ಹೊಸಪೇಟೆ: ರಾಜ್ಯ ವಿಧಾನ ಪರಿಷತ್ತಿನ 03 ಪದವೀಧರರ ಕ್ಷೇತ್ರಕ್ಕೆ ದ್ವೈವಾರ್ಷಿಕ ಚುನಾವಣೆ ಘೋಷಣೆಯಾಗಿದ್ದು, ಮೇ 9ರಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ಈ ಚುನಾವಣೆಯ ಮಾದರಿ ನೀತಿ ಸಂಹಿತೆಯ ಎಲ್ಲಾ ನಿಬಂಧನೆಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಸೂಚನೆ (Vijayanagara News) ನೀಡಿದರು.
ನಗರದ ಜಿಲ್ಲಾಡಳಿತ ಭವನದಲ್ಲಿನ ಕೇಸ್ವಾನ್ ಹಾಲ್‌ನಲ್ಲಿ ಶುಕ್ರವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗವು ರಾಜ್ಯದ ವಿಧಾನ ಪರಿಷತ್‌ಗೆ ಅವಧಿ ಮುಕ್ತಾಯವಾಗುವ ಮೂರು ಶಿಕ್ಷಕರ ಕ್ಷೇತ್ರಗಳ ಜತೆಗೆ ಮೂರು ಪದವೀಧರರ ಕ್ಷೇತ್ರಗಳಿಗೆ ದೈವಾರ್ಷಿಕ ಚುನಾವಣೆಯನ್ನು ಘೋಷಣೆ ಮಾಡಿದೆ. ಈ ಸಂಬಂಧಿತ ಮೇ 9ರಂದು ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ. ನಾಮಪತ್ರಗಳ ಸಲ್ಲಿಕೆಗೆ ಮೇ 16 ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
ನಾಮಪತ್ರಗಳನ್ನು ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ. ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ. ಸದರಿ ಚುನಾವಣೆಯ ಪ್ರಕ್ರಿಯೆಯು ಜೂನ್ 12ರೊಳಗೆ ಮುಕ್ತಯ ಆಗಲಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಲೋಕಸಭೆಗೆ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆ 2024ರ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಈಗಾಗಲೇ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿದ್ದು, ಈಗಾಗಲೇ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆಯ ಎಲ್ಲಾ ನಿಬಂಧನೆಗಳು ವಿಧಾನ ಪರಿಷತ್ತಿನ ಚುನಾವಣೆಗಳಿಗೆ ಅನ್ವಯಿಸುತ್ತವೆ ಎಂದು ತಿಳಿಸಿದರು.
ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿರುತ್ತಾರೆ. ಈ ಚುನಾವಣೆಯ ಸಂಬಂಧ ಭಾರತ ಚುನಾವಣಾ ಆಯೋಗವು ಕಾಲಕಾಲಕ್ಕೆ ಹೊರಡಿಸುವ ಎಲ್ಲಾ ನಿರ್ದೇಶನಗಳನ್ನು ಪಾಲನೆ ಮಾಡಬೇಕು. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಡಿಸಿ ತಿಳಿಸಿದರು.
ಮೇ 6 ಕೊನೆಯ ದಿನ
ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡಲು ಇಚ್ಚಿಸುವ ಅರ್ಹರು ತಮ್ಮ ಹೆಸರನ್ನು ಸದರಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಮೇ 6 ಕೊನೆಯ ದಿನವಾಗಿರುತ್ತದೆ. ಅರ್ಹರು ಆಯಾ ತಾಲೂಕು ಕಚೇರಿಗಳಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಇದೇ ವೇಳೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಇದನ್ನೂ ಓದಿ: IPL 2024 : ಕೊಹ್ಲಿಯ ಸ್ಟ್ರೈಕ್ ರೇಟ್ ಪ್ರಶ್ನಿಸುವವರಿಗೆ ತಕ್ಕ ಪಾಠ ಹೇಳಿದ ಕೈಫ್, ಪಠಾಣ್
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಅನುರಾಧ ಜಿ., ಚುನಾವಣಾ ಶಾಖೆಯ ಮನೋಜ ಲಾಡೆ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.