ಹೊಸಪೇಟೆ: ಅಭಿವೃದ್ಧಿ (Development) ಮತ್ತು ಸಾಮಾಜಿಕ ನ್ಯಾಯದ (Social justice) ಮೂಲ ಮಂತ್ರದೊಂದಿಗೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ (Budget) ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು, ಕಲ್ಯಾಣ ಕರ್ನಾಟಕ ಭಾಗ ಹಾಗೂ ಆ ವ್ಯಾಪ್ತಿಯಡಿ ಬರುವ ವಿಜಯನಗರ ಜಿಲ್ಲೆಯ ಅಭಿವೃದ್ಧಿಗೂ ಬಜೆಟ್‌ನಲ್ಲಿ ಒತ್ತು ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಐದು ಸಾವಿರ ಕೋಟಿ ರೂ. ಮೀಸಲಿಟ್ಟಿರುವುದಾಗಿ ತಿಳಿಸಿದ್ದು, ವಿಜಯನಗರ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚು ಪಾಲು ಪಡೆಯಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Canada Open: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸಿಂಧು,ಲಕ್ಷ್ಯ ಸೇನ್
ಸಮರ್ಪಕ ಕುಡಿಯುವ ನೀರು ಪೂರೈಕೆಗೆ ವಿಜಯನಗರ ಸೇರಿ ಹತ್ತು ಜಿಲ್ಲೆಗಳಿಗೆ 770 ಕೋಟಿ ರೂ. ಬಜೆಟ್ ನಲ್ಲಿ ಒದಗಿಸಲಾಗಿದೆ ಇದು ಸ್ವಾಗತಾರ್ಹ ಎಂದು ಅವರು ಹೇಳಿದ್ದಾರೆ.
ಆಕಾಂಕ್ಷಿ ತಾಲೂಕುಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ. ಬಜೆಟ್‌ನಲ್ಲಿ ಮೀಸಲಿಟ್ಟಿದ್ದು ವಿಜಯನಗರ ಜಿಲ್ಲೆಗೂ ಅನುದಾನ ದೊರೆಯಲಿದೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಸಮುದಾಯ ಶೌಚಾಲಯ ಸಂಕೀರ್ಣ ತಲಾ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುವುದಾಗಿ ತಿಳಿಸಲಾಗಿದೆ. ಇದರಡಿ ವಿಜಯನಗರಕ್ಕೂ ನೆರವು ದೊರೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.
ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಪ್ರಮಾಣ ಹೆಚ್ಚಾಗಿರುವುದರಿಂದ ನವಲಿ ಬಳಿ ಸಮಾನಾಂತರ ಜಲಾಶಯ ಅನುಷ್ಠಾನ ಪ್ರಸ್ತಾಪ ಬಜೆಟ್‌ನಲ್ಲಿ ಮಾಡಿದ್ದಾರೆ. ಹಂಪಿ ಸೇರಿ ಕಲ್ಯಾಣ ಕರ್ನಾಟಕ ಭಾಗದ ಪ್ರವಾಸಿ ತಾಣಗಳ ಅಭಿವೃದ್ಧಿಗೆ 75 ಕೋಟಿ ರೂ. ಮೀಸಲಿಟ್ಟಿದ್ದಾರೆ. ಹಂಪಿಯಲ್ಲಿ ಧ್ವನಿ ಬೆಳಕು ಪ್ರದರ್ಶನ ಯೋಜನೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Rain News : ಭಾರಿ ಮಳೆಗೆ ಸೋರುತಿಹುದು ಸುರಂಗ ಮಾಳಿಗೆ; ಗುಡ್ಡದ ಮಣ್ಣು ಕುಸಿತ
ಶಾಲಾ ಕೊಠಡಿಗಳ ದುರಸ್ತಿಗೆ 100 ಕೋಟಿ ರೂ. ಮೀಸಲಿಟ್ಟಿದ್ದು ವಿಜಯನಗರಕ್ಕೆ ಹೆಚ್ಚು ಅನುದಾನ ಪಡೆಯಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.