Site icon Vistara News

Uttara Kannada News: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 7 ರಂದು ಮತದಾನ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ: ಡಿಸಿ ಗಂಗೂಬಾಯಿ ಮಾನಕರ್

Voting in Uttara Kannada Lok Sabha constituency on May 7

ಕಾರವಾರ: ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ (Uttara Kannada News) ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ತಕ್ಷಣದಿಂದಲೇ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆಯನ್ನು (Model Code of Conduct) ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಪ್ರಯುಕ್ತ ಏಪ್ರಿಲ್ 12ರಂದು ನೋಟಿಫಿಕೇಶನ್ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಏ.19 ಕೊನೆಯ ದಿನ, ಏ.20 ನಾಮಪತ್ರ ಪರಿಶೀಲನೆ, ಏ.22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 7 ರಂದು ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ ಎಂದರು.

ಉತ್ತರಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಿತ್ತೂರು, ಖಾನಾಪುರ, ಹಳಿಯಾಳ, ಕಾರವಾರ, ಕುಮಟಾ, ಭಟ್ಕಳ, ಶಿರಸಿ ಹಾಗೂ ಯಲ್ಲಾಪುರ ವಿಧಾನಸಭಾ ಕ್ಷೇತ್ರ ಸೇರಿ 8 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಒಟ್ಟು 16,22,857 ಮತದಾರರಿದ್ದು, 8,15,599 ಪುರುಷರು, 8,07,242 ಮಹಿಳೆಯರು, 16 ತೃತೀಯಲಿಂಗಿ ಮತದಾರರು ಇದ್ದು, ಒಟ್ಟು 1977 ಮತಗಟ್ಟೆಗಳನ್ನು ತೆರೆಯಲಾಗುವುದು ಎಂದರು.

ಇದನ್ನೂ ಓದಿ: Money Guide: ಆನ್‌ಲೈನ್‌ ಸಾಲ ಎಂಬ ಚಕ್ರವ್ಯೂಹಕ್ಕೆ ಸಿಲುಕದಿರಲು ಹೀಗೆ ಮಾಡಿ…

ಜಿಲ್ಲೆಯಲ್ಲಿ ಚುನವಣಾ ಅಕ್ರಮಗಳನ್ನು ತಡೆಗಟ್ಟಲು ಒಟ್ಟು 25 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ಇಂದಿನಿಂದಲೇ ಎಲ್ಲಾ ಚೆಕ್‌ಪೋಸ್ಟ್ ಗಳು ಕಾರ್ಯಾರಂಭ ಮಾಡಿವೆ. 24*7 ಈ ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಈ ಚೆಕ್‌ಪೋಸ್ಟ್‌ಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗುವುದು ಎಂದರು.

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ನಿಟ್ಟಿನಲ್ಲಿ ಫ್ಲೈಯಿಂಗ್ ಸ್ಕ್ವಾಡ್, ವೀಡಿಯೊ ಸರ್ವೇಲೆನ್ಸ್ ತಂಡ, ವೀಡಿಯೋ ವೀಕ್ಷಣಾ ತಂಡ, ಅಂಕಿ ಅಂಶ ಪರಿಶೀಲನಾ ತಂಡ, ಸೆಕ್ಟರ್ ಅಧಿಕಾರಿಗಳು, ಲೆಕ್ಕಪತ್ರ ತಂಡ ಸೇರಿದಂತೆ ವಿವಿಧ ತಂಡಗಳಿಗೆ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಅವರಿಗೆ ಸೂಕ್ತ ತರಬೇತಿಯನ್ನು ನೀಡಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಸಿಂಗಲ್ ವಿಂಡೋ ಸಮಿತಿ, ಎಂಸಿಎಂಸಿ ಸಮಿತಿ, ಮೀಡಿಯಾ ಸ್ಕ್ರೂಟನಿ ತಂಡ, ಲೆಕ್ಕಪತ್ರ ಪರಿಶೀಲನಾ ತಂಡ, ದೂರು ನಿರ್ವಹಣಾ ತಂಡಗಳಿಗೆ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಇದನ್ನೂ ಓದಿ: Election Commission: ಜಮ್ಮು ಕಾಶ್ಮೀರದಲ್ಲಿ ಚುನಾವಣೆ ಯಾವಾಗ?

ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಸಾರ್ವಜನಿಕರು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸೇರಿದಂತೆ ಯಾವುದೇ ಅಗತ್ಯ ಮಾಹಿತಿಗಾಗಿ ಉಚಿತ ಸಹಾಯವಾಣಿ ಸಂಖ್ಯೆ 1950 ಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿನ 1435 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಒಟ್ಟು 2489 ಪೊಲೀಸ್ ಸಿಬ್ಬಂದಿ ಚುನಾವಣಾ ಕಾರ್ಯದಲ್ಲಿ ಕರ್ತವ್ಯ ನಿರ್ವಹಿಸಲಿದ್ದು, ಮತದಾನ ದಿನದಂದು ಕರ್ತವ್ಯ ನಿರ್ವಹಿಸಲು ಹೆಚ್ಚುವರಿಯಾಗಿ ಕೇಂದ್ರ ಭದ್ರತಾ ಸಿಬ್ಬಂದಿ ಮತ್ತು ರಾಜ್ಯ ಪೊಲೀಸ್ ಪಡೆಗಳ ಆಗಮನವಾಗಲಿದೆ ಎಂದು ಎಸ್ಪಿ ವಿಷ್ಣುವರ್ಧನ್ ಮಾಹಿತಿ ನೀಡಿದರು.

ಇದನ್ನೂ ಓದಿ: National Vaccination Day: ಮಾರಣಾಂತಿಕ ರೋಗಗಳಿಂದ ರಕ್ಷಣೆ ಪಡೆಯಲು ಲಸಿಕೆ ಬ್ರಹ್ಮಾಸ್ತ್ರ!

ಜಿಲ್ಲೆಯಲ್ಲಿ ಸ್ವೀಪ್ ಚಟುವಟಿಕೆಗಳ ಮೂಲಕ ಮತದಾನ ಪ್ರಮಾಣ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಿದ್ದು, ಈ ಹಿಂದೆ ಕಡಿಮೆ ಮತದಾನವಾಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು ಎಂದು ಜಿ.ಪಂ ಸಿಇಒ ಈಶ್ವರ ಕಾಂದೂ ತಿಳಿಸಿದರು. ಗೋಷ್ಠಿಯಲ್ಲಿ ಎಡಿಸಿ ಪ್ರಕಾಶ್ ರಜಪೂತ್ ಇದ್ದರು.

Exit mobile version