲ್ಲ. ಆದರೆ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಆಗಮಿಸುವ ಮತ್ತು ಪರೀಕ್ಷಾ ಕೇಂದ್ರದಿಂದ ತೆರಳುವುದನ್ನು ಚಿತ್ರೀಕರಿಸಲು ಅವಕಾಶವಿದೆ ಎಂದು ತಿಳಿಸಿದರು.

ಇದನ್ನೂ ಓದಿ: Anant Ambani wedding: 2500 ಐಟಂ, 20 ಲೇಡಿ ಶೆಫ್‌ಗಳು… ಇನ್ನೂ ಇದೆ ಅನಂತ್‌ ಅಂಬಾನಿ- ರಾಧಿಕಾ ಮದುವೆ ವಿಶೇಷ!

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ಪ್ರಥಮ ಚಿಕಿತ್ಸಾ ಕಿಟ್‌ನೊಂದಿಗೆ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಸೂಚಿಸಿದರು.

ಪ್ರಶ್ನೆಪತ್ರಿಕೆ ಬಂಡಲ್‌ಗಳನ್ನು ಖಜಾನೆಯಿಂದ ಪಡೆಯುವಾಗ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅವುಗಳನ್ನು ತೆರೆಯುವಾಗ ವೀಡಿಯೋ ಚಿತ್ರೀಕರಣ ಮಾಡುವಂತೆ ಹಾಗೂ ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ಸಾಗಾಟ ವಾಹನಗಳಿಗೆ ಜಿ.ಪಿ.ಎಸ್ ಅಳವಡಿಸುವಂತೆ ತಿಳಿಸಿದ ಅವರು, ಪರೀಕ್ಷಾ ಕೇಂದ್ರಗಳಿಗೆ ಮತ್ತು ಭದ್ರತಾ ಕೊಠಡಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ಪಡೆಯುವಂತೆ ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆಪತ್ರಿಕೆಗಳು ತಲುಪುವುಂತೆ ಅಗತ್ಯವಿರುವ ವಾಹನಗಳ ವ್ಯವಸ್ಥೆ, ಮಾರ್ಗಾಧಿಕಾರಿಗಳನ್ನು ನೇಮಿಸುವಂತೆ ತಿಳಿಸಿದರು.

ಪರೀಕ್ಷೆಯ ಅವಧಿಯಲ್ಲಿ ಪ್ರಶ್ನೆಪತ್ರಿಕೆಗಳ ಕುರಿತಂತೆ, ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಗೊಂದಲಕ್ಕೀಡು ಮಾಡುವಂತಹ ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿಗಳು, ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ಪ್ರದೇಶವನ್ನು ಸೆಕ್ಷನ್ 144 ರಂತೆ ನಿಷೇಧಾಜ್ಞೆ ವಿಧಿಸುವುದರ ಜತೆಗೆ ಸುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರಗಳು ನಡೆಯದಂತೆ, ಗೊಂದಲಗಳಿಲ್ಲದೇ ಸುಗಮ ಮತ್ತು ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ: Shocking News : ವಿಮೆ ದುಡ್ಡಿನ ಆಸೆಗೆ ತನ್ನ ಕಾಲನ್ನೇ ಕತ್ತರಿಸಿಕೊಂಡ; ಈಗ ಕಾಸೂ ಸಿಗಲಿಲ್ಲ, ಕಾಲೂ ಇಲ್ಲ!

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಉಪ ವಿಭಾಗಾಧಿಕಾರಿ ಕನಿಷ್ಕ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ, ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸುವ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version