Site icon Vistara News

MLC Election: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ವಿಜಯನಗರ ಜಿಲ್ಲೆಯಲ್ಲಿ ಜೂ.1ರಿಂದ ನಿಷೇಧಾಜ್ಞೆ ಜಾರಿ

MLC Election North East Graduates Constituency Election Prohibitory order imposed in Vijayanagar district from June 1

ಹೊಸಪೇಟೆ: ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆಯನ್ನು (MLC Election) ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ಜೂನ್ 01ರ ಸಂಜೆ 06 ಗಂಟೆಯಿಂದ ಜೂ. 03ರ ಮಧ್ಯರಾತ್ರಿಯವರೆಗೆ ವಿಜಯನಗರ ಜಿಲ್ಲೆಯಾದ್ಯಂತ ಸಿಆರ್‌ಪಿಸಿ 1973ರ ಕಲಂ 144ರಡಿ ಹಾಗೂ ಇತರೆ ಜಾರಿಯಲ್ಲಿರುವ ಕಾನೂನು ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಕೆಲವು ಷರತ್ತುಗಳನ್ನು ವಿಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ವಿಜಯನಗರ ಜಿಲ್ಲೆಯ ವ್ಯಾಪ್ತಿಯಲ್ಲಿ 05ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ-ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಬೆಂಬಲಿಗರು ಸೇರಿ 05 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರತಕ್ಕದ್ದಲ್ಲ., ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯೊಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ.

ಇದನ್ನೂ ಓದಿ: Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜಿರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್‌ ಕೆಫೆಗಳನ್ನು ನಿರ್ಬಂಧಿಸಿದೆ. ಕಲ್ಲುಗಳನ್ನು, ಕಾರ ಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಹಾಗೂ ಯಾವುದೇ ದಾಹಕ ವಸ್ತುಗಳನ್ನು ಹಾಗೂ ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಮನುಷ್ಯ ರೂಪದ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಎಲ್ಲಾ ಮತಗಟ್ಟೆ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಸ್ಥಳ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ ಹಾಗೂ ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ಪಕ್ಷದ ಪ್ರಚಾರ, ಮತದ ಓಲೈಕೆ ಮಾಡುವಂತಿಲ್ಲ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಶವಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಆಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಮಾರ್ಗಸೂಚಿಗಳನ್ನು ನಿಯಮಗಳನ್ನು ಪಾಲಿಸುವುದು., ಚುನಾವಣಾ ಕಾರ್ಯದಲ್ಲಿ ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು ಸಿಬ್ಬಂದಿ ಹೊರತುಪಡಿಸಿ ಮತಗಟ್ಟೆ ಕೇಂದ್ರಗಳ ಸುತ್ತಲು 100 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡ್ಲೆಸ್ ಪೋನ್, ಅಥವಾ ಇನ್ನಿತರ ಎಲೆಕ್ಟ್ರಾನಿಕ್ಸ್ ಉಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126ರ ಷರತ್ತುಗಳನ್ನು ಪಾಲಿಸತಕ್ಕದ್ದು., ಮತಗಟ್ಟೆಗಳ ಸುತ್ತಲೂ 100 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್ ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ.

ಇದನ್ನೂ ಓದಿ: Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

ಚುನಾವಣೆಯ ಮತದಾನವು ಅಂತ್ಯಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಚುನಾವಣೆ ಪ್ರಚಾರ ಹಾಗೂ ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಈ ಸಮಯದಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಗಳು ಬಾಗಿಲಿನಿಂದ ಬಾಗಿಲಿಗೆ ಹೋಗಿ ಮತಯಾಚಿಸುವ ಸಲುವಾಗಿ ಮನೆಯಿಂದ ಮನೆಗೆ ಹೋಗುವುದು ನಿರ್ಬಂಧಿಸಿರುವುದಿಲ್ಲ. ಆದರೆ 5 ಜನರಿಗಿಂತ ಹೆಚ್ಚಿನ ಜನರು ಗುಂಪು ಕೂಡಿಕೊಂಡು ಮನೆಯಿಂದ ಮನೆಗೆ ಹೋಗಿ ಮತಯಾಚಿಸುವುದು ನಿರ್ಬಂಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು. ಈ ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Exit mobile version