ಬೆಂಗಳೂರು: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿಗೆ ತೀವ್ರ ಹಿನ್ನಡೆಯಾಗಿದೆ. ವಿನಯ್ ಕುಲಕರ್ಣಿ ವಿರುದ್ಧ ಹೊರಿಸಿರುವ ಆರೋಪ ಸರಿ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಈ ಮೂಲಕ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ಸೋಮವಾರ ಎತ್ತಿ ಹಿಡಿದಿದೆ.
ವಿಚಾರಣಾ ನ್ಯಾಯಾಲಯದ ತೀರ್ಪನ್ನು ಈ ಹಿಂದೆ ಎತ್ತಿ ಹಿಡಿದಿದ್ದ ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನ್ಯಾಯಮೂರ್ತಿಗಳಾದ ಪಿ.ವಿ. ಸಂಜಯ್ ಕುಮಾರ್ ಮತ್ತು ಅಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ಪೀಠ ನಿರಾಕರಿಸಿದೆ. ಸಿಬಿಐ ವಿಶೇಷ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಕೂಡ ಎತ್ತಿ ಹಿಡಿದಿತ್ತು.
ತಮ್ಮ ವಿರುದ್ಧ ಹೊರಿಸಲಾಗಿರುವ ದೋಷಾರೋಪ ಮತ್ತು ವಿಶೇಷ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಏ.8ರಂದು ಪ್ರಕರಣದ ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ನ್ಯಾಯಪೀಠ, ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಚಾರ್ಜ್‌ಶೀಟ್ ಕೈಬಿಡಲು ನಿರಾಕರಿಸಿತ್ತು. ಹೀಗಾಗಿ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಸುಪ್ರೀಂ ಕೋರ್ಟ್ ಕೂಡ ವಿಚಾರಣಾ ನ್ಯಾಯಾಲಯದ ತೀರ್ಪನ್ನೇ ಎತ್ತಿ ಹಿಡಿದಿದೆ.
ಇದನ್ನೂ ಓದಿ | R Ashok: ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ ಎಂದ ಆರ್.ಅಶೋಕ್
ಏನಿದು ಪ್ರಕರಣ?
ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಅವರನ್ನು 2016ರ ಜೂನ್ 15ರಂದು ಬರ್ಬರವಾಗಿ ಹತ್ಯೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ 2020ರ ನವೆಂಬರ್‌ನಲ್ಲಿ ವಿನಯ್ ಕುಲಕರ್ಣಿ ಅವರ ಬಂಧನವಾಗಿತ್ತು. ಅವರು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಒಂಬತ್ತು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ಒಟ್ಟು 21 ಆರೋಪಿಗಳ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.
ಕೊಲೆ ಪ್ರಕರಣದಲ್ಲಿ ಆರೋಪಿಯಾದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಈ ಹಿಂದೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಒಂದು ವೇಳೆ ಧಾರವಾಡಕ್ಕೆ ತೆರಳಿದರೆ ಜಾಮೀನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿತ್ತು. ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಕಂಡರೂ ಶಾಸಕನಿಗೆ ಧಾರವಾಡ ಜಿಲ್ಲೆ ಪ್ರವೇಶದ ಮೇಲಿರುವ ನಿರ್ಬಂಧ ತೆರವು ಮಾಡಿಲ್ಲ.