Site icon Vistara News

Uttara Kannada News: ಖರೀದಿಗೂ ಮುನ್ನ ವಸ್ತುಗಳನ್ನು ಪರಿಶೀಲಿಸಿ; ನ್ಯಾ. ಮಾಯಣ್ಣ

World Consumer Day celebration in karwar

ಕಾರವಾರ: ಗ್ರಾಹಕರು ವಸ್ತುವಿನ ಗುಣಮಟ್ಟ, ಅವಧಿ, ಉತ್ಪನ್ನದ ವಿವರಗಳನ್ನು ಜವಾಬ್ದಾರಿ ನಾಗರಿಕನಾಗಿ ಪರಿಶೀಲಿಸಿ ಖರೀದಿಸಿದಾಗ, ಮೋಸ ಹೋಗುವುದನ್ನು ತಡೆಗಟ್ಟಬಹುದು ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಯಣ್ಣ ಬಿ.ಎಲ್. (Uttara Kannada News) ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಕಾನೂನು ಮಾಪನ ಶಾಸ್ತ್ರ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆಹಾರ ಸುರಕ್ಷತೆ ಇಲಾಖೆ, ಕರ್ನಾಟಕ ಆಹಾರ ನಿಗಮ ಹಾಗೂ ಪ್ರೀಮಿಯರ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ನಂದನಗದ್ದಾ ಇವರ ಸಹಯೋಗದಲ್ಲಿ ನಂದನಗದ್ದಾದ ಪ್ರೀಮಿಯರ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ‘ಗ್ರಾಹಕರಿಗೊಸ್ಕರ ಗುಣಮಟ್ಟದ ಹಾಗೂ ಜವಾಬ್ದಾರಿಯುತ ಕೃತಕ ಬುದ್ದಿಮತ್ತೆ’ಎಂಬ ಘೋಷವಾಕ್ಯದೊಂದಿಗೆ ವಿಶ್ವ ಗ್ರಾಹಕರ ದಿನಾಚರಣೆ ಹಾಗೂ ಗ್ರಾಹಕರ ಚಟುವಟಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ಪಾದಕರು ಮತ್ತು ವ್ಯಾಪಾರಿಗಳು ಗ್ರಾಹಕರಿಗೆ ತಮ್ಮ ವಸ್ತುಗಳನ್ನು ಶೀಘ್ರವಾಗಿ ತಲುಪಿಸುವ ಅವಸರದಲ್ಲಿ ಗ್ರಾಹಕರ ಹಿತಾಸಕ್ತಿ ಕಾಪಾಡುವಲ್ಲಿ ವಿಫಲರಾಗಿ ಆಕರ್ಷಕ ಜಾಹೀರಾತುಗಳನ್ನು ನೀಡುವ ಮೂಲಕ ಕಡಿಮೆ ಗುಣಮಟ್ಟದ ವಸ್ತುಗಳನ್ನು ಮಾರಕಟ್ಟೆಗೆ ಬಿಡುಗಡೆ ಮಾಡುತ್ತಾರೆ. ಗ್ರಾಹಕರು ಈ ಜಾಹೀರಾತುಗಳಿಗೆ ಮಾರುಹೋಗದೇ ಎಚ್ಚರದಿಂದ ಇರಬೇಕು ಎಂದರು.

ಇದನ್ನೂ ಓದಿ: Shivamogga News: ಭಕ್ತಸಾಗರದ ಮಧ್ಯೆ ವಿಜೃಂಭಣೆಯಿಂದ ಜರುಗಿದ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿ ರಥೋತ್ಸವ

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಹೆಚ್ಚಾಗಿ ಇ-ಕಾಮರ್ಸ್ ಮತ್ತು ಆನ್‌ಲೈನ್ ಮೂಲಕ ವಸ್ತುಗಳ ಖರೀದಿ ಹಾಗೂ ಸೇವೆ ಪಡೆಯುತ್ತಿದ್ದಾರೆ. ಗ್ರಾಹಕರಿಗೆ ತಾವು ಕೊಂಡುಕೊಳ್ಳುವ ವಸ್ತುವಿನ ಗುಣಮಟ್ಟ, ತೂಕ ಪರಿಶೀಲನೆ ಮಾಡಿ ಆಯ್ಕೆ ಮಾಡಿಕೊಳ್ಳುವ ಹಕ್ಕು ಇರುತ್ತದೆ. ಈ ಸಂದರ್ಭದಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸುವುದು ಮುಖ್ಯವಾಗಿದೆ. ತಾವು ಖರೀದಿಸಿದ ವಸ್ತುವಿನ ಗುಣಮಟ್ಟದಲ್ಲಿ ದೋಷ ಕಂಡುಬಂದರೆ ಅಥವಾ ಸೇವೆಯಲ್ಲಿ ನ್ಯೂನತೆ ಕಂಡು ಬಂದರೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.

ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯೂ ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕರಾಗಿರುತ್ತಾರೆ. ಗ್ರಾಹಕರು ತಮ್ಮ ಖರೀದಿಗೂ ಮುನ್ನ ಎಚ್ಚರ ವಹಿಸುವುದು ಅವಶ್ಯ. ಪ್ರತಿಯೊಬ್ಬರು ಒಂದಲ್ಲ ಒಂದು ರೀತಿಯಲ್ಲಿ ಮೋಸ ಹೋಗುತ್ತಾರೆ. ಮೋಸ ಹೋಗುವವರು ಇರುವ ತನಕ ಮೋಸ ಮಾಡುವವರು ಇದ್ದೇ ಇರುತ್ತಾರೆ. ಹಾಗಾಗಿ ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಕಡ್ಡಾಯವಾಗಿ ರಶೀದಿಯನ್ನು ಪಡೆಯಬೇಕು ಎಂದರು.

ಇದನ್ನೂ ಓದಿ: Karnataka Weather : ಬೇಸಿಗೆ ಬಿಸಿ ನಡುವೆಯು ಇಲ್ಲೆಲ್ಲ ಮಳೆಯ ಸಿಂಚನ

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ಡಿ ರಾಯ್ಕರ್ ಮಾತನಾಡಿ, ಪ್ರತಿಯೊಬ್ಬ ಗ್ರಾಹಕರು ವಸ್ತುಗಳನ್ನು ಖರೀದಿಸುವ ಮುನ್ನ ಎಲ್ಲವನ್ನು ಪರಿಶೀಲಿಸಿ ಖರಿದೀಸುವುದು ಉತ್ತಮ ಎಂದು ತಿಳಿಸಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಡಾ. ಮಂಜುನಾಥ ಎಮ್ ಬಮ್ಮನಕಟ್ಟಿ ಮಾತನಾಡಿದರು.

ನ್ಯಾಯವಾದಿ ವಿ.ಎಂ.ಕುವಾಳೇಕರ್ ಮತ್ತು ಅಧ್ಯಾಪಕ ವಿಷ್ಣು ಕೆ ಪಟಗಾರ ಗ್ರಾಹಕರಿಗೊಸ್ಕರ ಗುಣಮಟ್ಟದ ಹಾಗೂ ಜವಾಬ್ದಾರಿಯುತ ಕೃತಕ ಬುದ್ದಿಮತ್ತೆ ಕುರಿತು ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ವಿಶ್ವ ಗ್ರಾಹಕರ ದಿನಾಚರಣೆಯ ಅಂಗವಾಗಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಸಂಬಂಧ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಇದನ್ನೂ ಓದಿ: Money Guide: ಪಾಸ್‌ಪೋರ್ಟ್‌ ನವೀಕರಣ ಈಗ ಸುಲಭ; ಆನ್‌ಲೈನ್‌ನಲ್ಲಿ ರಿನೀವಲ್‌ ಮಾಡುವ ವಿಧಾನ ಇಲ್ಲಿದೆ

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ನೈನಾ ಅಶೋಕ ಕಾಮಟೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮಂಜುನಾಥ ಡಿ ರೇವಣಕರ, ಜಿಲ್ಲಾ ಅಂಕಿತ ಅಧಿಕಾರಿ ಡಾ. ರಾಜಶೇಖರ ಪಾಳೆದವರ, ತೂಕ ಮತ್ತು ಅಳತೆ, ಕಾನೂನು ಮಾಪನಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ದೇವರಾಜ ಡಿ.ಎನ್, ಪ್ರೀಮಿಯರ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗೋವಿಂದಪ್ಪ ಆರ್. ಹಾಗೂ ಇತರರು ಇದ್ದರು.

Exit mobile version