ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ (Valmiki Corporation Scam) ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತು ಗೊಳಿಸಿದೆ. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದ ರಾಜ್ಯ ಸರ್ಕಾರ, ಇದೀಗ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ, ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿದೆ.
ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಚಂದ್ರಶೇಖರ್ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.
ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಶಿವಮೊಗ್ಗ ಮತ್ತು ಬೆಂಗಳೂರಿನ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.
ಇದನ್ನೂ ಓದಿ | ವಾಲ್ಮೀಕಿ ನಿಗಮ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರ ಮೇಲೆ ಎಫ್‌ಐಆರ್; ಡೆತ್ ನೋಟ್‌ನಲ್ಲಿರುವ ಸಚಿವ ಯಾರು?
ವಾಲ್ಮೀಕಿ ನಿಗಮದ ಪ್ರಭಾರ ಎಂಡಿಯಾಗಿ ಡಾ. ಕೆ. ಆರ್. ರಾಜ್ ಕುಮಾರ್ ನೇಮಕ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 88 ಕೋಟಿ ಹಣ ದುರುಪಯೋಗ ಪ್ರಕರಣದಲ್ಲಿ MD ಜೆ. ಜೆ. ಪದ್ಮನಾಭ ಅವರನ್ನು ರಾಜ್ಯ ಸರ್ಕಾರ ಅಮಾನತು ಗೊಳಿಸಿದ ಬೆನ್ನಲ್ಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ವ್ಯವಸ್ಥಾಪಕ ನಿರ್ದೇಶಕರ ಸ್ಥಾನಕ್ಕೆ ಪ್ರಭಾರರಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.