ಹೊಸಪೇಟೆ: ಆಯಾ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು, ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಯಿಂದ ಗುರುವಾರ ನಡೆದ ಜಿಲ್ಲಾಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯೋಜನೆಗಳ ಅನುಷ್ಠಾನಕ್ಕೆ ಯಾವುದೇ ರೀತಿಯ ಹಣಕಾಸಿನ ಕೊರತೆಯಿಲ್ಲ. ನಿಗದಿಪಡಿಸಿದ ಗುರಿಯನುಸಾರ ಅನುದಾನ ಸದ್ಭಳಕೆಯಾಗಬೇಕು. ಕುಡಿಯುವ ನೀರು ಪೂರೈಕೆ, ರಸ್ತೆ ಸುಧಾರಣೆ, ಶೌಚಾಲಯಗಳ ನಿರ್ಮಾಣ ಸೇರಿದಂತೆ ಮೂಲಭೂತ ಸೌಕರ್ಯ ಕಲ್ಪಿಸುವ ಕಾರ್ಯ ಅನುಷ್ಠಾನಕ್ಕೆ ಅಧಿಕಾರಿಗಳು ಮೊದಲ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.
ಇದನ್ನೂ ಓದಿ: National Tourism Day: ಭಾರತದ ಈ ಅತ್ಯಾಕರ್ಷಕ ಸುಸ್ಥಿರ ಪ್ರವಾಸೋದ್ಯಮ ತಾಣಗಳನ್ನು ನೋಡಿದ್ದೀರಾ?
ಜಿಲ್ಲೆಯಲ್ಲಿನ 110 ಸ್ಲಮ್‌ಗಳಲ್ಲಿ ಬದಲಾವಣೆ ಕಾಣಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಿಯಾಶೀಲರಾಗಿ ಆಯಾ ತಾಲೂಕುಗಳಲ್ಲಿ ಸಂಚರಿಸಿ ಆಯಾ ತಾಲೂಕಿನ ಶಾಸಕರೊಂದಿಗೆ ಚರ್ಚಿಸಿ, ಆಯಾ ಕಡೆಗಳಲ್ಲಿನ ಸ್ಲಮ್‌ಗಳಲ್ಲಿ ಮನೆಗಳ ಬೇಡಿಕೆ, ನೀರಿನ ಸೌಕರ್ಯ ಸೇರಿದಂತೆ ಅಗತ್ಯ ಬೇಡಿಕೆಗಳ ಬಗ್ಗೆ ಕ್ರಿಯಾಯೋಜನೆ ಸಿದ್ದಪಡಿಸಿ 15 ದಿನದ ಒಳಗಡೆ ನೀಡುವಂತೆ ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಶೌಚಾಲಯ ಕಟ್ಟುತ್ತೇವೆ. ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತೇವೆ ಎಂದು ಅಧಿಕಾರಿಗಳು ಸಭೆಯಲ್ಲಿ ವರದಿ ಕೊಡುತ್ತ ಹೋಗುವುದು ಸರಿಯಲ್ಲ ಎಂದು ಸಂಸದ ವೈ ದೇವೇಂದ್ರಪ್ಪ, ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಜಿಲ್ಲಾಡಳಿತದ ನಿರ್ದೇಶನದಂತೆ ಪ್ರತಿಯೊಂದು ಶಾಲೆಯಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ ಒತ್ತು ಕೊಡಲು ಕ್ರಮ ವಹಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.
ಇದನ್ನೂ ಓದಿ: Karnataka Weather: ಉತ್ತರ ಕರ್ನಾಟಕದಲ್ಲಿ ಭಾರಿ ಚಳಿ; ಉಳಿದೆಡೆ ಹೇಗಿದೆ ವಾತಾವರಣ?
ಹಗರಿಬೊಮ್ಮನಹಳ್ಳಿ ಶಾಸಕ ನೇಮರಾಜ್ ನಾಯ್ಕ್ ಮಾತನಾಡಿ, ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗುತ್ತಿರುವಾಗ ಫ್ಯಾಕ್ಟರಿಗಳಿಗೆ ನೀರು ಹರಿಸುವ ಬಗ್ಗೆ ಪರಿಶೀಲಿಸಬೇಕು ಎಂದು ಸಲಹೆ ನೀಡಿದರು. ಹೊರಗುತ್ತಿಗೆ ಆಧಾರದ ಮೇಲೆ ಪಶು ವೈದ್ಯಾಧಿಕಾರಿಗಳನ್ನು ಭರ್ತಿ ಮಾಡಿಕೊಳ್ಳುವ ಬಗ್ಗೆ ಪರಿಶೀಲಿಸಬೇಕು. ಶಾಲೆಗಳಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದು ಹಲವಾರು ಬಾರಿ ತಿಳಿಸಿದ್ದರು ಸಹ ಆ ಕಾರ್ಯವಾಗುತ್ತಿಲ್ಲ. ಈ ಬಗ್ಗೆ ಜಿಲ್ಲೆಯ ಎಲ್ಲಾ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಗಮನ ಹರಿಸಬೇಕು ಎಂದರು ಸಲಹೆ ಮಾಡಿದರು.
ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮೀನುಗಾರಿಕೆ ಇಲಾಖೆ ನಿಷ್ಕ್ರೀಯವಾಗಿದೆ ಎಂದು ಶಾಸಕಿ ಎಂ.ಪಿ.ಲತಾ ಅಸಮಾಧಾನ ವ್ಯಕ್ತಪಡಿಸಿದರು. ನಮ್ಮ ಕ್ಷೇತ್ರದಲ್ಲಿ ಕಂದುರೋಗ ಮತ್ತು ಕಾಲುಬಾಯಿ ಲಸಿಕೆಗೆ ಸಮರ್ಪಕ ವ್ಯವಸ್ಥೆ ಮಾಡಬೇಕು. ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನಿಗದಿಪಡಿಸಿ, ಪಶು ಚಿಕಿತ್ಸಾಲಯಗಳ ನಿರ್ಮಾಣಕ್ಕೆ ಒತ್ತು ಕೊಡಬೇಕು. ನಮ್ಮ ಕ್ಷೇತ್ರದಲ್ಲಿ ತೋಟಗಾರಿಕಾ ಬೆಳೆಗಾರರ ಸಂಖ್ಯೆಗನುಸಾರ ತೋಟಗಾರಿಕಾ ಬೆಳೆಗಳಿಗೆ ಪ್ರೋತ್ಸಾಹ ಧನ ನೀಡಿ ರೈತರಿಗೆ ಉತ್ತೇಜನ ನೀಡಬೇಕು ಎಂದು ತಿಳಿಸಿದರು.
ಕೂಡ್ಲಿಗಿ ಶಾಸಕ ಎನ್.ಟಿ. ಶ್ರೀನಿವಾಸ್ ಮಾತನಾಡಿ, ಕ್ಷೇತ್ರದಲ್ಲಿ ಮೇವು ಬ್ಯಾಂಕ್ ಸ್ಥಾಪನೆಗೆ ಹೆಚ್ಚಿನ ಒತ್ತು ಕೊಡಬೇಕು. ಪಶು ವೈದ್ಯಾಧಿಕಾರಿಗಳ ಕೊರತೆ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ: Superfood Tomato: ಬಲ್ಲಿರಾ ಟೊಮೆಟೊ ಎಂಬ ಹಣ್ಣಿನ ಸದ್ಗುಣಗಳನ್ನು?
ಸಭೆಯಲ್ಲಿ ಶಾಸಕ ಎಚ್.ಆರ್.ಗವಿಯಪ್ಪ, ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನರಾಜ್ ಸಿಂಗ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಷಲನ್, ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಸೇರಿದಂತೆ ಇತರರು ಉಪಸ್ಥಿತರಿದ್ದರು.