ಕಾರವಾರ: ಜಿಲ್ಲಾ ಪಂಚಾಯಿತಿ (Zilla Panchayat) ಸೇರಿದಂತೆ ಜಿಲ್ಲೆಯ ಎಲ್ಲ ಇಲಾಖೆಗಳಲ್ಲಿ (Departments) ಅತ್ಯಂತ ತುರ್ತು ಮತ್ತು ಅನಿವಾರ್ಯತೆ ಇದ್ದಲ್ಲಿ ಮಾತ್ರ ಹೊಸ ಕಟ್ಟಡ ಕಾಮಗಾರಿಗಳನ್ನು (New Building Work) ಕೈಗೊಂಡು ಸರ್ಕಾರದ ಅನುದಾನ ಸದುಪಯೋಗ ಮಾಡಿ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಉತ್ತರ ಕನ್ನಡ ಜಿ.ಪಂ.ನ ಆಡಳಿತಾಧಿಕಾರಿ ರಿತೀಶ್ ಕುಮಾರ್ ಸಿಂಗ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನ ಜಿ.ಪಂ. ಕ್ರಿಯಾ ಯೋಜನೆ ಸಿದ್ಧಪಡಿಸುವಾಗ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡದೇ, ಪ್ರಸ್ತುತ ಇರುವ ಕಟ್ಟಡಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ ಅದೇ ಕಟ್ಟಡದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಿ ಎಂದರು.
ಶಾಲೆ, ಅಂಗನವಾಡಿ ಮತ್ತು ಗ್ರಂಥಾಲಯಗಳಿಗೆ ಅಗತ್ಯವಿರುವ ಕಲಿಕೋಪಕರಣಗಳು, ಪುಸ್ತಕಗಳನ್ನು ಖರೀದಿಸಿ. ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯಕ್ಕೆ ಸ್ವಂತ ಕಟ್ಟಡ ಇಲ್ಲದೇ ಇದ್ದಲ್ಲಿ ಸಮೀಪದ ಶಾಲೆಯ ಕಟ್ಟಡಕ್ಕೆ ಗ್ರಂಥಾಲಯವನ್ನು ಸ್ಥಳಾಂತರಿಸುವಂತೆ ತಿಳಿಸಿದರು.
ಇದನ್ನೂ ಓದಿ: Benefits Of Ajwain: ಅಜವಾನವೆಂಬ ಘಾಟುಮದ್ದಿನ ಬಗ್ಗೆ ನಿಮಗೆ ಗೊತ್ತಿದೆಯೆ?
ಜಿಲ್ಲೆಯ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆಯ ಸೇರಿದಂತೆ ಎಲ್ಲ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚನೆ ನೀಡಿದರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ಜಿಲ್ಲೆಯ ಎಲ್ಲ ಅರ್ಹ ಫಲಾನುಭವಿಗಳಿಗೆ ದೊರೆಯಬೇಕು, ಯಾವುದೇ ಅರ್ಹ ಫಲಾನುಭವಿ ಸೌಲಭ್ಯದಿಂದ ವಂಚಿತರಾಗಬಾರದು. ಈ ಬಗ್ಗೆ ಅಧಿಕಾರಿಗಳು ಹೆಚ್ಚಿನ ಗಮನಹರಿಸುವಂತೆ ಸೂಚಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಎಲ್ಲ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆ ಆಗುವಂತೆ ನೋಡಿಕೊಳ್ಳಬೇಕು, ಬ್ಯಾಂಕ್ ಖಾತೆ ಜೋಡಣೆಯಲ್ಲಿ ಸಮಸ್ಯೆಗಳಿದ್ದಲ್ಲಿ ಲೀಡ್ ಬ್ಯಾಂಕ್ ಅಧಿಕಾರಿಗಳ ಜತೆಗೆ ಸಮನ್ವಯದೊಂದಿಗೆ ಸಮಸ್ಯೆ ಬಗೆಹರಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಗೃಹಜ್ಯೋತಿ ಯೋಜನೆಯಡಿ ಕೂಡಾ ಎಲ್ಲ ಅರ್ಹರಿಗೆ ಸೌಲಭ್ಯ ದೊರಕಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆಯಾದ, ಶಿರಸಿ ತಾಲೂಕಿನ ದೊಡ್ನಳ್ಳಿ, ಹುಲೇಕಲ್, ಅಂಡಗಿ, ಯಲ್ಲಾಪುರ ತಾಲೂಕಿನ ಉಮ್ಮಚಗಿ ಹೊನ್ನಾವರ ತಾಲೂಕಿನ ಕಾಸರಕೋಡು, ಹೆರಾಂಗಡಿ, ಕಾರವಾರ ತಾಲೂಕಿನ ಕಡವಾಡ, ಸುಪಾ ವಿಭಾಗದ ಜೋಯಿಡಾ, ಹಳಿಯಾಳದ ಸಾಂಬ್ರಾಣಿ ಮತ್ತು ಆರ್ಲವಾಡ ಗ್ರಾಮ ಪಂಚಾಯಿತಿಗಳಿಗೆ ಹಾಗೂ ಜಿಲ್ಲಾ ಮಟ್ಟದ ಮಾಸಿಕ ಉತ್ತಮ ಪಿಡಿಓ ಪ್ರಶಸ್ತಿ ಪಡೆದ ಹಿತ್ಲಳ್ಳಿ ಗ್ರಾ.ಪಂ. ಪಿಡಿಓ ಜಿ.ಜಿ. ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಇದನ್ನೂ ಓದಿ: Namma Metro : ಮೆಟ್ರೋಗೆ ಚೀನಾದಿಂದ ಬರಲಿದೆ 12 ಬೋಗಿ; 2024ಕ್ಕೆ ಚಾಲಕ ರಹಿತ ಓಡಾಟ
ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ ಕಾಂದೂ, ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.